ವಾಲ್ಮೀಕಿ ಅಭಿವೃದ್ಧಿ ನಿಗಮ ಅಧಿಕಾರಿ ಆತ್ಮಹತ್ಯೆ ಪ್ರಕರಣದ ತನಿಖೆಗೆ ಎಸ್‌ಐಟಿ
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣವನ್ನು ತನಿಖೆ ನಡೆಸಲು ಎಸ್‌ಐಟಿ ರಚನೆ ಮಾಡಲಾಗಿದೆ.;
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶುಕ್ರವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ ಐಟಿ ರಚಿಸಿ ಆದೇಶ ಹೊರಡಿಸಿದ್ದು, ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ಎಸ್‌ಐಟಿಗೆ ನೇಮಿಸಲಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಹಿಂದೆ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂ. ಅವ್ಯವಹಾರದ ಗಂಭೀರ ಕಾರಣವಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ಅವರು ಸಭೆ ನಡೆಸಿದ್ದು, ಪ್ರಕರಣವನ್ನು ಎಸ್‌ಐಟಿಗೆ ವಹಿಸಲು ತೀರ್ಮಾನಿಸಿದ್ದಾರೆ. ಅದರಂತೆ, ಎಡಿಜಿಪಿ ಮನೀಶ್ ಕಬೀರ್ಕರ್ ನೇತೃತ್ವದಲ್ಲಿ ಶಿವಪ್ರಕಾಶ್, ಹರಿರಾಮ್ ಶಂಕರ್ ಹಾಗೂ ರಾಘವೇಂದ್ರ ಹೆಗಡೆ ಅವರ ತಂಡವು ಪ್ರಕರಣದ ಕುರಿತು ತನಿಖೆ ನಡೆಸಲಿದೆ.
ಏನಿದು ಪ್ರಕರಣ?
ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ ಪಿ. (52) ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ಬಳಿಯಿರುವ ತಮ್ಮ ನಿವಾಸದಲ್ಲಿ ಮೇ 26ರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಚಂದ್ರಶೇಖರನ್ ಆತ್ಮಹತ್ಯೆಗೂ ಮೊದಲು ವಾಲ್ಮೀಕಿ ನಿಗಮದಲ್ಲಿ 85 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ನಿಗಮದ ಅಧಿಕಾರಿಗಳ ವಿರುದ್ಧ 5 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ.
ಅಲ್ಲದೆ ಈ ಅಕ್ರಮದಲ್ಲಿ ನಿಗಮದ ಎಂಡಿ ಜೆ.ಜಿ.ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣನವರ್, ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶುಸ್ಮಿತಾ ರಾವುಲ್ ಪಾತ್ರವಿದೆ ಎಂದು ಉಲ್ಲೇಖಿಸಿದ್ದಾರೆ. ನಿಗಮದ ಎಂಡಿ ಅನುದಾನವನ್ನು ಒತ್ತಾಯಪೂರ್ವಕವಾಗಿ ವರ್ಗಾಯಿಸಿದ್ದಾರೆ. ನಮಗೆ ಇದರ ಒಳಸಂಚು ಅರ್ಥವೇ ಆಗಲಿಲ್ಲ. ನಿಗಮಕ್ಕೆ ಇನ್ನೂ ಬ್ಯಾಂಕ್ ಪಾಸ್ಬುಕ್ ಹಾಗೂ ಚೆಕ್ ಬುಕ್ ನೀಡಿಲ್ಲ. ಈ ಕುರಿತು ಬ್ಯಾಂಕ್ ಮ್ಯಾನೇಜರ್ ಸರಿಯಾದ ಉತ್ತರ ನೀಡಿಲ್ಲ ಎಂದೂ ಉಲ್ಲೇಖಿಸಿದ್ದಾರೆ.
ನಾನು ನಿಗಮಕ್ಕೆ ಮೋಸ ಮಾಡಿಲ್ಲ, ಅವ್ಯವಹಾರದಲ್ಲಿ ಭಾಗಿಯಾಗಿಲ್ಲ. ವಂಚನೆಯನ್ನೂ ಮಾಡಿಲ್ಲ. ಆದರೆ, ನಿಗಮದ ಹಣ ನಿಯಮಬಾಹಿರವಾಗಿ ಹಣ ವರ್ಗಾವಣೆ ಆಗಿದೆ. ಇದರಲ್ಲಿ ನನ್ನ ಪಾತ್ರವಿಲ್ಲ. ಕೆಲಸದ ಒತ್ತಡದಲ್ಲಿ ನಾನು ಮಾಡಿರುವ ತಪ್ಪೇನೆಂದರೆ, ಖಾತೆಯ ಚೆಕ್ ಬುಕ್ ಮತ್ತು ಕ್ಯಾಶ್ ಪುಸ್ತಕ ಮುಕ್ತಾಯಗೊಳಿಸಿರುವುದು ಎಂದು ತಮ್ಮ ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.
ಏನಿದು ಅಕ್ರಮ?
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮುಖ್ಯ ಖಾತೆಯಲ್ಲಿ ಹಿಂದಿನ ಸಾಲಿನ ಹಾಗೂ 2024-25 ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ಮೊತ್ತದಲ್ಲಿ 88 ಕೋಟಿ ಹಣವನ್ನು ನಿಗಮದ ಅಧ್ಯಕ್ಷರ ಗಮನಕ್ಕೂ ತರದೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯ ಅನಧಿಕೃತ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಬ್ಯಾಂಕ್‌ನವರು ಫೆ.26ರಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಲೆಕ್ಕಾಧಿಕಾರಿಗಳ ಸಹಿ ಪಡೆದು ನಿಗಮದ ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ಹಂತ-ಹಂತವಾಗಿ 187.33 ಕೋಟಿ ರೂ. ವರ್ಗಾವಣೆ ಮಾಡಿದ್ದರು. ಮಾ.4ರಂದು 25 ಕೋಟಿ ರೂ., ಮಾ.6ರಂದು 25 ಕೋಟಿ ರೂ., ಮಾ.21ರಂದು 44 ಕೋಟಿ ರೂ., ಮಾ.22ರಂದು 43.33 ಕೋಟಿ ರೂ. ಹಾಗೂ ಮೇ 21ರಂದು 50 ಕೋಟಿ ರೂ. ವರ್ಗಾವಣೆಯಾಗಿದೆ ಎಂದು ವರದಿಯಾಗಿದೆ.
ಪ್ರಕರಣದ ಗಂಭೀರತೆಯ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಸಿಬಿಐ ತನಿಖೆಗೆ ಆಗ್ರಹಿಸಿ ಸರ್ಕಾರಕ್ಕೆ ಜೂನ್ 6ರವರೆಗೆ ಒಂದು ವಾರದ ಗಡುವು ನೀಡಿದ್ದವು. ಅಲ್ಲದೆ, ರಾಜ್ಯದಲ್ಲಿ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದ್ದು, ಸಚಿವ ನಾಗೇಂದ್ರ ಅವರ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ ಸಚಿವರ ತಲೆದಂಡಕ್ಕೆ ಸರ್ಕಾರದ ಮೇಲೆ ಒತ್ತಡ ಹೆಚ್ಚಿತ್ತು.