ಮೊಬೈಲ್ ಮೂಲಕ ಹಿಂದುಳಿದ ವರ್ಗಗಳ ಸಮೀಕ್ಷೆ: ಪ್ರತಿಯೊಬ್ಬರ ಸಹಕಾರಕ್ಕೆ ಪ್ರಿಯಾಂಕ್ ಖರ್ಗೆ ಮನವಿ

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಡೆಯಲಿರುವ ಈ ಸಮೀಕ್ಷೆಯು, ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿದ್ದು, ಪಡಿತರ ಚೀಟಿ ಮತ್ತು ಆಧಾರ್ ಸಂಖ್ಯೆಯನ್ನು ಆಧರಿಸಿ ಮಾಹಿತಿ ಸಂಗ್ರಹಿಸಲಾಗುತ್ತದೆ.;

Update: 2025-09-06 14:06 GMT

ಸಚಿವ ಪ್ರಿಯಾಂಕ್‌ ಖರ್ಗೆ

Click the Play button to listen to article

ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅರಿಯುವ ಮಹತ್ವದ ಉದ್ದೇಶದಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಒಂದು ಬೃಹತ್ ಸಮೀಕ್ಷೆಯನ್ನು ಹಮ್ಮಿಕೊಂಡಿದೆ. ಈ ಸಮೀಕ್ಷೆಯ ಯಶಸ್ಸಿಗೆ ರಾಜ್ಯದ ಪ್ರತಿಯೊಬ್ಬ ನಾಗರಿಕನ ಸಹಕಾರ ಅತ್ಯಗತ್ಯ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮನವಿ ಮಾಡಿದ್ದಾರೆ. ಈ ಸಮೀಕ್ಷೆಯು ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ವಿವಿಧ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕೆ ವೈಜ್ಞಾನಿಕ ಬುನಾದಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಮೀಕ್ಷೆಯನ್ನು ಸರ್ಕಾರದ ನಿಯೋಜಿತ ಗಣತಿದಾರರು ಮೊಬೈಲ್ ಆಪ್ ಮೂಲಕ ನಡೆಸಲಿದ್ದು, ಕಲಬುರಗಿ ಜಿಲ್ಲೆಯಲ್ಲಿ, ಜೆಸ್ಕಾಂ (GESCOM) ವತಿಯಿಂದ ಪ್ರತಿ ಮನೆಗೂ ಯುನಿಕ್ ಹೌಸ್‌ಹೋಲ್ಡ್ ಐಡೆಂಟಿಫಿಕೇಶನ್ (UHID) ಸಂಖ್ಯೆಯನ್ನು ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಡೆಯಲಿರುವ ಈ ಸಮೀಕ್ಷೆಯು, ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿದ್ದು, ಪಡಿತರ ಚೀಟಿ ಮತ್ತು ಆಧಾರ್ ಸಂಖ್ಯೆಯನ್ನು ಆಧರಿಸಿ ಮಾಹಿತಿ ಸಂಗ್ರಹಿಸಲಾಗುತ್ತದೆ.

ದಾಖಲೆ ಸಿದ್ಧವಿರಿಸಲು ಕೋರಿಕೆ

ಸಮೀಕ್ಷೆಯು ಸುಗಮವಾಗಿ ಮತ್ತು ವೇಗವಾಗಿ ನಡೆಯಲು, ಸಾರ್ವಜನಿಕರು ತಮ್ಮ ಪಡಿತರ ಚೀಟಿ, ಆಧಾರ್ ಕಾರ್ಡ್ ಅಥವಾ ಆಧಾರ್ ಸಂಖ್ಯೆ, ಮತದಾರರ ಗುರುತಿನ ಚೀಟಿ, ಮತ್ತು ವಿಕಲಚೇತನರಾಗಿದ್ದರೆ ಯುಡಿಐಡಿ (UDID) ಕಾರ್ಡ್ ಅಥವಾ ಅಂಗವಿಕಲರ ಪ್ರಮಾಣಪತ್ರವನ್ನು ಸಿದ್ಧವಾಗಿಟ್ಟುಕೊಳ್ಳಲು ಸಚಿವರು ಕೋರಿದ್ದಾರೆ. ಸಮೀಕ್ಷೆಯ ಸಂದರ್ಭದಲ್ಲಿ ಕುಟುಂಬದ ಸದಸ್ಯರ ಇ-ಕೆವೈಸಿ ಮಾಡಲಾಗುವುದರಿಂದ, ಪ್ರತಿಯೊಬ್ಬರೂ ತಮ್ಮ ಆಧಾರ್ ಕಾರ್ಡ್‌ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ. ಆಧಾರ್‌ಗೆ ಲಿಂಕ್ ಆದ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ (OTP) ಯನ್ನು ಗಣತಿದಾರರಿಗೆ ನೀಡಬೇಕಾಗುತ್ತದೆ. ಒಂದು ವೇಳೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಚಾಲ್ತಿಯಲ್ಲಿ ಇಲ್ಲದಿದ್ದರೆ, ಹತ್ತಿರದ ಆಧಾರ್ ನೋಂದಣಿ ಕೇಂದ್ರಕ್ಕೆ ಭೇಟಿ ನೀಡಿ ಹೊಸ ಸಂಖ್ಯೆಯನ್ನು ನೋಂದಾಯಿಸಿಕೊಳ್ಳಬೇಕು.

ಸಾರ್ವಜನಿಕರು ತಮ್ಮ ವಿದ್ಯಾರ್ಹತೆ, ಕೌಶಲ್ಯ ತರಬೇತಿಯ ಅಗತ್ಯತೆ, ಆದಾಯ, ಕುಟುಂಬದ ಸ್ಥಿರ ಮತ್ತು ಚರಾಸ್ತಿ ವಿವರಗಳು, ಧರ್ಮ, ಜಾತಿ, ಉಪಜಾತಿ ಹಾಗೂ ಕುಲಕಸುಬು ಮುಂತಾದ ಎಲ್ಲಾ ವಿವರಗಳನ್ನು ನಿಖರವಾಗಿ ನೀಡಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ. ಸಮೀಕ್ಷೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು, ಪದವಿ ವಿದ್ಯಾರ್ಥಿಗಳ ಮೂಲಕ "ಸಮೀಕ್ಷಾ ಪೂರ್ವ ಜಾಗೃತಿ ಅಭಿಯಾನ"ವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ, ಸಾರ್ವಜನಿಕರು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಬಹುದು ಅಥವಾ ಆಯೋಗದ ಅಧಿಕೃತ ವೆಬ್‌ಸೈಟ್ kscbc.karnataka.gov.in ಗೆ ಭೇಟಿ ನೀಡಬಹುದು.

Tags:    

Similar News