Heavy Rain| ರಾಜ್ಯದಲ್ಲಿ ಮೇ 28ರವರೆಗೆ ಭಾರಿ ಮಳೆ: ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿಗೆ ಎಚ್ಚರಿಕೆ
ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ 40-60 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.;
ರಾಜ್ಯದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕದಲ್ಲಿ ಮೇ 28ರವರೆಗೆ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು (ಸೋಮವಾರ) ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರೊಂದಿಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ನಾಳೆ (ಮಂಗಳವಾರ) ಕೂಡ ಅತಿ ಹೆಚ್ಚು ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಬುಧವಾರದಿಂದ ಮಳೆಯ ತೀವ್ರತೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕರ್ನಾಟಕದಲ್ಲಿ ವ್ಯಾಪಕ ಮಳೆ ಮುಂದುವರಿಕೆ
ಉತ್ತರ ಕರ್ನಾಟಕ ಭಾಗದಲ್ಲಿ ಮೇ 28ರವರೆಗೆ ಭಾರೀ ಮಳೆಯಾಗಲಿದೆ. ಸೋಮವಾರ ಮತ್ತು ಮಂಗಳವಾರದಂದು ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ ಮತ್ತು ಗದಗ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಬುಧವಾರದವರೆಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲಿ ಮಳೆ
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗಲಿದ್ದು, ಬುಧವಾರದವರೆಗೆ ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಮೈಸೂರು, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು (ಮೇ 26) ಸಣ್ಣ ಪ್ರಮಾಣದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ನೈಋತ್ಯ ಮುಂಗಾರು ಪ್ರವೇಶಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇನ್ನೊಂದು ವಾರ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಭಾನುವಾರದಿಂದ ಮಳೆಯಾಗುತ್ತಿದ್ದು, ಸೋಮವಾರವೂ ಮುಂದುವರಿದಿದೆ. ನಗರದಲ್ಲಿ ಮಿಂಚು-ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.