ಹಾಸನದಲ್ಲಿ ಮತ್ತೆ ಜೆಡಿಎಸ್ ಪಕ್ಷ ಕಟ್ಟುತ್ತೇವೆ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು, ಜೆಡಿಎಸ್‌ ರಾಜ್ಯಾಧ್ಯಕ್ಷರ ಬದಲಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದಾರೆ.

Update: 2024-06-13 13:56 GMT
ನಿಖಿಲ್‌ ಕುಮಾರಸ್ವಾಮಿ

`ಹಾಸನದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತೆ ಸಂಘಟಿಸುತ್ತೇವೆ. ಲಕ್ಷಾಂತರ ಜನ ಕಾರ್ಯಕರ್ತರು ಹಾಸನದಲ್ಲಿ ಜೆಡಿಎಸ್ ಪಕ್ಷವನ್ನು ನಂಬಿದ್ದಾರೆʼ ಎಂದು ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಜೆಡಿಎಸ್‌ನ ರಾಜ್ಯ ಕಚೇರಿ ಜೆ.ಪಿ ಭವನದಲ್ಲಿ ಗುರುವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ʻಹಾಸನದಲ್ಲಿ ಅನಿರೀಕ್ಷಿತ ಬೆಳವಣಿಗೆ ನಡೆದಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಸೋಲನ್ನು ನಿರೀಕ್ಷಿಸಿರಲಿಲ್ಲ. ಇಲ್ಲಿ ಮತ್ತೆ ಪಕ್ಷ ಸಂಘಟನೆ ಮಾಡಲಿದ್ದೇವೆ. ಚುನಾವಣೆಯಲ್ಲಿ ಸೋಲು– ಗೆಲುವು ಸಾಮಾನ್ಯ. ಆದರೆ, ಸೋತಿದ್ದೇವೆ ಎಂದು ಕೈಕಟ್ಟಿ ಕುಳಿತುಕೊಳ್ಳುವ ಪರಿಸ್ಥಿತಿ ಇಲ್ಲ. ಆತ್ಮಾವಲೋಕನ ಸಭೆ ನಡೆಸಲಿದ್ದೇವೆ. ಸೋಲಿನ ಬಗ್ಗೆ ನಾನು ಬಹಿರಂಗವಾಗಿ ಚರ್ಚಿಸಲು ಇಚ್ಛಿಸುವುದಿಲ್ಲʼ ಎಂದರು.

ಪ್ರಜ್ವಲ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಜೆಡಿಎಸ್‌ಗೆ ಸೋಲಾಗಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ನಿಖಿಲ್ ಕುಮಾರಸ್ವಾಮಿ, ʻನಾನು ಪ್ರಜ್ವಲ್ ರೇವಣ್ಣನ ಪ್ರಕರಣದ ಬಗ್ಗೆ ಮಾತನಾಡುವುದಿಲ್ಲ. ಅದು ಮುಗಿದು ಹೋಗಿರುವ ವಿಚಾರʼ ಎಂದರು.

ನಾಳೆ ರಾಜ್ಯಕ್ಕೆ ಎಚ್.ಡಿ ಕುಮಾರಸ್ವಾಮಿ ಆಗಮನ

ʻಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ  ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿ ಜೂನ್ 14ರಂದು ಕರ್ನಾಟಕಕ್ಕೆ ಬರಲಿದ್ದಾರೆ. ಶುಕ್ರವಾರ ಬೆಳಿಗ್ಗೆ ಅಂತರರಾಷ್ಟ್ರೀಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಲಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅವರನ್ನು ಸ್ವಾಗತಿಸಲು ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ನೆಲಮಂಗಲ ಹಾಗೂ ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಯಿಂದ ಕಾರ್ಯಕರ್ತರು ಆಗಮಿಸಲಿದ್ದಾರೆʼ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ʻಶುಕ್ರವಾರ ಎಚ್‌.ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಮುಖ್ಯ ಕಚೇರಿಗೂ ಬರಲಿದ್ದಾರೆ. ನಂತರ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ. ಮಂಡ್ಯ ಹಾಗೂ ರಾಮನಗರದಲ್ಲೂ ಅಭಿನಂದನಾ ಸಮಾರಂಭ ನಡೆಯಲಿದೆʼ ಎಂದರು.

ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆದಿಲ್ಲ

ಎಚ್.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಪ್ರತಿಕ್ರಿಯಿಸಿದ ಅವರು, ʼಚನ್ನಪಟ್ಟಣ ಸೇರಿದಂತೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಬೇಕಿದೆ. ಬಿಜೆಪಿ – ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಹಾಗೂ ಬಿಜೆಪಿ – ಜೆಡಿಎಸ್‌ನ ಮುಖಂಡರು ಜಂಟಿಯಾಗಿ ಯಾರು ಸ್ಪರ್ಧೆ ಮಾಡಬೇಕು ಎನ್ನುವ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆʼ ಎಂದು ಹೇಳಿದರು.

ʻನಾನು ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ ಈಗ ಅಪ್ರಸ್ತುತ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲೂ ಜೆಡಿಎಸ್ ಮೂರು ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿತ್ತು. ಬಿಜೆಪಿಯ ಮೇಲೆ ಯಾವುದೇ ಒತ್ತಡವನ್ನು ಹೇರಿರಲಿಲ್ಲ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎನ್ನುವುದು ಎಲ್ಲರ ನಿರೀಕ್ಷೆಯಾಗಿತ್ತು. ಅದೇ ರೀತಿ ಕರ್ನಾಟಕದಲ್ಲಿ ನಡೆಯುವ ಉಪ ಚುನಾವಣೆಯಲ್ಲೂ ಎರಡೂ ಪಕ್ಷದ ಮುಖಂಡರು ಹಾಗೂ ನಾಯಕರು ಸಮಾಲೋಚನೆ ನಡೆಸಿ, ವರದಿಯ ಆಧಾರದ ಮೇಲೆ ಅಭ್ಯರ್ಥಿಯನ್ನು ನಿರ್ಧರಿಸಲಿದ್ದಾರೆʼ ಎಂದರು.

ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಯಾಗಿಲ್ಲ

ʻಜೆಡಿಎಸ್ ರಾಜ್ಯಾಧ್ಯಾಕ್ಷರ ಬದಲಾವಣೆಯ ಬಗ್ಗೆ ಚರ್ಚೆ ನಡೆದಿಲ್ಲʼ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ʻರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ಈಗ ಯಾವುದೇ ಚರ್ಚೆ ನಡೆದಿಲ್ಲ. ಜೆಡಿಎಸ್‌ನಲ್ಲಿ ಜಿ.ಟಿ ದೇವೇಗೌಡ ಸೇರಿದಂತೆ ಹಲವು ಹಿರಿಯ ಹಾಗೂ ಅನುಭವಿ ನಾಯಕರು ಇದ್ದಾರೆ. ನಾನು ರಾಜ್ಯಾಧ್ಯಕ್ಷ ಆಗಲಿದ್ದೇನೆಯೇ ಎನ್ನುವ ಚರ್ಚೆ ಈಗ ಅಪ್ರಸ್ತುತ. ಆದರೆ, ಪದಾಧಿಕಾರಿಗಳು ಹಾಗೂ ಯುವ ಘಟಕದ ಪುನರ್ ರಚನೆ ಮಾಡುವ ಬಗ್ಗೆ ಚಿಂತನೆ ಇದೆʼ ಎಂದರು.

Tags:    

Similar News