ಪಶು ವೈದ್ಯಾಧಿಕಾರಿಗಳ ನೇಮಕಾತಿಗೆ ಸಂದರ್ಶನ ರದ್ದು; ಶೀಘ್ರವೇ 400 ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಧಿಸೂಚನೆ ಹೊರಡಿಸುವ ಕುರಿತು ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಸರ್ಕಾರದ ಕಾರ್ಯದರ್ಶಿಯವರು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆದಿದ್ದು, 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡುವಂತೆ ನಿರ್ದೇಶಿಸಿದ್ದಾರೆ.
ಕೆಪಿಎಸ್‌ಸಿಗೆ ಪತ್ರ ಬರೆದಿರುವ ಪಶುಸಂಗೋಪನೆ ಇಲಾಖೆ ಸರ್ಕಾರದ ಕಾರ್ಯದರ್ಶಿ
ಪಶು ವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆಯಲ್ಲಿ ಪದವಿ ಪೂರೈಸಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪಶು ವೈದ್ಯಾಧಿಕಾರಿ ಹುದ್ದೆಗಳಿಗೆ ಸಂದರ್ಶನವಿಲ್ಲದೇ ಕೇವಲ ಅಂಕಗಳ ಆಧಾರದ ಮೇಲೆ ನೇಮಕಾತಿ ನಡೆಸಲು ತೀರ್ಮಾನಿಸಿದ್ದು, ಶೀಘ್ರವೇ 400 ಪಶು ವೈದ್ಯಾಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲು ಸಿದ್ಧತೆ ಆರಂಭಿಸಿದೆ.
ನೇಮಕ ಅಧಿಸೂಚನೆಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಧಿಸೂಚನೆ ಹೊರಡಿಸುವ ಕುರಿತು ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಸರ್ಕಾರದ ಕಾರ್ಯದರ್ಶಿ ನಾರಾಯಣಸ್ವಾಮಿ ಎಸ್. ಅವರು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆದಿದ್ದು, 400 ಪಶು ವೈದ್ಯಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವಂತೆ ನಿರ್ದೇಶಿಸಿದ್ದಾರೆ.
ಪತ್ರದಲ್ಲೇನಿದೆ ?
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿನ ಪಶು ವೈದ್ಯಾಧಿಕಾರಿ ಹುದ್ದೆಗಳು ಗ್ರೂಪ್ ʼಎʼ ವರ್ಗದ ಹುದ್ದೆಗಳಾಗಿರುವುದರಿಂದ ಸದರಿ ಹುದ್ದೆಗಳಿಗೆ ವ್ಯಕ್ತಿತ್ವ ಪರೀಕ್ಷೆಯ ಸಹಿತ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವುದು ಸೂಕ್ತ ಎಂದು ತೀರ್ಮಾನಿಸಿದ್ದು, ಈ ಹಿನ್ನಲೆಯಲ್ಲಿ ಸದರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಭರ್ತಿ ಮಾಡುವ ಕುರಿತು ಪ್ರಸ್ತಾವನೆ ಮರು ಸಲ್ಲಿಸುವಂತೆ ಕೋರಲಾಗಿತ್ತು.
ಪತ್ರದನ್ವಯ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೇವಾ ನಿಯಮಗಳ 5ರ ಆಯ್ಕೆ ವಿಧಾನಗಳ ಪೈಕಿ 'ಡಿ' ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಪ್ರಮಾಣದ ಆಧಾರದ ಮೇಲೆ ಮಾತ್ರ ಹುದ್ದೆಗಳ ಆಯ್ಕೆ ಕೈಗೊಳ್ಳಬೇಕಿದೆ. ಹಾಗಾಗಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿನ 400 ಪಶುವೈದ್ಯಾಧಿಕಾರಿ ಹುದ್ದೆಗಳನ್ನು ಸಂದರ್ಶನವಿಲ್ಲದೇ ನೇರ ನೇಮಕಾತಿ ಮೂಲಕ ಆಯ್ಕೆ ಮಾಡುವಂತೆ ನಿರ್ದೇಶನ ಬಂದಿದೆ ಎಂದು ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಸರ್ಕಾರದ ಕಾರ್ಯದರ್ಶಿ ನಾರಾಯಣಸ್ವಾಮಿ ಎಸ್. ತಿಳಿಸಿದ್ದಾರೆ.
ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆಯಲ್ಲಿ ಪದವಿ ಅಥವಾ ಪಶುವೈದ್ಯಕೀಯ ವಿಜ್ಞಾನದಲ್ಲಿ ಪದವಿ ಪಡೆದಿರಬೇಕು. ಈ ಪದವಿಯು ಭಾರತೀಯ ಪಶುವೈದ್ಯಕೀಯ ಪರಿಷತ್ತಿನಲ್ಲಿ (VCI) ಅಥವಾ ರಾಜ್ಯ ಪಶುವೈದ್ಯಕೀಯ ಪರಿಷತ್ತಿನಲ್ಲಿ ನೋಂದಣಿ ಕಡ್ಡಾಯವಾಗಿ ಪಡೆದಿರಬೇಕು. ಅದು ಚಾಲ್ತಿಯಲ್ಲಿರಬೇಕು.