Waqf Assets Dispute | ವಿಜಯೇಂದ್ರ ವಿರುದ್ಧ ಸಿಬಿಐ ತನಿಖೆ ಮಾಡಿಸಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಆಗ್ರಹ
ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಹಿಂದೆ ರಾಜ್ಯ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಗಂಭೀರವಾಗಿ ಪರಿಗಣಿಸಿ ತಕ್ಷಣ ಸಿಬಿಐ ತನಿಖೆಗೆ ಕೊಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ವಕ್ಫ್ ಆಸ್ತಿ ಕುರಿತು ರಾಜ್ಯದಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ. ಚರ್ಚೆಯ ಜೊತೆಗೆ ಹಲವು ಕುತೂಹಲಕಾರಿ ಬೆಳವಣಿಗೆಗಳು ಆಗುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಬಿಐ ತನಿಖೆ ಮಾಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಹಿಂದೆ ರಾಜ್ಯ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಗಂಭೀರವಾಗಿ ಪರಿಗಣಿಸಿ ತಕ್ಷಣ ಸಿಬಿಐ ತನಿಖೆಗೆ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಬಿ.ವೈ. ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದರು. ಜೊತೆಗೆ ಅದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವನ್ನೂ ಒಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ ಎಂದು ಅನ್ವರ್ ಮಾಣಿಪ್ಪಾಡಿ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.
'ನಾ ಖಾವೂಂಗಾ, ನಾ ಖಾನೆ ದೂಂಗಾ' ಎಂದು ಊರೆಲ್ಲ ಡಂಗೂರ ಹೊಡೆದುಕೊಂಡು ತಿರುಗಾಡುವ ನರೇಂದ್ರ ಮೋದಿ, ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ, ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದಿದ್ದಾರೆ.
ವಕ್ಪ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ವಹಿಸುತ್ತಿರುವ ಆಸಕ್ತಿಯನ್ನು ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಪ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಶಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಷಾಮೀಲಾಗಿರುವ ಸಂಶಯ ಇದೆ. ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರುಗಳು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಪ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತಿಹೆಚ್ಚು ನೋಟೀಸ್‌ಗಳನ್ನು ನೀಡಿರುವುದನ್ನು ಈಗಾಗಲೇ ತಿಳಿದು ಬಂದಿದೆ. ಮಾಣಿಪ್ಪಾಡಿ ಅವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ? ವಕ್ಪ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎಂಬುದರ ಕುರಿತೂ ತನಿಖೆಯಾಗಬೇಕಾಗಿದೆ.
ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದಾರೆ. ಮತ್ತೊಂದೆಡೆ ಪಕ್ಷದ ಹೈಕಮಾಂಡ್ಗೆ 2 ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿ ವಿಜಯೇಂದ್ರ ತಮ್ಮ ತಂದೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದರು. ಈ ಎಲ್ಲ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿತ್ತು ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿ ಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದ ಪ್ರಿಯಾಂಕ್ ಖರ್ಗೆ
ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೇಲೆ ಮಾಡಿದ್ದ ಆರೋಪವನ್ನು ಶುಕ್ರವಾರ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದರು. ವಿಧಾನಸಭೆ ಕಲಾಪದಲ್ಲಿ ವಕ್ಫ್ ವಿಚಾರದ ಮೇಲೆ ಚರ್ಚೆಗೆ ಅವಕಾಶ ಕೊಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನಿಲುವಳಿ ಸೂಚನೆ ಮಂಡಿಸಿದ್ದರು. ಆದರೆ ಸ್ಪೀಕರ್ ಯು.ಟಿ. ಖಾದರ್ ಚರ್ಚೆಗೆ ಅವಕಾಶ ಕೊಡುತ್ತಿಲ್ಲ ಎಂದು ಮಾಧ್ಯಮಗಳ ಎದುರು ಅಶೋಕ್ ಹೇಳಿಕೆ ನೀಡಿದ್ದರು. ಈಗ ಪ್ರಿಯಾಂಕ್ ಖರ್ಗೆ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ.
ವಿಜಯೇಂದ್ರ ಮೇಲೆ ಆರೋಪ ಮಾಡಿದ್ದ ಮಾಣಿಪ್ಪಾಡಿ
ವಕ್ಫ್ ಆಸ್ತಿ ಕುರಿತು ಆಗ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಸಮಗ್ರ ವರದಿಯನ್ನು ಸಲ್ಲಿಸಿದ್ದರು. ವರದಿ ತಯಾರಿಸುವ ಸಂದರ್ಭದಲ್ಲಿ ಬಿ.ವೈ. ವಿಜಯೇಂದ್ರ ಅನ್ವರ್ ಮಾಣಿಪ್ಪಾಡಿ ಅವರನ್ನು ಭೇಟಿ ಮಾಡಿ ಸುಮ್ಮನಿರುವಂತೆ ಕೇಳಿಕೊಂಡಿದ್ದರು ಎಂದು ಮಾಣಿಪ್ಪಾಡಿ ಆಗ ಆರೋಪಿಸಿದ್ದರು. ಪತ್ರವನ್ನು ಬರೆದಿರುವುದಾಗಿಯೂ ಹೇಳಿದ್ದರು. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿವಿದ್ದಾಗ ಈ ವಿಷಯ ಅಷ್ಟೊಂದು ಚರ್ಚೆ ಆಗಿರಲಿಲ್ಲ. ಈಗ ಮತ್ತೊಮ್ಮೆ ಇದೇ ವಿಷಯವನ್ನು ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ಚರ್ಚಿಸುವ ಮೂಲಕ ಮುನ್ನೆಲೆಗೆ ಬಂದಿದೆ.