ಸಿಎಂ ತವರಲ್ಲೇ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಸರ್ಕಾರ: ಪ್ರಾಂಶುಪಾಲೆ ಸೇರಿ ಮೂವರ ಅಮಾನತು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಅಮಾನತು ಆದೇಶ ಹೊರಡಿಸಿದ್ದು, ಪ್ರಾಂಶುಪಾಲೆ ವಸಂತ, ಪ್ರಭಾರ ನಿಲಯಪಾಲಕ ಮಹದೇವಪ್ಪ, ಗಣಿತ ಶಿಕ್ಷಕ ಮಂಜುನಾಥ್ ಅವರನ್ನು ಅಮಾನತುಗೊಳಿಸಿದ್ದಾರೆ.;

Update: 2025-08-04 13:55 GMT
ಅಮಾನತುಗೊಂಡ ಪ್ರಾಂಶುಪಾಲೆ ವಸಂತ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯ ನಂಜನಗೂಡು ತಾಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ನಡೆಸಿದ ತೀವ್ರ ಪ್ರತಿಭಟನೆಗೆ ಕೊನೆಗೂ ಸರ್ಕಾರ ಮಣಿದಿದೆ. ಶಾಲೆಯಲ್ಲಿನ ಮೂಲ ಸೌಕರ್ಯಗಳ ಕೊರತೆ, ಅವ್ಯವಸ್ಥೆ ಮತ್ತು ಜಾತಿ ತಾರತಮ್ಯದಂತಹ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಕರ್ತವ್ಯಲೋಪ ಎಸಗಿದ ಶಾಲೆಯ ಪ್ರಾಂಶುಪಾಲೆ ಸೇರಿದಂತೆ ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ವಿದ್ಯಾರ್ಥಿಗಳು ಸೋಮವಾರ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆಗೆ ಇಳಿದಿದ್ದರು. ಹಾಸ್ಟೆಲ್ ಮೆನು ಚಾರ್ಟ್ ಪ್ರಕಾರ ಊಟ ನೀಡುತ್ತಿಲ್ಲ, ಹಳಸಿದ ಅನ್ನ ಬಡಿಸಲಾಗುತ್ತಿದೆ, ಶಾಲಾ ಆವರಣ ಹಾಗೂ ಶೌಚಾಲಯಗಳಲ್ಲಿ ಸ್ವಚ್ಛತೆ ಇಲ್ಲದೆ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ ಮತ್ತು ಕೆಲವು ಶಿಕ್ಷಕರು ಜಾತಿ ತಾರತಮ್ಯ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಗಂಭೀರ ಆರೋಪಗಳನ್ನು ಮಾಡಿದ್ದರು.

ವಿದ್ಯಾರ್ಥಿಗಳ ಪ್ರತಿಭಟನೆಯು ಮಾಧ್ಯಮಗಳಲ್ಲಿ ವ್ಯಾಪಕವಾಗಿ ವರದಿಯಾದ ನಂತರ ಎಚ್ಚೆತ್ತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಅವರು, ಶಾಲೆಯ ಪ್ರಾಂಶುಪಾಲೆ ವಸಂತ, ಪ್ರಭಾರ ನಿಲಯಪಾಲಕ ಮಹದೇವಪ್ಪ ಮತ್ತು ಗಣಿತ ಶಿಕ್ಷಕ ಮಂಜುನಾಥ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಈ ದಿಟ್ಟ ಹೋರಾಟಕ್ಕೆ ಸಂದ ಜಯ ಇದಾಗಿದೆ.

Tags:    

Similar News