ಧರ್ಮಸ್ಥಳ ಪ್ರಕರಣ |ಅಪಪ್ರಚಾರ ಖಂಡಿಸಿ ನಾಳೆಯಿಂದಲೇ ಮೂರು ಹಂತದ ಹೋರಾಟ- ಬಿ.ವೈ.ವಿಜಯೇಂದ್ರ ಘೋಷಣೆ

ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರ ನಡೆಯುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಅದನ್ನು ತಡೆಗಟ್ಟುವಲ್ಲಿ ವಿಫಲವಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.;

Update: 2025-08-21 07:10 GMT

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ಅಪಪ್ರಚಾರ ಖಂಡಿಸಿ ನಾಳೆಯಿಂದಲೇ ಮೂರು ಹಂತದ ಹೋರಾಟ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. 

ವಿಧಾನಸೌಧದ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಧರ್ಮಸ್ಥಳ ಪ್ರಕರಣ ಕುರಿತಂತೆ ಕಳೆದ ಒಂದು ತಿಂಗಳಿಂದ ನಡೆದಿರುವ ಬೆಳವಣಿಗೆಗಳನ್ನು ಗಮನಿಸಿದ್ದೇವೆ.  ಈ ವಿಚಾರದಲ್ಲಿ ಬಿಜೆಪಿ ತನ್ನ ನಿಲುವು ಸ್ಪಷ್ಟಪಡಿಸಿದ್ದು,  ಎಸ್‌ಐಟಿ ತನಿಖೆಯನ್ನು ಸ್ವಾಗತಿಸಿದ್ದೇವೆ.  ತನಿಖೆಯನ್ನು ಪಾರದರ್ಶಕವಾಗಿ ನಡೆಸುವಂತೆ ಬೇಡಿಕೆ ಇಟ್ಟಿದ್ದೇವೆ ಎಂದು ತಿಳಿಸಿದ್ದಾರೆ. 

ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರ ನಡೆಯುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಅದನ್ನು ತಡೆಗಟ್ಟುವಲ್ಲಿ ವಿಫಲವಾಗಿವೆ. ದಕ್ಷಿಣ ಕನ್ನಡದಲ್ಲಿ 81 ವರ್ಷದ ಪೂವಪ್ಪ ಅವರ ಮನೆಗೆ ರಾತ್ರಿ 1 ಗಂಟೆಗೆ ತೆರಳಿ ಫೋಟೋ ತೆಗೆಯಲಾಗಿದೆ ಎಂಬ ಮಾಹಿತಿ ಬಂದಿದೆ. ರಾಜ್ಯ ಸರ್ಕಾರ ಹಿಂದೂಪರ ಸಂಘಟನೆ ಕಾರ್ಯಕರ್ತರ ಮೇಲೆ ಕೇಸು ಹಾಕುವಲ್ಲಿ ಚುರುಕಾಗಿದೆ, ಆದರೆ,  ಧರ್ಮಸ್ಥಳ ವಿಚಾರದಲ್ಲಿ ಕ್ರಮ ಕೈಗೊಳ್ಳಲು ಇಚ್ಛಾಶಕ್ತಿ ತೋರುತ್ತಿಲ್ಲ ಎಂದು ಟೀಕಿಸಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ಉಲ್ಲೇಖಿಸಿದ ಅವರು, ರಾಜ್ಯ ಸರ್ಕಾರದ ನಡವಳಿಕೆಯೇ ಅನುಮಾನ ಮೂಡಿಸಿದೆ. ಯಾವ ದುಷ್ಟಶಕ್ತಿಗಳು ಇದರ ಹಿಂದೆ ಕೆಲಸ ಮಾಡುತ್ತಿವೆ ಎಂಬುದು ಪ್ರಶ್ನೆಯಾಗಿದೆ. ಧರ್ಮದ ಉಳಿವಿಗಾಗಿ ಈಗ ಹೋರಾಟ ಅವಶ್ಯಕವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಯು ಈ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮುಂದಿನ ಒಂದು ವಾರ, ರಾಜ್ಯ ಸರ್ಕಾರದ ಧೋರಣೆ ವಿರುದ್ಧ ಹೋರಾಟ ಮತ್ತು ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಹೋರಾಟ ನಾಳೆಯಿಂದಲೇ ಆರಂಭವಾಗಿ ಮೂರು ಹಂತಗಳಲ್ಲಿ ನಡೆಯಲಿದೆ ಎಂದು ಘೋಷಿಸಿದ್ದಾರೆ.

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ ಅವರು,  ಸರ್ಕಾರ ಕಾನೂನಾತ್ಮಕ ಕ್ರಮ ಕೈಗೊಂಡಿದೆ. ಇದರಲ್ಲಿ ಬಿಜೆಪಿ ಮಧ್ಯಪ್ರವೇಶ ಮಾಡಲ್ಲ ಎಂದು ವಿಜಯೇಂದ್ರ ತಿಳಿಸಿದ್ದಾರೆ.

Tags:    

Similar News