VISL Revival Plan| ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಅಸ್ತು; ಎರಡು ತಿಂಗಳಲ್ಲಿ ಡಿಪಿಆರ್ ಸಿದ್ಧ- ಎಚ್.ಡಿ.ಕುಮಾರಸ್ವಾಮಿ
ಇಡೀ ಕಾರ್ಖಾನೆಯನ್ನು ಹೊಸದಾಗಿ ಅತ್ಯಾಧುನಿಕವಾಗಿ ನಿರ್ಮಾಣ ಮಾಡಬೇಕಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಪುನಶ್ಚೇತನ ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.;
ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಗೊಳಿಸುವ ವಿಸ್ತೃತ ಯೋಜನಾ ವರದಿ (DPR) ಇನ್ನೆರಡೇ ತಿಂಗಳಲ್ಲಿ ಸಿದ್ಧವಾಗಲಿದೆ.
ವರ್ಷಾಂತ್ಯದಲ್ಲಿ ಪುನಶ್ಚೇತನ ಯೋಜನೆ ಕಾರ್ಯರೂಪಕ್ಕೆ ತರಲು ಸಿದ್ಧತೆಗಳು ಆರಂಭವಾಗಿವೆ. ಇಡೀ ಕಾರ್ಖಾನೆಯನ್ನು ಹೊಸದಾಗಿ ಅತ್ಯಾಧುನಿಕವಾಗಿ ನಿರ್ಮಾಣ ಮಾಡಬೇಕಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಪುನಶ್ಚೇತನ ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಇಡೀ ಕಾರ್ಖಾನೆಯನ್ನು ಹೊಸದಾಗಿ ಮರು ನಿರ್ಮಾಣ ಮಾಡಬೇಕಿದೆ. ಸುಮಾರು 8000 ರಿಂದ 10,000 ಕೋಟಿ ರೂ. ಹೂಡಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದರು.
ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಈಗಾಗಲೇ ಭಾರತೀಯ ಉಕ್ಕು ಪ್ರಾಧಿಕಾರದ (SAIL) ಅಧೀನದಲ್ಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರದಲ್ಲಿ ಉಕ್ಕು ಕ್ಷೇತ್ರದಲ್ಲಿ ಪ್ರಾಧಿಕಾರವು ಒಂದು ಲಕ್ಷ ಕೋಟಿ ಮೊತ್ತ ಹೂಡಿಕೆ ಮಾಡಲಿದೆ. ವಿಐಎಸ್ ಎಲ್ ಕಾರ್ಖಾನೆಯನ್ನೂ ಕೂಡ ಪುನಶ್ಚೇತನಗೊಳಿಸಲಾಗುವುದು ಎಂದು ಸಚಿವರು ಹೇಳಿದರು.
ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವ ಪ್ರಶ್ನೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು 2030ರ ಹೊತ್ತಿಗೆ ದೇಶೀಯವಾಗಿ ವಾರ್ಷಿಕ 300 ದಶಲಕ್ಷ ಟನ್ ಸ್ಟೀಲ್ ಉತ್ಪಾದನೆ ಗುರಿ ನಿಗದಿ ಮಾಡಿದ್ದು, ಅದಕ್ಕೆ ಪೂರಕವಾಗಿ ಸರ್ಕಾರಿ ಸ್ವಾಮ್ಯದಲ್ಲಿರುವ ಉಕ್ಕು ಸ್ಥಾವರಗಳನ್ನು ಬಲಪಡಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ಜನೌಷಧ ಕೇಂದ್ರಗಳ ತೆರವು; ಕೇಂದ್ರ ಸಚಿವರ ಕಿಡಿ
ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಅತ್ಯಂತ ಕಡಿಮೆ ಬೆಲೆಗೆ ಔಷಧ ಮಾರಾಟ ಮಾಡುತ್ತಿರುವ ಜನೌಷಧ ಕೇಂದ್ರಗಳನ್ನು ತೆರವು ಮಾಡಿಸುತ್ತಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕ್ರಮವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.
ಬಡವರು, ಮಧ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಯಲ್ಲಿ ಸಿಗುತ್ತಿದ್ದ ಔಷಧಗಳನ್ನು ತಪ್ಪಿಸಿ ಯಾವುದೋ ಲಾಬಿಗೆ ಅನುಕೂಲ ಮಾಡಿಕೊಡುವ ಕುತಂತ್ರ ಇದರ ಹಿಂದೆ ಅಡಗಿದೆ ಎಂದು ದೂರಿದ ಅವರು, ಜನೌಷಧ ಮಳಿಗೆಗಳನ್ನು ತೆರವು ಮಾಡಿ ಮದ್ಯವನ್ನು ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತೀರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ಸಿಗರು ತಮ್ಮ ಗ್ಯಾರಂಟಿಗಳು ವಿಶ್ವಕ್ಕೆ ಮಾದರಿ ಎಂದು ಹೇಳಿಕೊಳ್ಳುತ್ತಾರೆ. ಆದರೆ, ಜನರ ಹತ್ತಿರಕ್ಕೆ ಹೋಗಿ ಒಮ್ಮೆ ನೋಡಲಿ. ಅಸಲಿ ಸಮಸ್ಯೆ ಏನೆಂದು ಗೊತ್ತಾಗುತ್ತದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ಜನರಿಗೆ ಉಚಿತ ಮಾತ್ರೆ ಕೊಡುವ ಯೋಗ್ಯತೆ ನಿಮ್ಮ ಸರ್ಕಾರಕ್ಕೆ ಇಲ್ಲ. ಮೂಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪರ ವಕೀಲ ಕಪಿಲ್ ಸಿಬಲ್ ಅವರಿಗೆ ವಾದ ಮಾಡಲು 1.49 ಕೋಟಿ ರೂ. ಹಣ ಕೊಡುತ್ತಾ ಇದ್ದಾರೆ. ಆ ಹಣ ಯಾರದು? ಸಿದ್ದರಾಮಯ್ಯ ಅವರ ಮನೆಯ ಹಣವಾ? ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಅವರ ಪತ್ನಿ ಪರವಾಗಿ ಕೋರ್ಟ್‌ನಲ್ಲಿ ವಾದಿಸಲು ಸರ್ಕಾರ ಯಾಕೆ ಶುಲ್ಕ ನೀಡಬೇಕು ಎಂದು ವಾಗ್ದಾಳಿ ನಡೆಸಿದರು.
2011ರಲ್ಲಿ ನಡೆದಿದ್ದ ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿಚಾರಣೆ ಕೈಬಿಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಂತವರಿಂದ ಕೆಪಿಎಸ್‌ಸಿ ಸ್ವಚ್ಛ ಮಾಡಲು ಸಾಧ್ಯವೇ?, ಅರ್ಕಾವತಿ ರೀಡೂ ಮಾಡಿಕೊಟ್ಟಿದ್ದಕ್ಕೆ ಪ್ರತಿಯಾಗಿ ಅಲ್ಲಿದ್ದ ವ್ಯಕ್ತಿಯನ್ನು ತಂದು ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಒಂದೊಂದು ಹುದ್ದೆಗೆ ಲಕ್ಷಾಂತರ, ಕೋಟ್ಯಂತರ ರೂಪಾಯಿ ಫಿಕ್ಸ್ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.
ಮೀಸಲಾತಿ ಕೊಟ್ಟು ಏನು ಮಾಡುತ್ತೀರಿ?
ಪರಿಶಿಷ್ಟರಿಗೆ ಒಳ ಮೀಸಲಾತಿ ಅಂತ ಹೊರಟಿದ್ದೀರಿ. ಮೀಸಲಾತಿ ಕೊಟ್ಟು ಏನ್ ಮಾಡ್ತಿರಿ? ನಿಮ್ಮಿಂದ ಉದ್ಯೋಗ ಕೊಡಲು ಆಗುತ್ತಿಲ್ಲ. ಎರಡು ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಬಿದ್ದಿವೆ. ಎಷ್ಟು ವರ್ಷವಾಯಿತು ಖಾಲಿ ಹುದ್ದೆ ತುಂಬಿ? ಮೀಸಲಾತಿಯಿಂದ ರಾಜಕಾರಣ ಮಾಡಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದರು.