Micro Finance | ಮೈಕ್ರೋ ಫೈನಾನ್ಸ್ ಮುಖ್ಯಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಖಡಕ್ ಎಚ್ಚರಿಕೆ
ಈ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಲು ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.;
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಶನಿವಾರ ಸಭೆ ನಡೆಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಎಸಿಎಸ್ ಅತೀಕ್ ಅಹಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಗೃಹ ಇಲಾಖೆ, ಒಳಾಡಳಿತ, ಕಂದಾಯ, ಗುಪ್ತಚರ, ಸಹಕಾರ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಸಚಿವರು, ಅಧಿಕಾರಿಗಳು ಮತ್ತು ಬ್ಯಾಂಕ್ ಮತ್ತು ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳೊಂದಿಗೆ ಮೊದಲ ಹಂತದ ಚರ್ಚೆ ನಡೆಸಿದ ಸಿಎಂ, ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳಿಗೆ ಹಲವು ಕಠಿಣ ಪ್ರಶ್ನೆಗಳನ್ನು ಕೇಳಿದರು.
ಫೈನಾನ್ಸ್ ಕಂಪನಿಗಳ ಮುಖ್ಯಸ್ಥರಿಗೆ ತರಾಟೆ
ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ? ಎಂದು ನೋಂದಾಯಿತ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಖಾರವಾಗಿ ಪ್ರಶ್ನಿಸಿದರು.
ಅಲ್ಲದೆ, ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ?, ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ?, ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?ಆರ್ಬಿಐ ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?, ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ ಏಕೆ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇಪದೇ ಸಾಲ ಕೊಡುವುದು ತಪ್ಪುತ್ತಿತ್ತು ಅಲ್ಲವೇ? ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಸಿಎಂ ಹಣಕಾಸು ಸಂಸ್ಥೆಗಳ ಮುಖ್ಯಸ್ಥರಿಗೆ ಖಡಕ್ ಎಚ್ಚರಿಕೆ ನೀಡಿದರು.
ಇದೇ ವೇಳೆ ಸಭೆಯಲ್ಲಿದ್ದ ಆರ್ಬಿಐ ಅಧಿಕಾರಿಗಳನ್ನೂ ತರಾಟೆಗೆ ತೆಗೆದುಕೊಂಡು ಸಿಎಂ, ಆರ್ ಬಿ ಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ? ಎಂದು ಪ್ರಶ್ನಿಸಿದರು.
ಹಣಕಾಸು ಸಂಸ್ಥೆಗಳ ಎಂಡಿಗಳ ವಿರುದ್ಧ ಕ್ರಮ
ಅಧಿಕೃತ ಪರವಾನಗಿ ಪಡೆದ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡುತ್ತಿಲ್ಲ; ಬದಲಾಗಿ ಅನಧಿಕೃತ ಹಣಕಾಸು ಸಂಸ್ಥೆಗಳು ಸಾಲ ವಸೂಲಿಗೆ ಅಕ್ರಮ ಮಾರ್ಗ ಹಿಡಿಯುತ್ತಿವೆ ಎಂದು ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರು ಸಿಎಂಗೆ ಸಮಜಾಯಿಷಿ ನೀಡಲು ಮುಂದಾದರು. ಆದರೆ, ಅದಕ್ಕೆ ಸಭೆಯಲ್ಲಿದ್ದ ಸಚಿವ ಕೃಷ್ಣಬೈರೇಗೌಡರು, ಎಚ್.ಕೆ.ಪಾಟೀಲ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಕರಾರು ವ್ಯಕ್ತಪಡಿಸಿ, ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್ ನಲ್ಲಿ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಾವು ನಿಯಮ ಉಲ್ಲಂಘಿಸುವ ಕಂಪನಿ ಎಂ.ಡಿ ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಚಿವರು ಸಭೆಯಲ್ಲಿ ಗುಡುಗಿದರು.
ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲೇ ಕಠಿಣ ಎಚ್ಚರಿಕೆ ನೀಡಿದರು.
ಮೊದಲ ಹಂತದ ಸಭೆ ಬಳಿಕ ಬ್ಯಾಂಕಿಂಗ್, ಫೈನಾನ್ಸ್, ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳನ್ನು ಸಭೆಯಿಂದ ಹೊರ ಕಳಿಸಿ, ಕಾನೂನು ಇಲಾಖೆ, ಗೃಹ ಇಲಾಖೆ, ಕಂದಾಯ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಎರಡನೇ ಹಂತದ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದರು.
ಮೈಕ್ರೋ ಫೈನಾನ್ಸ್ ಕಂಪನಿಗಳ ಶೋಷಣೆ, ಶೋಷಣೆಯ ಬಗ್ಗೆ ಗೃಹ ಇಲಾಖೆಯಿಂದ ಮಾಹಿತಿ, ಶೋಷಣೆಯ ಪ್ರಕರಣಗಳು, ಆತ್ಮಹತ್ಯೆ, ಮನೆಯಿಂದ ಹೊರಹಾಕಿರುವ ಪ್ರಕರಣ, ಅವ್ಯಾಚ್ಛ ಪದಗಳಿಂದ ನಿಂದನೆ ಮಾಡುವುದು, ಮಾನಸಿಕ, ದೈಹಿಕ ಕಿರುಕುಳದ ಬಗ್ಗೆ ವಿವರಣೆ ಹೀಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಠಾಣೆಗಳಲ್ಲಿ ದಾಖಲಾದ ಆರೋಪಗಳ ಅಂಕಿ-ಅಂಶ ಸಮೇತ ಮಾಹಿತಿಯನ್ನು ಗೃಹ ಇಲಾಖೆ ಅಧಿಕಾರಿಗಳು ಸಿ.ಎಂಗೆ ನೀಡಲಾಗಿದೆ.
ರಾಜ್ಯಾದ್ಯಂತ ಭಾರೀ ಜನಾಕ್ರೋಶಕ್ಕೆ ಕಾರಣವಾಗಿರುವ ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು, ಈ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಲು ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.