ಪತ್ನಿ ಕಿರುಕುಳ ಆರೋಪ: ರಾಜ ಭವನದ ಬಳಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಟೆಕ್ಕಿ
ಪತ್ನಿ ಕಿರುಕುಳ ನೀಡುತ್ತಿರುವ ಬಗ್ಗೆ ಪೊಲೀಸರು ದೂರು ಸ್ವೀಕರಿಸಿಲ್ಲ. ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ನನಗೆ ಬದುಕಲು ದಾರಿ ಇಲ್ಲ, ಸಾಯುವುದೊಂದೇ ದಾರಿ ಎಂದು ಜುಹೆಲ್ ಅಹ್ಮದ್ ಆರೋಪಿಸಿದ್ದಾರೆ.;
ಪತ್ನಿ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿ ಟೆಕ್ಕಿಯೊಬ್ಬ ರಾಜಭವನದ ಮುಂದೆಯೇ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಜುಹೆಲ್ ಅಹ್ಮದ್ ಮೂಲತಃ ಬೆಂಗಳೂರಿನ ಆರ್.ಟಿ ನಗರದ ನಿವಾಸಿ. ಹೆಬ್ಬಾಳದ ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿದ್ದಾರೆ. ಪತ್ನಿ ಚಿಕ್ಕಬಳ್ಳಾಪುರದಲ್ಲಿ ವಾಸವಾಗಿದ್ದಾರೆ.
ರಾಜಕಾರಣಿಯೊಬ್ಬರ ಹೇಳಿಕೆ ಪಡೆಯಲು ಸಂಜೆ 4.30ರ ಸುಮಾರಿಗೆ ಮಾಧ್ಯಮ ಪ್ರತಿನಿಧಿಗಳು ರಾಜಭವನದ ಬಳಿ ತೆರಳಿದ್ದರು. ಅದೇ ವೇಳೆ ಅಲ್ಲಿಗೆ ಬಂದ ಜುಹೆಲ್, ಏಕಾಏಕಿ ಪ್ಲಾಸ್ಟಿಕ್ ಬಾಟಲಿಯಲ್ಲಿ ತಂದಿದ್ದ ಪೆಟ್ರೋಲ್ ಮೈ ಮೇಲೆ ಸುರಿದುಕೊಂಡರು. ಇದನ್ನು ನೋಡಿದ ಪತ್ರಕರ್ತರು ಬಾಟಲಿಯನ್ನು ಅವರಿಂದ ಕಸಿದುಕೊಂಡರು. ಬಳಿಕ ಅವರನ್ನು ಪೊಲೀಸ್ ವಶಕ್ಕೆ ಒಪ್ಪಿಸಿದರು. ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದಡಿ ವಿಧಾನಸೌಧ ಠಾಣೆ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪತ್ನಿ ಕಿರುಕುಳ ನೀಡುತ್ತಿರುವ ಬಗ್ಗೆ ಪೊಲೀಸರು ದೂರು ಸ್ವೀಕರಿಸಿಲ್ಲ. ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ನನಗೆ ಬದುಕಲು ದಾರಿ ಇಲ್ಲ, ಸಾಯುವುದೊಂದೇ ದಾರಿ ಎಂದು ಜುಹೆಲ್ ಅಹ್ಮದ್ ಆರೋಪಿಸಿದ್ದಾರೆ.
ಕೆಲ ದಿನಗಳ ಹಿಂದೆ ಪತ್ನಿ ನೀಡಿದ ದೂರು ಆಧರಿಸಿ ಚಿಕ್ಕಬಳ್ಳಾಪುರ ಪೊಲೀಸರು ಅಹ್ಮದ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಎಸಗಿದ ಆರೋಪದಡಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498-ಎ ಅಡಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
(ಆತ್ಮಹತ್ಯೆಗಳನ್ನು ತಡೆಯಲು ಸಾಧ್ಯ. ಸಹಾಯಕ್ಕಾಗಿ ದಯವಿಟ್ಟು ಆತ್ಮಹತ್ಯೆ ತಡೆ ಸಹಾಯವಾಣಿಗಳನ್ನು ಸಂಪರ್ಕಿಸಿ:1ಲೈಫ್: 7893078930; ಲೈಫ್‌ಲೈನ್ +91-9163940404 , +91-9088030303; ಸುಮೈತ್ರಿ - 011-23389090 , +91-9315767849 ; ನೇಹಾ ಆತ್ಮಹತ್ಯೆ ತಡೆ ಕೇಂದ್ರ : 044-24640050; ಆಸರಾ ಸಹಾಯವಾಣಿ ಆತ್ಮಹತ್ಯೆ ತಡೆ, ಭಾವನಾತ್ಮಕ ಬೆಂಬಲ ಮತ್ತು ಆಘಾತ ನೆರವು ಕೇಂದ್ರ: 91-9820466726; ಕಿರಣ್, ಮಾನಸಿಕ ಆರೋಗ್ಯ ಪುನರ್ವಸತಿ ಕೇಂದ್ರ: 1800-599-0019; ದಿಶಾ: 0471-2552056; ಮೈತ್ರಿ: 0484-2540530; ಮತ್ತು ಸ್ನೇಹಾ ಆತ್ಮಹತ್ಯೆ ತಡೆ ಸಹಾಯವಾಣಿ: 044-24640050)