Milk Price Hike | ಹಾಲಿನ ದರ ಹೆಚ್ಚಳಕ್ಕೆ ಪ್ರತಿಪಕ್ಷಗಳ ವಿರೋಧ
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಏರಿಕೆ ಬೆನ್ನಲ್ಲೇ ಇದೀಗ ಕೆಎಂಎಫ್ ಹಾಲಿನ ದರ ಏರಿಕೆ ಮಾಡಿರುವುದು ಪ್ರತಿಪಕ್ಷಗಳ ವಿರೋಧಕ್ಕೆ ಕಾರಣವಾಗಿದೆ. ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿವೆ.
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಏರಿಕೆ ಬೆನ್ನಲ್ಲೇ ಇದೀಗ ಕೆಎಂಎಫ್ ಹಾಲಿನ ದರ ಏರಿಕೆ ಮಾಡಿರುವುದು ಪ್ರತಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿವೆ.
ಜನರ ಬದುಕಿನೊಂದಿಗೆ ಕಾಂಗ್ರೆಸ್ ಚೆಲ್ಲಾಟ
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, "ಇತ್ತ ಬಡವರಿಗೂ ಉಪಕಾರಿಯಾಗಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ. ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂ. 10 ಪೈಸೆ ಹೆಚ್ಚಳ ಮಾಡಲಾಗಿದೆ. ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಕಳೆದುಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ" ಎಂದು ಹೇಳಿದ್ದಾರೆ.
ತುರ್ತು ಪರಿಸ್ಥಿತಿ ವಾರ್ಷಿಕೋತ್ಸವ ಸಂಭ್ರಮಿಸಲು ದರ ಏರಿಕೆ
ಹಾಲಿನ ದರ ಹೆಚ್ಚಳಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ಎಕ್ಸ್‌ನಲ್ಲಿ ಬೆಲೆ ಏರಿಕೆ ವಿರುದ್ಧ ಟ್ವೀಟ್ ಮಾಡಿರುವ ಅವರು, ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವ ಸಂಭ್ರಮಿಸಲು ಕಾಂಗ್ರೆಸ್ ಸರ್ಕಾರ ನಂದಿನಿ ಹಾಲಿನ ದರವನ್ನ ಲೀಟರ್‌ಗೆ ಎರಡು ರೂಪಾಯಿ ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
"ಸಿಎಂ ಸಿದ್ದರಾಮಯ್ಯನವರೇ, ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 13 ತಿಂಗಳಿನಲ್ಲಿ ಹಾಲಿನ ದರವನ್ನ ಎರಡು ಬಾರಿ ಹೆಚ್ಚಿಸಿದ್ದೀರಿ. ಕಳೆದ ವರ್ಷ ಆಗಸ್ಟ್ ನಲ್ಲಿ 3 ರೂಪಾಯಿ ಹೆಚ್ಚಳವಾಗಿದ್ದ ಹಾಲಿನ ಬೆಲೆ, ಈಗ ಮತ್ತೊಮ್ಮೆ 2 ರೂಪಾಯಿ ಹೆಚ್ಚಾಗಿದೆ. ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ತರಕಾರಿ ಬೆಲೆಗಳಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ. ನಿಮಗೆ ಬಡವರು, ಮಾಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ" ಎಂದು ಒತ್ತಾಯಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಕೂಡ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, "ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವ ಹಿನ್ನೆಲೆಯಲ್ಲಿ ಏಕಾಏಕಿ ಪೆಟ್ರೋಲ್-ಡೀಸೆಲ್, ತರಕಾರಿ ಬೆಲೆ ಏರಿಸಿ ಬಡವರ ಹೊಟ್ಟೆ ಮೇಲೆ ಹೊಡೆದಿದೆ. ಇದೀಗ ಹಾಲಿನ ದರ ಕೂಡ ಹೆಚ್ಚಿಸಿದೆ. ಈ ಸರ್ಕಾರ ಕೂಡಲೇ ತೊಲಗಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಕುಸಿದು ಬಿದ್ದಿದ್ದು, ಚಿಲ್ಲರೆ ಹಣವನ್ನು ಬಡವರ ಜೇಬಿನಿಂದ ಕದಿಯಲು ಹೊರಟ ಸಿದ್ದರಾಮಯ್ಯ ಸರ್ಕಾರ ಕಳ್ಳ ಸರ್ಕಾರ ಎನ್ನುವುದನ್ನು ವಿಧಿಯಿಲ್ಲದೆ ಹೇಳಬೇಕಾಗಿದೆ" ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಜನ ತಾಳ್ಮೆ ಕಳೆದುಕೊಳ್ಳುವ ಮೊದಲು ಕುರ್ಚಿ ಬಿಟ್ಟು ತೊಲಗಿ
ಹಾಲಿನ ದರ ಹೆಚ್ಚಳಕ್ಕೆ ರಾಜ್ಯ ಬಿಜೆಪಿ ಖಂಡಿಸಿದೆ. ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಕಾಂಗ್ರೆಸ್ ಸರ್ಕಾರ ಈಗ ಗ್ರಾಹಕರಿಗೆ ಅಕ್ಷರಶಃ ಬೆಲೆಯೇರಿಕೆಯ ವಿಷವುಣಿಸುತ್ತಿದೆ. ಹಾಲು ಉತ್ಪಾದಕರಿಗೆ ಸಬ್ಸಿಡಿ ನೀಡದೆ ಭಂಡತನ ತೋರಿದ ಕಾಂಗ್ರೆಸ್ ಸರ್ಕಾರ, ಇದೀಗ ಏಕಾಏಕಿ ಹಾಲಿನ ದರವನ್ನು ಪ್ರತಿ ಲೀ.ಗೆ ₹2.10 ಏರಿಸಿ ಗಾಯದ ಮೇಲೆ ಬರೆ ಎಳೆಯುತ್ತಿದೆ.
ಸಿಎಂ ಸಿದ್ದರಾಮಯ್ಯ ಅವರೇ, ಹಾಲು ಉತ್ಪಾದಕರಿಗೆ ₹1087 ಕೋಟಿ ಸಬ್ಸಿಡಿ ಹಣವನ್ನು ನೀಡದೆ ಬಾಕಿ ಉಳಿಸಿಕೊಂಡಿರುವ ನೀವು, ಈಗ ಗ್ರಾಹಕರಿಗೆ ಬೆಲೆಯೇರಿಕೆ ಶಿಕ್ಷೆ ನೀಡಿರುವುದು ಯಾವ ಪುರುಷಾರ್ಥಕ್ಕೆ..!! ನಿಮ್ಮದು ಕೇವಲ ರೈತ ವಿರೋಧಿ ಸರ್ಕಾರ ಮಾತ್ರವಲ್ಲ, ನಿಮ್ಮದು ಜನ ವಿರೋಧಿ ಸರ್ಕಾರವೂ ಹೌದು. ಬೆಲೆಯೇರಿಕೆಯನ್ನೇ ಬಂಡವಾಳವನ್ನಾಗಿಸಿಕೊಂಡಿರುವ ನೀವು ಆಳಲು ಯೋಗ್ಯರಲ್ಲ ಎಂಬುದಂತೂ ಸಾಬೀತಾಗಿದೆ, ಜನ ತಾಳ್ಮೆ ಕಳೆದುಕೊಳ್ಳುವ ಮೊದಲು ಕುರ್ಚಿ ಬಿಟ್ಟು ತೊಲಗಿ ಎಂದು ಆಗ್ರಹಿಸಿದೆ.
ಸಿ.ಎಂ ಮನೆಗೆ ಮುತ್ತಿಗೆ
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಬೆಲೆ ಏರಿಕೆ ಖಂಡಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ. ಜುಲೈ 3 ಅಥವಾ 4ರಂದು ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಕರ್ನಾಟಕ ಸರ್ಕಾರ ಒಂದು ರೀತಿ ಹುಚ್ಚರ ಸಂತೆಯಾಗಿದೆ. ಮೊನ್ನೆಯಷ್ಟೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ್ದಾರೆ. ಈಗ ಹಾಲಿನ ದರ ಲೀಟರ್‌ಗೆ 2 ರೂಪಾಯಿ ಏರಿಕೆ ಮಾಡಿದ್ದಾರೆ. ಒಂದೇ ವರ್ಷದಲ್ಲಿ ಎರಡು ಬಾರಿ ಹಾಲಿನ ದರ ಏರಿಕೆ ಮಾಡಿದ್ದಾರೆ. ಗ್ಯಾರಂಟಿಗೆ ಹಣ ಹೊಂದಿಸಲು ಆಗದೇ ಬೆಲೆ ಏರಿಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.