ಮಲ್ಲಿಕಾರ್ಜುನ ಖರ್ಗೆ ಆದೇಶದಂತೆ ಒಟ್ಟಾಗಿ ಕೆಲಸ ಮಾಡುತ್ತೇವೆ : ಡಿಕೆಶಿ
ಮಲ್ಲಿಕಾರ್ಜುನ ಖರ್ಗೆ ಮಾತಿಗೆ ನಾವೆಲ್ಲರೂ ಬದ್ಧರಾಗಿ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಪುನರುಚ್ಚರಿಸಿದ್ದಾರೆ.;
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಮಗೆ ಸಂದೇಶ ನೀಡಿದ್ದು, ಅವರ ಮಾತಿಗೆ ನಾವೆಲ್ಲರೂ ಬದ್ಧರಾಗಿ, ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮೈಸೂರಿನಲ್ಲಿ ಪತ್ನಿ ಉಷಾ ಅವರ ಜತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ರೇಸ್‌ನಿಂದ ಹೊರಬಿದ್ದಿದ್ದೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೇವರ ದರ್ಶನಕ್ಕೆ ಬಂದಿದ್ದೇನೆ, ರಾಜಕೀಯ ಮಾತನಾಡಲ್ಲ. ಯಾವುದೇ ಕೆಲಸ ಪ್ರಾರಂಭ ಮಾಡಬೇಕಾದರೂ ತಾಯಿಯ ಆಶೀರ್ವಾದ ಕೇಳುತ್ತೇನೆ. ಹೀಗಾಗಿ ಕುಟುಂಬ ಸಮೇತವಾಗಿ ಬಂದು ರಾಜ್ಯಕ್ಕೆ ಒಳ್ಳೆಯದಾಗಲಿ ಎಂಬುದಾಗಿ ಪ್ರಾರ್ಥಿಸಿದ್ದೇನೆ ಎಂದರು.
ದುಃಖವನ್ನು ದೂರ ಮಾಡುವ ದೇವಿ ದುರ್ಗಾದೇವಿ. ಈ ವರ್ಷ ನಾಡದೇವಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮವಾಗಿ ಮಳೆ ಬೀಳುತ್ತಿದೆ. ಈ ವರ್ಷ ಉತ್ತಮ ಮಳೆ, ನೆಮ್ಮದಿ, ಶಾಂತಿ ಲಭಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಪ್ರಯತ್ನ ವಿಫಲವಾಗಬಹುದು ಪ್ರಾರ್ಥನೆ ವಿಫಲವಾಗುವುದಿಲ್ಲ ಎನ್ನುವುದು ನನ್ನ ನಂಬಿಕೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಬದಲಾವಣೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿಯೇ ಭಿನ್ನರಾಗ ಇದೆ. ಕಾಂಗ್ರೆಸ್ ಸರ್ಕಾರದ ನಡೆಯ ಬಗ್ಗೆ ಸ್ವಪಕ್ಷೀಯರಿಂದಲೇ ತೀವ್ರ ಆಕ್ಷೇಪ ವ್ಯಕ್ತವಾಯಿತು. ಇದು ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಯಿತು. ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಸರ್ಕಾರದ ವಿರುದ್ಧ ಹೇಳಿಕೆ ನೀಡಿ ತೀವ್ರ ಮುಜುಗರವನ್ನುಂಟು ಮಾಡಿದರು. ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಶಾಸಕ ಅನ್ಸಾರಿ ಇಕ್ಬಾಲ್ ನೀಡಿದ ಹೇಳಿಕೆಯು ಸಹ ಕೋಲಾಹಲವನ್ನುಂಟು ಹಾಕಿತು. ಇದು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ಗೆ ಟೀಕಾಪ್ರಹಾರ ನಡೆಸಲು ಪ್ರಮುಖ ಅಸ್ತ್ರವಾಗಿತ್ತು. ರಾಜ್ಯದಲ್ಲಿ ತೀವ್ರ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಕಾಂಗ್ರೆಸ್‌ನ ಹೈಕಮಾಂಡ್ ಮುಖಂಡರು ರಾಜ್ಯಕ್ಕೆ ಆಗಮಿಸಿ ಸಭೆ ನಡೆಸಿದರು.
ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸಲಾಯಿತು. ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಈ ವೇಳೆ ಯಾವುದೇ ಭಿನ್ನಮತಗಳಿದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಬೇಕು. ಮಾಧ್ಯಮಗಳ ಮುಂದೆ ಹೇಳಿಕೆ ನೀಡದಂತೆ ಸೂಚನೆ ನೀಡಿದರು. ವರಿಷ್ಠರು ನಿರ್ದೇಶನ ನೀಡಿದ ಬಳಿಕ ರಾಜ್ಯ ನಾಯಕರು ಸದ್ಯಕ್ಕೆ ತಣ್ಣಾಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಹೇಳಿಕೆಯು ಸಹ ಪುಷ್ಠಿ ನೀಡಿದೆ ಎಂದು ಹೇಳಬಹುದು.