ಕಾಂಗ್ರೆಸ್ ಸರ್ಕಾರಕ್ಕೂ ಕಾಡುತ್ತಿರುವ ಕಮಿಷನ್ ಆರೋಪ; ಬಿಜೆಪಿ ಅವಧಿಗಿಂತಲೂ ಹೆಚ್ಚು ಬ್ರಹ್ಮಾಂಡ ಭ್ರಷ್ಟಾಚಾರ?
ಬಿಜೆಪಿ ಅವಧಿಯಲ್ಲಿ ಶೇ 40 ರಷ್ಟು ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘವೇ ಹಾಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬ್ರಹ್ಮಾಂಡ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದೆ.;
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದ್ದ ಭ್ರಷ್ಟಾಚಾರ, ಗುತ್ತಿಗೆ ಕಾಮಗಾರಿಗಳಲ್ಲಿ ಕಮಿಷನ್ ಆರೋಪ ಇದೀಗ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವನ್ನೂ ಬೆನ್ನತ್ತಿದೆ.
ಬಿಜೆಪಿ ಅವಧಿಯಲ್ಲಿ ಶೇ 40 ರಷ್ಟು ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘವೇ ಹಾಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬ್ರಹ್ಮಾಂಡ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದೆ. ಬಿಜೆಪಿ ಅವಧಿಗಿಂತಲೂ ಅತಿ ಹೆಚ್ಚು ಭ್ರಷ್ಟಾಚಾರ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿದೆ ಎಂದು ದೂರಿರುವುದು ಪ್ರತಿಪಕ್ಷ ಬಿಜೆಪಿಗೆ ದೊಡ್ಡ ಅಸ್ತ್ರ ಕೊಟ್ಟಂತಾಗಿದೆ.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರತಿಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ಪಕ್ಷವು ಗುತ್ತಿಗೆದಾರರ ಸಂಘದ ಕಮಿಷನ್ ಆರೋಪವನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಅಂದು ಆಡಳಿತ ನಡೆಸಿದ್ದ ಬಿಜೆಪಿ ಪಕ್ಷ ಇದೀಗ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತಿದೆ. ಕಾಂಗ್ರೆಸ್‌ನಲ್ಲೂ ಭ್ರಷ್ಟಾಚಾರ ಮಿತಿ ಮೀರಿದೆ ಎಂಬ ಗುತ್ತಿಗೆದಾರರ ಆರೋಪವೇ ಬಿಜೆಪಿ ಪ್ರತ್ಯಾಸ್ತ್ರವಾಗಿ ಸಿಕ್ಕಂತಾಗಿದೆ.
ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕ ಭ್ರಷ್ಟಾಚಾರ
ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಈ ಹಿಂದಿನ ಬಿಜೆಪಿ ಅವಧಿಗಿಂತ ಹೆಚ್ಚು ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬ ರಾಜ್ಯ ಗುತ್ತಿಗೆದಾರರ ಸಂಘದ ಆರೋಪ ಸಂಚಲನ ಮೂಡಿಸಿದೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯಾದ್ಯಂತ ಮೂವರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದು, ಶೇ 50 ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂಬ ಬಿಜೆಪಿಯ ನಾಯಕರ ಹೇಳಿಕೆಗಳಿಗೆ ಗುತ್ತಿಗೆದಾರರ ಸಂಘದ ಆರೋಪ ಪುಷ್ಠಿ ನೀಡುವಂತಿದೆ.
ಮಾ.1 ರಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ಬಿಜೆಪಿಗಿಂತ ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ ಎಂದು ದೂರಿರುವುದು ಬಿಜೆಪಿ ಕೈಗೆ ದೊಣ್ಣೆ ಕೊಟ್ಟಂತಾಗಿದೆ.
ಗುತ್ತಿಗೆದಾರರ ಆಸ್ತಿ ಮುಟ್ಟುಗೋಲು
ಸರ್ಕಾರದ ಕಾಮಗಾರಿಗಳನ್ನು ಪಡೆದ ಗುತ್ತಿಗೆದಾರರಿಗೆ ರಾಜ್ಯ ಸರ್ಕಾರ ಬಾಕಿ ಪಾವತಿಸದ ಕಾರಣ ಅವರ ಬದುಕು ಅತಂತ್ರವಾಗಿದೆ. ಸಾಲ ನೀಡಿದ ಬ್ಯಾಂಕ್, ಲೇವಾದೇವಿದಾರರು ಗುತ್ತಿಗೆದಾರರ ಮನೆ, ಮಠ, ಆಸ್ತಿ-ಪಾಸ್ತಿಮುಟ್ಟುಗೋಲು ಹಾಕಿಕೊಳ್ಳುತ್ತಿರುವ ಸಂಗತಿಯನ್ನು ಗುತ್ತಿಗೆದಾರರ ಸಂಘ ಸರ್ಕಾರದ ಗಮನಕ್ಕೆ ತಂದಿದೆ.
ಕೆಲ ಗುತ್ತಿಗೆದಾರರು ಬ್ಯಾಂಕ್‌ಗಳಲ್ಲಿ ಸಾಲ ತಂದು ಕಾಮಗಾರಿಗಳಿಗೆ ಬಳಸಿದರೆ, ಇನ್ನೂ ಕೆಲವರು ಮನೆಯಲ್ಲಿಟ್ಟಿದ್ದ ಒಡವೆಗಳನ್ನು ಅಡವಿಟ್ಟು ಕಾಮಗಾರಿಗಳಿಗೆ ಹಣ ಬಳಸಿದ್ದಾರೆ. ಆದರೆ, ಸರ್ಕಾರ ಮಾತ್ರ ಗುತ್ತಿಗೆ ಕಾಮಗಾರಿಗಳ ಹಣ ಬಿಡುಗಡೆಗೆ ವಿಳಂಬ ಮಾಡುತ್ತಿದೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದೆ.
ಗುತ್ತಿಗೆದಾರರಿಗೆ ರಾಜ್ಯ ಸರ್ಕಾರ 32 ಸಾವಿರ ಕೋಟಿ ಹಣ ಬಾಕಿ ಉಳಿಸಿಕೊಂಡಿರುವುದರಿಂದ ಗುತ್ತಿಗೆದಾರರ ಪರಿಸ್ಥಿತಿ ಅಯೋಮಯವಾಗಿದೆ.
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಕಮಿಷನ್ ಆರೋಪ ಮುನ್ನೆಲೆಗ ಬಂದಿತ್ತು. ಪರಿಣಾಮ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ತಲೆದಂಡವಾಗಿತ್ತು. ಇದೇ ಕಮಿಷನ್ ಆರೋಪವನ್ನು ಕಾಂಗ್ರೆಸ್ ಪಕ್ಷ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡು ಅಧಿಕಾರಕ್ಕೇರಿತು.
ಪ್ರಸಕ್ತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಗುತ್ತಿಗೆದಾರರ ಆತ್ಮಹತ್ಯೆ, ಶೇ 50 ಕಮಿಷನ್ ಆರೋಪವು ಸರ್ಕಾರಕ್ಕೆ ಕಂಟಕವಾಗಿ ಪರಿಣಮಿಸಿದೆ.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ದಾವಣಗೆರೆ ಮೂಲದ ಗುತ್ತಿಗೆದಾರ ಜಿ.ಪ್ರಸನ್ನ ಅವರು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್‌ಡಿಸಿಎಲ್)ನಲ್ಲಿ ಕಾಮಗಾರಿ ಬಿಲ್ ಪಾವತಿಸದ ಕಾರಣ ಸಂತೇಬೆನ್ನೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್‌ನೋಟ್‌ನಲ್ಲಿ ಅಧಿಕಾರಿಗಳ ಭ್ರಷ್ಟಾಚಾರದ ಬಗ್ಗೆ ಉಲ್ಲೇಖಿಸಿದ್ದರು.
ತುಮಕೂರಿನ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರ ಟಿ.ಎನ್.ಪ್ರಸಾದ್ ಎಂಬುವರು ಕಾಮಗಾರಿಗಳ ಬಾಕಿ ಬಿಲ್ ನೀಡದ ಕಾರಣ ದೇವರಾಯನದುರ್ಗದ ಅತಿಥಿ ಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತುಮಕೂರಿನ ಪಾವಗಡದ ಗುತ್ತಿಗೆದಾರ ಸುಜಿತ್ ಎಂಬುವರು ಗುಣಮಟ್ಟದ ರಸ್ತೆ ಕಾಮಗಾರಿ ಮುಗಿಸಿದರೂ ವಿಶ್ವೇಶ್ವರಯ್ಯ ಜಲ ನಿಗಮವು ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಎಚ್ಚರಿಕೆ ನೀಡಿದ್ದರು. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ ಎಂಬಾತ ಕಾಮಗಾರಿಯ ಟೆಂಡರ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ್ದರಿಂದ ಬೀದರ್ ಗುತ್ತಿಗೆದಾರ ಸಚಿನ್ ಪಾಂಚಾಳ್ ಎಂಬಾತ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಂದು ಸಿಎಂ, ಡಿಸಿಎಂ ಜೊತೆ ಮಾತುಕತೆ
ಗುತ್ತಿಗೆ ಕಾಮಗಾರಿಗಳ 32 ಸಾವಿರ ಕೋಟಿ ಬಾಕಿ ಹಣ ಪಾವತಿಸದಿದ್ದರೆ ರಾಜ್ಯಪಾಲರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ದೂರು ನೀಡುವುದಾಗಿ ಪತ್ರ ಬರೆದ ಬೆನ್ನಲ್ಲೇ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಜೊತೆ ಸರ್ಕಾರ ಮಾತುಕತೆಗೆ ಮುಂದಾಗಿದೆ.
ಇಂದು(ಮಾ. 3) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಲಿರುವ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ನಿಯೋಗ ಬಾಕಿ ಹಣ ಬಿಡುಗಡೆಗೆ ಒತ್ತಾಯಿಸಲಿದೆ.
ಸೋಮವಾರ ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು, ಮಧ್ಯಾಹ್ನ 2 ಗಂಟೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನಿಯೋಗದೊಂದಿಗೆ ಭೇಟಿ ಮಾಡಲಾಗುವುದು ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಅವರು ʼದ ಫೆಡರಲ್ ಕರ್ನಾಟಕʼಕ್ಕೆ ತಿಳಿಸಿದರು.
ಲೋಕೋಪಯೋಗಿ, ಜಲ ಸಂಪನ್ಮೂಲ, ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ನಗರಾಭಿವೃದ್ಧಿ ಇಲಾಖೆಯಲ್ಲಿ ಕಾಮಗಾರಿ ಪೂರೈಸಿರುವ ಗುತ್ತಿಗೆದಾರರಿಗೆ ಸರ್ಕಾರ ಬಿಲ್ ಬಾಕಿ ಉಳಿಸಿಕೊಂಡಿದೆ ಎಂದು ತಿಳಿದು ಬಂದಿದೆ.