ಶೀಘ್ರದಲ್ಲೇ ರಾಜ್ಯದಲ್ಲಿ 18,500 ಶಿಕ್ಷಕರ ನೇಮಕಾತಿಗೆ ಪ್ರಕ್ರಿಯೆ ಆರಂಭ
ಕಾಂಗ್ರೆಸ್ ಸರ್ಕಾರ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಬದ್ಧವಾಗಿದೆ. ಶೀಘ್ರದಲ್ಲೇ ಇನ್ನೂ 18,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.;
ಸಾಂದರ್ಭಿಕ ಚಿತ್ರ
ರಾಜ್ಯದಲ್ಲಿ ಶೀಘ್ರದಲ್ಲೇ 18,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಇದರಲ್ಲಿ ಅನುದಾನಿತ ಮತ್ತು ಸರ್ಕಾರಿ ಶಾಲೆಗಳಿಗೂ ಸಮಾನ ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಅವರು ಮಂಗಳವಾರ ಚಾಮರಾಜನಗರದಲ್ಲಿ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ 13,500 ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಕೇವಲ 5,428 ಶಿಕ್ಷಕರ ನೇಮಕ ಮಾಡಿಕೊಂಡಿತ್ತು. ನಮ್ಮ ಸರ್ಕಾರ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಬದ್ಧವಾಗಿದೆ. ಶೀಘ್ರದಲ್ಲೇ ಇನ್ನೂ 18,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಇದರಲ್ಲಿ ಅನುದಾನಿತ ಮತ್ತು ಸರ್ಕಾರಿ ಶಾಲೆಗಳಿಗೂ ಸಮಾನ ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಶಾಲಾ ಕೊಠಡಿಗಳ ಅಭಾವ ಮತ್ತು ಶಿಥಿಲಾವಸ್ಥೆಯ ಸಮಸ್ಯೆಗಳ ಬಗ್ಗೆ ಮಾತನಾಡಿದ ಅವರು,ಈ ಸಮಸ್ಯೆಗಳು ಹೊಸದೇನಲ್ಲ. ರಾಜ್ಯದಲ್ಲಿ ಒಟ್ಟು 46,000 ಶಾಲೆಗಳಿದ್ದು, ಹಲವು ಸಮಸ್ಯೆಗಳು ವರ್ಷಗಳಿಂದ ಮುಂದುವರಿದಿವೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕ್ರಮಗಳನ್ನು ವೇಗವಾಗಿ ಕೈಗೊಂಡಿದೆ. ವಿವೇಕ ಯೋಜನೆ ಅಡಿಯಲ್ಲಿ 8,200 ಕೊಠಡಿಗಳು ಪೂರ್ಣಗೊಂಡಿವೆ. ಶೀಘ್ರದಲ್ಲೇ 3,000 ಹೊಸ ಕೊಠಡಿಗಳ ನಿರ್ಮಾಣ ಪ್ರಕ್ರಿಯೆ ಪ್ರಾರಂಭವಾಗಲಿದೆ. 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುವ ಉದ್ದೇಶ ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದರು.