ಬಿಜೆಪಿ ಬಲವರ್ಧನೆಗೆ ಮತ್ತೆ ಯಡಿಯೂರಪ್ಪ: ಪಕ್ಷದಲ್ಲಿ ಸಕ್ರಿಯರಾಗಲು ಅಮಿತ್‌ ಶಾ ಸೂಚನೆ

ಸಕ್ರಿಯ ರಾಜಕಾರಣದಿಂದ ಅಂತರ ಕಾಯ್ದುಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪಕ್ಷದ ಚಟುವಟಿಕೆಯಲ್ಲಿ ಭಾಗವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೂಚನೆ ನೀಡಿದ್ದಾರೆ.;

Update: 2025-06-20 15:14 GMT

ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲದಿರುವುದು ಕೇಂದ್ರ ಬಿಜೆಪಿ ವರಿಷ್ಠರಿಗೆ ತಲೆಬಿಸಿಯಾಗಿದೆ. ರಾಜ್ಯ ಕಾಂಗ್ರೆಸ್‌ ವಿರುದ್ಧ ನಿರೀಕ್ಷಿತ ಮಟ್ಟದಲ್ಲಿ ಹೋರಾಟ ನಡೆಸಲು ಎಡವುತ್ತಿರುವ ರಾಜ್ಯ ಬಿಜೆಪಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಿಸಿ ಮುಟ್ಟಿಸಿದ್ದಾರೆ. ಒಗ್ಗಟ್ಟಿನ ಮಂತ್ರ ಜಪಿಸುವಂತೆ ರಾಜ್ಯ ನಾಯಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಸಕ್ರಿಯ ರಾಜಕಾರಣದಿಂದ ಅಂತರ ಕಾಯ್ದುಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪಕ್ಷವನ್ನು ಮತ್ತೊಮ್ಮೆ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸಕ್ರಿಯ ರಾಜಕೀಯದಿಂದ ದೂರ ಇರದಂತೆ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ. 

ಆದಿಚುಂಚನಗಿರಿ ವೈದ್ಯಕೀಯ ಕಾಲೇಜು ಉದ್ಘಾಟನೆಗಾಗಿ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗಿ ಪಕ್ಷವನ್ನು ಗಟ್ಟಿಗೊಳಿಸುವಲ್ಲಿ ಕಾರ್ಯೋನ್ಮುಖವಾಗುವುದು ಮತ್ತು ರಾಜ್ಯ ಸರ್ಕಾರ ವಿರುದ್ಧ ಹೋರಾಟಗಳನ್ನು ತೀವ್ರಗೊಳಿಸುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ. 

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌,  ಶಾಸಕ ಅರವಿಂದ ಬೆಲ್ಲದ್‌ ಅವರೊಂದಿಗೆ ಅಮಿತ್‌ ಶಾ ಮಾತುಕತೆ ನಡೆಸಿದರು. ಈ ವೇಳೆ ಪಕ್ಷದ ಸಂಘಟನೆಯ ಜೊತೆಗೆ ಹೋರಾಟಗಳನ್ನು ತೀವ್ರಗೊಳಿಸಬೇಕು. ಪ್ರತಿಭಟನೆಗಳು ನಡೆಸುತ್ತಿದ್ದರೂ, ಪರಿಣಾಮಕಾರಿಯಾಗುತ್ತಿಲ್ಲ. ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂಬುದಾಗಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ. 

ಇನ್ನು, ಪಕ್ಷದಲ್ಲಿ ಭಿನ್ನಮತ ಶಮನವಾಗುವ ಲಕ್ಷಣಗಳು ಕಾಣುತ್ತಿಲ್ಲ. ಹೀಗಾದರೆ ಒಂದಾಗಿ ಪಕ್ಷವನ್ನು ಮುನ್ನಡೆಸಲು ಕಷ್ಟಕರವಾಗಲಿದೆ. ಭಿನ್ನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕಾಗಿದೆ. ಒಗ್ಗಟ್ಟು ಇಲ್ಲದಿದ್ದರೆ ಪಕ್ಷವನ್ನು ಹೇಗೆ ಬಲಗೊಳಿಸಲಾಗುತ್ತದೆ? ಭಿನ್ನಾಭಿಪ್ರಾಯಗಳು ಏನೇ ಇದ್ದರೂ ಅವುಗಳನ್ನು ಬದಿಗೊತ್ತಿ ಪಕ್ಷವನ್ನು ಸದೃಢವಾಗಿ ಮುನ್ನಡೆಸಲು ಒಗ್ಗೂಡಿ ಹೋಗಬೇಕಿದೆ ಎಂಬ ಸಲಹೆಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ. 

ಈ ನಡುವೆ, ಪಕ್ಷದ ಹಿರಿಯ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರು ಅಮಿತ್‌ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಕ್ರಿಯ ರಾಜಕಾರಣದಿಂದ ಅಂತರ ಕಾಯ್ದುಕೊಂಡಿರುವುದು ಪಕ್ಷಕ್ಕೆ ಹಿನ್ನಡೆಯಾಗುತ್ತಿದೆ. ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡು ಪಕ್ಷದಲ್ಲಿ ಒಗ್ಗಟ್ಟು ಮೂಡಿಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ. 

ಬಿಜೆಪಿ ಕಚೇರಿಗೆ ಯಡಿಯೂರಪ್ಪ ಭೇಟಿ:

ಅಮಿತ್‌ ಶಾ ಸೂಚನೆ ಬರುತ್ತಿದ್ದಂತೆ ಬಿ.ಎಸ್‌.ಯಡಿಯೂರಪ್ಪ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೆಲ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು. ಇನ್ನು ಮುಂದೆ ಪಕ್ಷದ ಕಚೇರಿಗೆ ಆಗಾಗ್ಗೆ ಭೇಟಿ ನೀಡಿ ಪಕ್ಷದ ಚಟುವಟಿಕೆಗಳ ಮೇಲೆ ನಿಗಾವಹಿಸಲಾಗುವುದು. ಅಲ್ಲದೇ, ಪಕ್ಷವನ್ನು ಸದೃಢಗೊಳಿಸುವ ಬಗ್ಗೆ ಅಗತ್ಯ ಸಲಹೆಗಳನ್ನು ನೀಡಲಾಗುವುದು. ಅಲ್ಲದೇ, ರಾಜ್ಯದ ಪ್ರವಾಸ ಕೈಗೊಂಡು ಪಕ್ಷವನ್ನು ಸಕ್ರಿಯವಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ. 

ಇದೇ ವೇಳೆ ಮಾಧ್ಯಮದವರ ಜತೆ ಮಾತನಾಡಿದ ಬಿ.ಎಸ್‌.ಯಡಿಯೂರಪ್ಪ,  ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಹುತೇಕ ಅಭಿವೃದ್ಧಿ ಕೆಲಸಗಳು ಸ್ಥಗಿತವಾಗಿವೆ.  ಜನರ ಸಂಕಷ್ಟಗಳನ್ನು ಯಾರೂ ಕೇಳುವವರಿಲ್ಲ ಎಂಬಂತಹ ದುಸ್ಥಿತಿ ಬಂದಿದೆ. ಕೇವಲ ಪ್ರಚಾರದಲ್ಲಿ ಸರ್ಕಾರ ತೊಡಗಿದ್ದು,  ಅಭಿವೃದ್ಧಿ ಕಡೆ ಗಮನ ಕೊಡುತ್ತಿಲ್ಲ ಎಂದು ಹೇಳಿದರು. 

ಬಿಜೆಪಿ- ಜೆಡಿಎಸ್ ಬೇರೆಯಲ್ಲ, ನಾವು ಒಟ್ಟಾಗಿ ಮುಂದುವರೆಯುತ್ತೇವೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕೂಡ ಹಲವು ಬಾರಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ- ಜೆಡಿಎಸ್ ಮುಂದಿನ ದಿನಗಳಲ್ಲಿ ಒಟ್ಟಾಗಿ ಮುನ್ನಡೆದು ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆದು ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ಬರಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಪ್ರಯತ್ನ ಮಾಡುತ್ತೇವೆ ಎಂದರು. 

ಅಸಮಾಧಾನಿತರನ್ನು ಕರೆದು ಮಾತನಾಡಿ ಸಮಸ್ಯೆ ಬಗೆಹರಿಸುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಯತ್ನ ಸ್ವಾಗತಾರ್ಹ. ಅಸಮಾಧಾನದಿಂದ ಯಾರೇ ಇದ್ದರೂ ಅವರ ಜೊತೆ ಮಾತನಾಡಲು ನಾನು ಸಿದ್ಧ. ಪ್ರತಿನಿತ್ಯ ಕಚೇರಿಗೆ ಬರಲು ತೀರ್ಮಾನಿಸಿದ್ದೇನೆ. ಪ್ರತಿ ವಾರ ಒಂದೆರಡು ಜಿಲ್ಲೆಗೆ ಭೇಟಿ ನೀಡುವೆ ಎಂದು ಹೇಳಿದರು. 

ಅಮಿತ್‌ ಶಾ ಸಲಹೆ ಸೂಚನೆ ನೀಡಿದ್ದಾರೆ: ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟವನ್ನು ದ್ವಿಗುಣಗೊಳಿಸಬೇಕೆಂಬ ವಿಷಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಸಂಸದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಅರವಿಂದ ಬೆಲ್ಲದ್ ಅವರ ಜೊತೆಗೂಡಿ ಅಮಿತ್ ಶಾ ಅವರನ್ನು ಭೇಟಿ ಮಾಡಲಾಗಿದೆ. ರಾಜ್ಯ ರಾಜಕಾರಣ, ಪ್ರಸ್ತುತ ಬೆಳವಣಿಗೆಗಳ ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಿದರು. 

Tags:    

Similar News