ಮುಂದಿನ ತಿಂಗಳು 8 ರಿಂದ 10 ದಿನಗಳ ಕಾಲ ಚಳಿಗಾಲ ಅಧಿವೇಶನ : ಸಚಿವ ಸಂಪುಟ ನಿರ್ಧಾರ

ಬೆಳಗಾವಿಯಲ್ಲಿ ಡಿ.8-19ರವರೆಗೆ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Update: 2025-11-13 13:52 GMT

ಚಳಿಗಾಲದ ಅಧಿವೇಶವನ್ನು ಮುಂದಿನ ತಿಂಗಳು 8 ರಿಂದ 9ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಸಚಿವ ಸಂಪುಟ ಸಭೆ ನಿರ್ಣಯಿಸಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್‌.ಕೆ.ಪಾಟೀಲ್‌ ಈ ವಿಷಯ ತಿಳಿಸಿದರು.

ಬೆಳಗಾವಿಯಲ್ಲಿ ಡಿ.8-19ರವರೆಗೆ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿದೆ. ಕಳೆದ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನ ದಿನಾಂಕ ನಿಗದಿ ಮಾಡಲು ಮುಖ್ಯಮಂತ್ರಿಗೆ ಅಧಿಕಾರ ನೀಡಲಾಗಿತ್ತು. ಮುಖ್ಯಮಂತ್ರಿಗಳು ದಿನಾಂಕ ನಿಗದಿಗೊಳಿಸಿದ್ದು, ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದರು. 

ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ,2024ರ ವಿವಿಧ ಕಲಂಗಳಿಗೆ ತಿದ್ದುಪಡಿ ತರುವ ಉದ್ದೇಶದ ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ. ಬೆಳಗಾವಿ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ತೀರ್ಮಾನಿಸಲಾಯಿತು.

ಬೆಂಗಳೂರು ಅಭಿವೃದ್ಧಿ ಸಚಿವರು ಅಥವಾ ಮುಖ್ಯಮಂತ್ರಿಗಳು ನಾಮನಿರ್ದೇಶಿಸುವ ಸಚಿವರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿ ರಚನೆಯ ಬಗ್ಗೆ ಪ್ರಸ್ತಾಪ ಮಾಡಿದ್ದು, ಈ ಸಮಿತಿಗೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸೇರ್ಪಡೆಗೊಳಿಸಲು ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದರು. 

ವರದಿ ವಿಳಂಬದ ಬಗ್ಗೆ ಸಚಿವ ಸಂಪುಟದಲ್ಲಿ ಆಕ್ಷೇಪ

ಮೂರು ಸಚಿವ ಸಂಪುಟ ಉಪಸಮಿತಿಗಳು ಆರು ತಿಂಗಳು ಮೀರಿದರೂ ವರದಿಯನ್ನು ಸಲ್ಲಿಸದಿರುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಯಿತು. ವರದಿ ಸಲ್ಲಿಸಲು ವಿಳಂಬವಾಗುತ್ತಿರುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ವರದಿ ಶೀಘ್ರವಾಗಿ ನೀಡಲು ಮುಖ್ಯಮಂತ್ರಿ  ಸೂಚನೆ ನೀಡಿದ್ದಾರೆ.

ಕೋವಿಡ್ ಖರೀದಿ ಅಕ್ರಮ ಸಂಬಂಧ ನ್ಯಾ. ಮೈಕೆಲ್ ಕುನ್ಹಾರ ಆಯೋಗ ವರದಿ ಮೇಲಿನ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯ ಸಂಪುಟ ಉಪಸಮಿತಿ, ಮೈಸೂರು ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ (ನೈಸ್‌) ಯೋಜನೆಯ ಕಾರ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲು ಸಚಿವ ಜಿ.ಪರಮೇಶ್ವರ್ ನೇತೃತ್ವದ ಸಂಪುಟ ಉಪಸಮಿತಿ ಹಾಗೂ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಯನ್ನು ಪರಿಶೀಲಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಉಪಸಮಿತಿ ವರದಿ ನೀಡಲು ವಿಳಂಬ ಮಾಡಿದೆ ಎಂದು ಹೇಳಿದರು. 

ಮೈಸೂರಿನಲ್ಲಿ ಶಾಸಕರ ಕಚೇರಿಗಳಿಗೆ ಪ್ರತ್ಯೇಕ ಕಟ್ಟಡ 

ಮೈಸೂರು ನಗರದಲ್ಲಿ ಸರ್ಕಾರಿ ಅತಿಥಿ ಗೃಹದ ನೌಕರರ ವಸತಿ ಗೃಹಗಳ ಆವರಣದಲ್ಲಿ ಶಾಸಕರ ಹಾಗೂ ಸಂಸದರ ಭವನವನ್ನು 5 ಕೋಟಿ ರೂ. ಅಂದಾಜು ಮೊತ್ತದಲ್ಲಿ ನಿರ್ಮಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಅತಿಥಿ ಗೃಹದಲ್ಲಿ ಶಾಸಕರ, ಸಂಸದರ ಕಚೇರಿಗಳಿಗೆ ಕೊಠಡಿಗಳನ್ನು ನೀಡಿರುವುದರಿಂದ ಅತಿಥಿ ಗೃಹಗಳಿಗೆ ಬರುವ ಗಣ್ಯ ವ್ಯಕ್ತಿಗಳಿಗೆ ಮತ್ತು ಅಧಿಕಾರಿಗಳಿಗೆ ಉಳಿದುಕೊಳ್ಳಲು ಸ್ಥಳಾವಕಾಶದ ಕೊರತೆಯಾಗಿರುತ್ತದೆ. ಇದರಿಂದ ಗಣ್ಯ ವ್ಯಕ್ತಿಗಳಿಗೆ, ವಿಶೇಷವಾಗಿ ಮಹಿಳೆಯರಿಗೆ ತೊಂದರೆಯಾಗಿರುತ್ತದೆ. ಆದ್ದರಿಂದ ಶಾಸಕರು, ಸಂಸದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗಳನ್ನು ಒಂದೇ ಸೂರಿನಡಿ ನಿರ್ಮಾಣ ಮಾಡುವುದರಿಂದ ಸಾರ್ವಜನಿಕರಿಗೆ ಬಹಳಷ್ಟು ಅನುಕೂಲವಾಗುತ್ತದೆ. ಆದ್ದರಿಂದ, ಮೈಸೂರು ನಗರದಲ್ಲಿ ಶಾಸಕರ ಹಾಗೂ ಸಂಸದರ ಕಚೇರಿಗಳ ಸಮುಚ್ಚಯ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು. 

Tags:    

Similar News