ಚಾಮುಂಡಿ ದೇಗುಲ ಕುರಿತ ಡಿಕೆಶಿ ಹೇಳಿಕೆ ಹಿಂಪಡೆಯಲು ವಿಜಯೇಂದ್ರ ಆಗ್ರಹ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿಕೆ ಖಂಡಿನೀಯ. ಕೂಡಲೇ ತಮ್ಮ ಹೇಳಿಕೆಯನ್ನು ವಾಪಸ್‌ ಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುರುವಾರ ಆಗ್ರಹಿಸಿದ್ದಾರೆ.;

Update: 2025-08-28 07:51 GMT

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಚಾಮುಂಡಿ ದೇವಾಲಯ ಹಿಂದೂಗಳ ಆಸ್ತಿಯಲ್ಲ ಎಂಬ ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಹೊಸ ವಿವಾದವಾಗಿ ಮಾರ್ಪಟ್ಟಿದೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿಕೆ ಖಂಡಿನೀಯ. ಕೂಡಲೇ ತಮ್ಮ ಹೇಳಿಕೆಯನ್ನು ವಾಪಸ್‌ ಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುರುವಾರ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಡಿ.ಕೆ. ಶಿವಕುಮಾರ್‌ ಹೇಳಿಕೆ ಅಕ್ಷಮ್ಯ. ಗಾಂಧಿ ಕುಟುಂಬವನ್ನು ಖುಷಿಪಡಿಸಲು ಇಂತಹ ಹೇಳಿಕೆ ನೀಡಿದ್ದಾರೆ. ರಾಮನಗರದಲ್ಲಿ ಏಸು ಕ್ರಿಸ್ತನ ಪ್ರತಿಮೆ ಸ್ಥಾಪನೆಗೂ ಡಿಕೆಶಿ ಹಿಂದೊಮ್ಮೆ ಮುಂದಾಗಿದ್ದರು. ಈಗ ಚಾಮುಂಡಿ ಬೆಟ್ಟದ ಕುರಿತು ನೀಡಿರುವ ಹೇಳಿಕೆ ಖಂಡನೀಯ. ಕೂಡಲೇ ಹೇಳಿಕೆ ಹಿಂಪಡೆಯಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ದಸರಾ ಉದ್ಘಾಟಕರ ಆಯ್ಕೆ ಪ್ರಶ್ನಿಸಿದ ವಿಜಯೇಂದ್ರ

ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಸ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ ಕುರಿತಂತೆಯೂ ಆಕ್ಷೇಪ ಎತ್ತಿರುವ ವಿಜಯೇಂದ್ರ ಅವರು, “ಸಿಎಂ ಸಿದ್ದರಾಮಯ್ಯ ಅವರು ಬಾನು ಮುಸ್ತಾಕ್ ಅವರನ್ನು ಮಾತ್ರ ಯಾಕೆ ಕರೆದಿದ್ದಾರೆ. ದೀಪಾ ಭಾಸ್ತಿ ಅವರನ್ನು ಯಾಕೆ ಕರೆದಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು. ನಮ್ಮ ಸಂಸ್ಕೃತಿ ಒಪ್ಪಿಕೊಂಡು ಬರುವ ಯಾರಾದರೂ ದಸರಾ ಉದ್ಘಾಟನೆ ಮಾಡಬಹುದು, ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಇಲ್ಲಿ ಪಕ್ಷಪಾತದ ನಡೆ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ.

ಸಿಬಿಐ ತನಿಖೆಗೆ ಆಗ್ರಹ

ಧರ್ಮಸ್ಥಳ ಪ್ರಕರಣ ಕುರಿತಂತೆ ಮಾತನಾಡಿದ ಬಿ.ವೈ. ವಿಜಯೇಂದ್ರ ಅವರು, “ಪ್ರಕರಣದಲ್ಲಿ ಕ್ಷೇತ್ರದ ಹೆಸರನ್ನು ಹಾಳು ಮಾಡುವ ಪ್ರಯತ್ನಗಳು ನಡೆಯುತ್ತಿದ್ದರೂ ಸರ್ಕಾರ ಬಾಯಿ ಮುಚ್ಚಿಸುವ ಕೆಲಸ ಮಾತ್ರ ಮಾಡುತ್ತಿದೆ. ಹಿಂದು ಭಾವನೆಗಳಿಗೆ ಧಕ್ಕೆ ತಂದಿರುವವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ” ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ಎಸ್ಐಟಿ ಮೇಲೆ ನಮಗೆ ನಂಬಿಕೆ ಇಲ್ಲ. ಈ ಪ್ರಕರಣವನ್ನು ಕೂಡಲೇ ಎನ್ಐಎ ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು. ಸರ್ಕಾರದ ತನಿಖಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇಲ್ಲ ಎಂದು ದೂರಿದ್ದಾರೆ.

Tags:    

Similar News