ಯೋಗೇಶ್ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲು
ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು. ನ್ಯಾಯಾಲಯದ ಆದೇಶದ ಮೇರೆಗೆ ಜೈಲಿಗೆ ಕಳುಹಿಸಿದ ಸಿಬಿಐ ಅಧಿಕಾರಿಗಳು;
ಕಳೆದ ಒಂಭತ್ತು ವರ್ಷಗಳ ಹಿಂದೆ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲುಪಾಲಾಗಿದ್ದಾರೆ.
ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿ ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಇಂದು (ಜೂ.13) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನ್ಯಾಯಾಲಯಕ್ಕೆ ಶರಣಾಗಿದರು. ಈ ಸಂದರ್ಭದಲ್ಲಿ ನ್ಯಾಯಾಲಯವು ವಿಚಾರಣೆ ನಡೆಸಿ, ಸುಪ್ರೀಂಕೋರ್ಟ್ನ ಜಾಮೀನು ರದ್ದು ಆದೇಶವನ್ನು ಉಲ್ಲೇಖ ಮಾಡಿತು. ಜಾಮೀನು ರದ್ದುಗೊಂಡ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯುವಂತೆ ಆದೇಶ ನೀಡಿತು. ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ಪರಪ್ಪನ ಅಗ್ರಹಾರಕ್ಕೆ ಜೈಲಿಗೆ ಜೈಲಿಗೆ ಕಳುಹಿಸಿದರು.
2016 ರ ಜೂನ್ 15 ರಂದು ಧಾರವಾಡದ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದ ಯೋಗೀಶಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ತನಿಖೆಯಲ್ಲಿ ವಿನಯ್ ಕುಲಕರ್ಣಿ ಕೈವಾಡ ಇರುವ ಆರೋಪದ ಶಂಕೆಯ ಮೇಲೆ 2020 ನವೆಂಬರ್ 5 ರಂದು ಸಿಬಿಐ ಬಂಧಿಸಿತ್ತು. ಬಳಿಕ 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ವಿನಯ್ ಕುಲಕರ್ಣಿ ಅವರ ಮೇಲೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಆರೋಪ ಹೊರಿಸಲಾಗಿತ್ತು. ಜಾಮೀನು ಷರತ್ತುಗಳನ್ನು ಉಲ್ಲಂಘನೆ ಮಾಡಿರುವುದರಿಂದ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸುವಂತೆ ಸಿಬಿಐ ನ್ಯಾಯಾಲಯಕ್ಕೆ ಮನವಿ ಮಾಡಿತ್ತು.
ನ್ಯಾಯಾಲಯವು ಮನವಿಯನ್ನು ಸ್ವೀಕರಿಸಿ ಅವರ ಜಾಮೀನನ್ನು ರದ್ದುಗೊಳಿಸಿತ್ತು. 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು ಕ್ಷೇತ್ರದ ಹೊರಗಿದ್ದರೂ ಗೆಲುವು ಸಾಧಿಸುವ ಮೂಲಕ ವಿನಯ ಕುಲಕರ್ಣಿ ಇತಿಹಾಸ ನಿರ್ಮಿಸಿದ್ದರು. ಎರಡು ವರ್ಷಗಳ ಕಾಲ ಕ್ಷೇತ್ರದ ಹೊರಗಿದ್ದುಕೊಂಡೇ ಆಡಳಿತ ಮಾಡಿದ್ದ ಅವರು, ಇದೀಗ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ಮತ್ತೆ ಜೈಲು ಪಾಲಾಗಿದ್ದಾರೆ.
ಸಾಕ್ಷಿಗಳಿಗೆ ಹಣದ ಆಮಿಷೆ:
ವಿನಯ್ ಕುಲಕರ್ಣಿ ಸಾಕ್ಷಿಗಳಿಗೆ 1 ಲಕ್ಷ ರೂಪಾಯಿ ಹಣದ ಆಮಿಷ ಒಡ್ಡಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ರದ್ದುಪಡಿಸುವಂತೆ ಮನವಿ ಮಾಡಿತ್ತು. ಯೋಗೀಶ್ ಗೌಡ ಅವರ ಕೊಲೆ 2016ರ ಜೂನ್ 15ರಂದು ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಿತ್ತು. ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿತ್ತು. ಪ್ರಕರಣದಲ್ಲಿ ಒಟ್ಟು 21 ಆರೋಪಿಗಳಿದ್ದಾರೆ. ವಿನಯ್ ಕುಲಕರ್ಣಿ, ಬಸವರಾಜ ಮುತ್ತಗಿ, ಶಿವಾನಂದ ಶ್ರೀಶೈಲ ಬಿರಾದಾರ, ಚಂದ್ರಶೇಖರ್ ಇತರರು ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ.
ಗುರುನಾಥ ಗೌಡ ಎಂಬುವವರು ವಿಚಾರಣಾ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದ್ದರು. ವಿನಯ್ ಕುಲಕರ್ಣಿ ಮತ್ತು ಮೃತ ಯೋಗೇಶ್ ಗೌಡ ನಡುವೆ ಒಂದು ಬಾರಿ ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಗಲಾಟೆ ನಡೆದಿತ್ತು. ಅದಾದ ಕೆಲವೇ ದಿನಗಳಲ್ಲಿ ಹತ್ಯೆಯಾಗಿದೆ ಎಂದು ತಿಳಿಸಿದ್ದರು. ಈ ನಡುವೆ, ಮೊದಲ ಆರೋಪಿ ಬಸವರಾಜ ಮುತ್ತಗಿ ತಪ್ಪೊಪ್ಪಿಕೊಂಡು, ನ್ಯಾಯಾಲಯದ ಮುಂದೆ ಹಲವು ವಿಷಯಗಳನ್ನು ತಿಳಿಸಿದ್ದರು.