ಕಸ್ತೂರಿ ರಂಗನ್‌ ವರದಿ | 4554 ಚ.ಕಿ.ಮೀ ಕಡಿತ ಮಾಡಲು ಪಶ್ಚಿಮಘಟ್ಟ ಶಾಸಕರ ಷರತ್ತು

ಈಗಾಗಲೇ ಇರುವ 16114 ಚ.ಕಿ.ಮೀ. ಪ್ರದೇಶಕ್ಕೆ ಅಂಗೀಕಾರ ನೀಡಿದರೂ ಈ ಪ್ರದೇಶದಲ್ಲಿರುವ 1576 ಗ್ರಾಮಗಳ ಜನರ ಜೀವನೋಪಾಯಕ್ಕೆ ಅನನುಕೂಲ ಆಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂಬ ಒತ್ತಾಯ ಮಾಡಬಹುದು ಎಂದು ತಾವು ಸಲಹೆ ನೀಡಿರುವುದಾಗಿ ಅರಣ್ಯ ಸಚಿವರು ತಿಳಿಸಿದರು.

Update: 2024-09-19 10:55 GMT

ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ. ಆದರೆ, 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶವನ್ನು ಸರ್ಕಾರ ಸಂರಕ್ಷಿಸಿದ್ದು, ಹೆಚ್ಚುವರಿ ಬಫರ್‌ ಪ್ರದೇಶ (4554 ಎಕರೆ )ವನ್ನು ಶೂನ್ಯ ಸೂಕ್ಷ ಪ್ರದೇಶವಾಗಿ ಮಾಡುವ ಷರತ್ತಿಗೆ ಒಳಪಟ್ಟು ಕಸ್ತೂರಿ ರಂಗನ್‌ ವರದಿಯನ್ನು ಜಾರಿಗೆ ತರಬಹುದು ಎಂಬ ನಿರ್ಧಾರಕ್ಕೆ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳ (ಬಾಧ್ಯಸ್ಥರ) ಸಭೆ ನಿರ್ಣಯ ತೆಗೆದುಕೊಂಡಿದೆ.

ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಎಲ್ಲರ ಅಭಿಪ್ರಾಯ ಪಡೆದು ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಬಳಿಕ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು ಕೇಂದ್ರ ಸರ್ಕಾರಕ್ಕೆ ನಮ್ಮ ನಿಲುವು ತಿಳಿಸಲೂ ಈ ಸಭೆಯಲ್ಲಿ ನಿರ್ಧರಿಸಲಾಗಿದೆ.

ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ ಸಲಹೆಯನ್ನು ಕೇಂದ್ರ ಸರ್ಕಾರಕ್ಕೆ ನೀಡಲಾಗುವುದು ಎಂದು ಈಶ್ವರ ಖಂಡ್ರೆ ಹೇಳಿದ್ದರೆ.

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಆ.2ರಂದು 6ನೇ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ ಒಳಗೆ ರಾಜ್ಯ ಸರ್ಕಾರದ ನಿಲುವು ಸಲ್ಲಿಸಬೇಕಿರುವ ಹಿನ್ನೆಲೆಯಲ್ಲಿ ನಡೆದ 11 ಜಿಲ್ಲೆಗಳ ಜನಪ್ರತಿನಿಧಿಗಳ (ಬಾಧ್ಯಸ್ಥರ) ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವರು ಈ ವಿವರ ನೀಡಿದರು.

ಅಭಿಪ್ರಾಯಗಳನ್ನು ಶುಕ್ರವಾರ ನಡೆಯಲಿರುವ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, ಸಂಪುಟದ ಅನುಮೋದನೆ ಪಡೆದು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈಗಾಗಲೇ ರಾಜ್ಯದಲ್ಲಿ 16114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ ಇದ್ದು, ಇನ್ನು ಹೆಚ್ಚಳ ಮಾಡಿದರೆ ಅರಣ್ಯದಂಚಿನ ಜನರ ಬದುಕೇ ದುಸ್ತರವಾಗುತ್ತದೆ. ಹೀಗಾಗಿ ಬಫರ್ ವಲಯವನ್ನು ಶೂನ್ಯಕ್ಕೆ ತರಬೇಕು ಎಂದು ಸಲಹೆ ಸಭೆಯಲ್ಲಿ ಜನಪ್ರತಿನಿಧಿಗಳು ಸಲಹೆ ನೀಡಿದ್ದಾರೆ. ಹಾಲಿ ಇರುವ 16114 ಚ.ಕಿ.ಮೀ. ಮಿತಿಗೆ ಸಮ್ಮತಿಸಿದರೆ ಶೂನ್ಯ ಬಫರ್ ಆಗುತ್ತದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ ಎಂದೂ ಜನಪ್ರತಿನಿಧಿಗಳು ಅಭಿಪ್ರಾಯಪಟ್ಟಿದ್ದಾರೆ.

ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ. ಈ ಬಗ್ಗೆ ಭೌತಿಕ ಸರ್ವೆ ನಡೆಸಿದರೆ ಈ ಪ್ರದೇಶ ಇನ್ನೂ ಹೆಚ್ಚಳವಾಗಲಿದೆ ಎಂಬ ಅಭಿಪ್ರಾಯವನ್ನೂ ಜನಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಲಾಖೆ ಪರಿಶೀಲಿಸಲಿದೆ ಎಂದು ಖಂಡ್ರೆ ಹೇಳಿದ್ದಾರೆ.

ಹಲವು ತಲೆಮಾರುಗಳಿಂದ ಅರಣ್ಯ ಪ್ರದೇಶದಲ್ಲೇ ಜೀವನ ನಡೆಸುತ್ತಿರುವವರನ್ನು ಒಕ್ಕಲೆಬ್ಬಿಸುವುದು ಸೂಕ್ತವಲ್ಲ. ಅವರಿಗೆ ಬೇರೆ ಕಡೆ ಪುನರ್ವಸತಿ ಕಲ್ಪಿಸಿದರೂ ಅವರು ಅಲ್ಲಿಗೆ ಹೋಗುವುದಿಲ್ಲ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಗಿದೆ ಹೀಗಾಗಿ ಸಂಪುಟ ಸಮಿತಿ ಸಭೆಯಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.

ವಿಶೇಷ ಪ್ಯಾಕೇಜ್ ಗೆ ಒತ್ತಾಯ

ಈಗಾಗಲೇ ಇರುವ 16114 ಚ.ಕಿ.ಮೀ. ಪ್ರದೇಶಕ್ಕೆ ಅಂಗೀಕಾರ ನೀಡಿದರೂ ಈ ಪ್ರದೇಶದಲ್ಲಿರುವ 1576 ಗ್ರಾಮಗಳ ಜನರ ಜೀವನೋಪಾಯಕ್ಕೆ ಅನನುಕೂಲ ಆಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂಬ ಒತ್ತಾಯ ಮಾಡಬಹುದು ಎಂದು ತಾವು ಸಲಹೆ ನೀಡಿರುವುದಾಗಿ ಅರಣ್ಯ ಸಚಿವರು ತಿಳಿಸಿದರು.

ಪಶ್ಚಿಮ ಘಟ್ಟ ಕೇವಲ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿಗೆ ಮಾತ್ರ ಸಂಬಂಧಿಸಿದ್ದಲ್ಲ. ಈ ಘಟ್ಟ ಪ್ರದೇಶ ಹಲವು ನದಿಗಳ ಉಗಮ ಸ್ಥಾನವಾಗಿದೆ ಮಿಗಿಲಾಗಿ ಮಳೆಯ ಮಾರುತಗಳನ್ನು ತಡೆಯುವ ಕಾರಣ ದೇಶಾದ್ಯಂತ ವ್ಯಾಪಕ ಮಳೆಯಾಗುತ್ತದೆ. ಹೀಗಾಗಿ ಈ ಪಶ್ಚಿಮಘಟ್ಟ ಸಂರಕ್ಷಣೆಯ ಹೊಣೆ ಕೇಂದ್ರದ್ದೂ ಆಗಿದೆ. ಆದ ಕಾರಣ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದರು.

ಒತ್ತುವರಿ ತೆರವಿನ ಬಗ್ಗೆ ಸ್ಪಷ್ಟೀಕರಣ

ಒತ್ತುವರಿ ತೆರವಿನ ಬಗ್ಗೆ ತಾವು ನೀಡಿರುವ ಟಿಪ್ಪಣಿಗಳು ಸ್ಪಷ್ಟವಾಗಿವೆ. 2015ರ ನಂತರದ ಒತ್ತುವರಿ ಮಾತ್ರ ತೆರವು ಮಾಡಲು ಸೂಚಿಸಲಾಗಿದೆ. ಜೊತೆಗೆ 2015ರ ಸರ್ಕಾರದ ಆದೇಶ ಮತ್ತು ನಡವಳಿಯಂತೆ 3 ಎಕರೆಗಿಂತ ಮೇಲ್ಪಟ್ಟ ದೊಡ್ಡ ಒತ್ತುವರಿ ತೆರವು ಮಾಡಲಾಗುತ್ತಿದ್ದು, ಬಡ ರೈತರ ಒತ್ತುವರಿಯನ್ನು (ಪಟ್ಟಾಭೂಮಿ ಮತ್ತು ಒತ್ತುವರಿ ಸೇರಿ 3 ಎಕರೆ) ತೆರವು ಮಾಡಿಸುವುದಿಲ್ಲ ಎಂದು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ ಎಂದರು.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾಸಕ ರಾಜೇಗೌಡರು 3 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವವರ ಜೀವನೋಪಾಯಕ್ಕೆ ತೊಂದರೆ ಆಗದಂತೆ ಕ್ರಮ ವಹಿಸಲು ಮನವಿ ಮಾಡಿರುತ್ತಾರೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಸಭೆಯಲ್ಲಿ ಸಚಿವರುಗಳಾದ ಕೆ.ಜೆ.ಜಾರ್ಜ್, ಡಾ.ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೋಳಿ, ಮಧು ಬಂಗಾರಪ್ಪ, ಮಾಂಕಾಳ ವೈದ್ಯ, ವಿಧಾನಪರಿಷತ್ ಉಪ ಸಭಾಪತಿ ಪ್ರಾಣೇಶ್,ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಶಾಸಕರುಗಳಾದ ಆರಗ ಜ್ಞಾನೇಂದ್ರ, ನಯನ ಮೋಟಮ್ಮ, ರಾಜೇಗೌಡ, ಹರೀಶ್ ಪೂಂಜಾ, ಸಂಸದರಾದ ಶ್ರೇಯಸ್ ಪಟೇಲ್ ಮತ್ತಿತರರು ಪಾಲ್ಗೊಂಡಿದ್ದರು.

Tags:    

Similar News