ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ವಿರುದ್ಧದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ರದ್ದು
ರಾಜಕೀಯ ಭಾಷಣ ಮಾಡುವ ವೇಳೆ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ವಿದ್ಯಾರ್ಥಿ ವೃಂದಕ್ಕೆ ಹಲವು ಉಚಿತ ಯೋಜನೆ ಜಾರಿಗೊಳಿಸಲಾಗುವುದು ಎಂಬ ಭರವಸೆ ನೀಡುವುದರ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದರು ಎಂದು ಆರೋಪಿಸಲಾಗಿತ್ತು.
ನೀತಿ ಸಂಹಿತಿ ಉಲ್ಲಂಘನೆ ಆರೋಪದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಕಳೆದ ಲೋಕಸಭೆ ಚುನಾವಣೆಯ ಸಮಯದಲ್ಲಿ ಕಾಪು ತಾಲೂಕಿನ ಕಟಪಾಡಿ ಗ್ರಾಮದ ಖಾಸಗಿ ಕಾಲೇಜು ಆವರಣದಲ್ಲಿ ರಾಜಕೀಯ ಭಾಷಣ ಮಾಡುವ ವೇಳೆ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ವಿದ್ಯಾರ್ಥಿ ವೃಂದಕ್ಕೆ ಹಲವು ಉಚಿತ ಯೋಜನೆ ಜಾರಿಗೊಳಿಸಲಾಗುವುದು ಎಂಬ ಭರವಸೆ ನೀಡುವುದರ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಚುನಾವಣಾ ಸಂಚಾರ ಜಾಗೃತದಳದ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಇದೀಗ ಈ ದೂರನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ದೂರನ್ನು ರದ್ದುಪಡಿಸುವಂತೆ ಕೋರಿ ಸಂಸದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ಅರ್ಜಿದಾರರ ವಿರುದ್ಧ ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಈ ಅಧಿಕಾರ ವ್ಯಾಪಿ ಜಾಗೃತ ದಳ ಹೊಂದಿಲ್ಲ. ಆದ್ದರಿಂದ ಈ ಖಾಸಗಿ ದೂರನ್ನು ರದ್ದುಪಡಿಸಬೇಕು ಎಂದು ಕೋರಿದರು. ಈ ವಾದ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ದೂರನ್ನು ರದ್ದುಪಡಿಸಿತು.
ಏನಿದು ಪ್ರಕರಣ?
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಗ್ರಾಮದ ಖಾಸಗಿ ಕಾಲೇಜು ಆವರಣದಲ್ಲಿ 2024ರ ಮಾರ್ಚ್ 30ರಂದು ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಅವರು ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ ಭಾಗವಹಿಸಿದ್ದಲ್ಲದೆ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ವಿದ್ಯಾರ್ಥಿ ವೃಂದಕ್ಕೆ ಹಲವು ಉಚಿತ ಯೋಜನೆ ಜಾರಿಗೊಳಿಸಲಾಗುವುದು ಎಂಬ ಭರವಸೆ ನೀಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಸಂಚಾರ ಜಾಗೃತದಳದ ಅಧಿಕಾರಿಯು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ 2024ರ ಏಪ್ರಿಲ್ 4ರಂದು ಖಾಸಗಿ ದೂರು ದಾಖಲಿಸಿದ್ದರು. ದೂರನ್ನು ಪರಿಗಣಿಸಿದ್ದ ನ್ಯಾಯಾಲಯ, 'ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಬೇಕು' ಎಂದು ಸ್ಥಳೀಯ ಠಾಣಾ ಪೊಲೀಸರಿಗೆ ನಿರ್ದೇಶಿಸಿತ್ತು. ಅಂತೆಯೇ, ಸಂಸದ ಕೋಟ ಶ್ರಿನಿವಾಸ ಪೂಜಾರಿ ಹಾಗೂ ಇತರ ಮೂವರು ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಿತ್ತು.