ತುಂಗಭದ್ರಾ ಡ್ಯಾಂ ಕ್ರೆಸ್ಟ್‌ ಗೇಟ್‌ ದುರಸ್ತಿ; ರೈತರ ಎರಡನೇ ಬೆಳೆಗೆ ನೀರಿಲ್ಲ -ಸಿಎಂ

ತುಂಗಭದ್ರಾ ಅಣೆಕಟ್ಟಿನ 32 ಕ್ರೆಸ್ಟ್‌ಗೇಟ್ ಬದಲಾವಣೆಗೆ ಟೆಂಡರ್ ಕರೆದಿದ್ದು, ಪ್ರಸ್ತುತ, ಎಂಟು ಕ್ರೆಸ್ಟ್‌ಗೇಟ್‌ಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.;

Update: 2025-09-08 10:24 GMT
Click the Play button to listen to article

ಕ್ರೆಸ್ಟ್‌ ಗೇಟ್‌ಗಳ ದುರಸ್ತಿ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಿಂದ ರೈತರ ಎರಡನೇ ಬೆಳೆಗೆ ಇದೀಗ ನೀರಿನ ಬರ ಎದುರಾಗಲಿದೆ. ಪ್ರಸ್ತುತ, ಜಲಾಶಯದಲ್ಲಿ ಮೊದಲ ಬೆಳೆಗೆ ಆಗುವಷ್ಟು ಮಾತ್ರ ನೀರಿನ ಸಂಗ್ರಹವಿದೆ. 

ತುಂಗಭದ್ರಾ ಅಣೆಕಟ್ಟಿನ 32 ಕ್ರೆಸ್ಟ್‌ಗೇಟ್ ಬದಲಾವಣೆಗೆ ರಾಜ್ಯ ಸರ್ಕಾರ ಟೆಂಡರ್ ನೀಡಿದೆ. ಮೊದಲ ಹಂತದಲ್ಲಿ ಎಂಟು ಕ್ರೆಸ್ಟ್‌ಗೇಟ್‌ ಅಳವಡಿಸಲು ಸಿದ್ಧತೆ ನಡೆಸಲಾಗಿದೆ. ಕ್ರೆಸ್ಟ್‌ಗೇಟ್‌ ಬದಲಾವಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯ, ಇತ್ಯಾದಿ ಅಭಿವೃದ್ಧಿ ಕಾರ್ಯಗಳನ್ನು ತುಂಗಭದ್ರಾ ಮಂಡಳಿಯೇ ನೋಡಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ʼಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು. 

ಜಲಾಶಯಗಳಲ್ಲಿ 840.52 ಟಿಎಂಸಿ ನೀರು ಸಂಗ್ರಹ

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ 2024ಕ್ಕೆ ಹೋಲಿಸಿದರೆ ಈಗ ಸ್ವಲ್ಪ ಕಡಿಮೆಯಿದೆ. ಪ್ರಮುಖ ಜಲಾಶಯಗಳ ಗರಿಷ್ಠ ಸಾಮರ್ಥ್ಯ 895.62 ಟಿಎಂಸಿ ಇದ್ದು, ಪ್ರಸ್ತುತ, 840.52 ಟಿಎಂಸಿ ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ 856.17 ಟಿಎಂಸಿ ಸಂಗ್ರಹ ಇತ್ತು ಎಂದು ಮಾಹಿತಿ ನೀಡಿದರು.

32 ಮಿ.ಮೀ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟೆಂಬರ್‌ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4 ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು. ಈ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇ.24ರಷ್ಟು ಕಡಿಮೆ ಮಳೆಯಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ ಎಂದರು.

5.20 ಲಕ್ಷ ಹೆಕ್ಟೇರ್‌ ಬೆಳೆ ಹಾನಿ

ಮಳೆ ಹಾನಿಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು. ಮುಂಗಾರು ಹಂಗಾಮಿನಲ್ಲಿ ಶೇ.98 ಬಿತ್ತನೆ ಪೂರ್ಣಗೊಂಡಿದೆ. ಬಿತ್ತನೆ ಗುರಿ 82.50 ಲಕ್ಷ ಹೆಕ್ಟೇರ್ ಇದ್ದು, 80.76 ಲಕ್ಷ ಹೆಕ್ಟೇರ್ ವಾಸ್ತವಿಕ ಬಿತ್ತನೆಯಾಗಿದೆ. ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಹಾನಿ ಬಗ್ಗೆ ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದ್ದು, 4,80,256 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 40,407 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಒಟ್ಟು 5,20,663 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.

5 ತಿಂಗಳಲ್ಲಿ ಮಳೆಗೆ 111 ಮಂದಿ ಬಲಿ

ಮಳೆಗೆ ಸಂಬಂಧಿಸಿದಂತೆ ಎಪ್ರಿಲ್ ತಿಂಗಳಿನಿಂದ ಸೆಪ್ಟಂಬರ್‌  ರಾಜ್ಯದಲ್ಲಿ ಒಟ್ಟು111 ಮಂದಿ ಮೃತಪಟ್ಟಿದ್ದು, ಒಟ್ಟು 5.55ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. 651ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9,087 ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಹಾನಿಯಾದ 649 ಮನೆಗಳಿಗೆ ಹಾಗೂ ಭಾಗಶಃ ಹಾನಿಯಾದ 8,608 ಮನೆಗಳಿಗೆ ಪರಿಹಾರ ಪಾವತಿಸಲಾಗಿದೆ. ಮನೆ ಹಾನಿಯಾದವರಿಗೆ ಪರಿಹಾರ ಹಾಗೂ ವಿವಿಧ ವಸತಿ ಯೋಜನೆಗಳಡಿ ಮನೆಯನ್ನು ಸಹ ಒದಗಿಸಲು ಕ್ರಮ ಕೈಗೊಳ್ಳಬೇಕು. ಈ ಅವಧಿಯಲ್ಲಿ ಒಟ್ಟು 766 ಜಾನುವಾರುಗಳು ಮೃತಪಟ್ಟಿದ್ದು, ಒಟ್ಟು 1.52 ಕೋಟಿ ಪರಿಹಾರ ವಿತರಿಸಲಾಗಿದೆ ಎಂದು ತಿಳಿಸಿದರು.

1,877 ಶಾಲಾ ಕಟ್ಟಡಗಳಿಗೆ ಹಾನಿ

ಮಳೆಯಿಂದಾಗಿ 683 ಕಿ.ಮೀ ರಾಜ್ಯ ಹೆದ್ದಾರಿ, 1,383 ಜಿಲ್ಲಾ ಪ್ರಮುಖ ಹೆದ್ದಾರಿ, 5,558 ಗ್ರಾಮೀಣ ರಸ್ತೆಗಳು, 656 ಸೇತುವೆಗಳು , 1,877ಶಾಲಾ ಕಟ್ಟಡಗಳು, 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 1,018 ಅಂಗನವಾಡಿಗಳು, 25,279 ವಿದ್ಯುತ್ ಕಂಬಗಳು, 819 ಟ್ರಾನ್ಸ್ ಫಾರ್ಮ್‌ರ್‌ಗಳು, 31 ಸಣ್ಣ ನೀರಾವರಿ ಕೆರೆಗಳಿಗೆ ಹಾನಿ ಸಂಭವಿಸಿದೆ ಎಂದು ಹೇಳಿದರು.

Tags:    

Similar News