ಮುಂಗಾರು ಪೂರ್ವ ಸಿದ್ಧತೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮೇಲೆ ನಿಗಾ;
ಬೆಂಗಳೂರಿನಲ್ಲಿ (bengaluru)ಮುಂಗಾರು ಪೂರ್ವ ಅವಧಿಯಲ್ಲಿ ಆಗಬೇಕಿರುವ ಸಿದ್ದತೆ, ಕುಡಿಯುವ ನೀರು ವ್ಯವಸ್ಥೆ ಹಾಗೂ ಚುನಾವಣೆ ತಯಾರಿಯ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯ ನಂತರ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಲಯಗಳಲ್ಲಿ ಈಗಲೇ ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಿ, ಆ ಪ್ರದೇಶಗಳಲ್ಲಿ ಪ್ರವಾಹ ಆಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಅಲ್ಲದೇ ರಾಜಕಾಲುವೆಗಳಲ್ಲಿ ಹೂಳೆತ್ತಿ ಸರಾಗವಾಗಿ ನೀರು ಹರಿದುಹೋಗುವಂತೆ ಮಾಡಬೇಕು. ರಸ್ತೆ ಬದಿಯ ಚರಂಡಿಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಸೂಚನೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸೂಚನೆ
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಆಯಾ ವಲಯ ಮಟ್ಟದಲ್ಲೇ ಜಲಮಂಡಳಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಪಾಲಿಕೆಯ ಪೋರ್ಟಲ್‌ನಲ್ಲಿ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್‌ಗಳನ್ನು ಈಗಾಗಲೇ ವಲಯವಾರು ವಿಂಗಡಿಸಲಾಗಿದ್ದು, ನೀರಿನ ಸಮಸ್ಯೆ ಇರುವ ವಾರ್ಡ್‌ಗಳಿಗೆ ನೀರು ಸರಬರಾಜು ಮಾಡಬೇಕು ಎಂದು ನಿರ್ದೇಶಿಸಿದರು.
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮೇಲೆ ನಿಗಾ
ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲಿಯೂ ಜನಪ್ರತಿನಿಧಿಗಳಿರುವ ಜಾಹೀರಾತುಗಳು ಇಲ್ಲದಂತೆ ನೋಡಿಕೊಳ್ಳಬೇಕು. ಆಯಾ ವಲಯಗಳಲ್ಲಿ ಪೋಸ್ಟರ್, ಬ್ಯಾನರ್‌ಗಳಿದ್ದರೆ ಕೂಡಲೇ ಅವುಗಳನ್ನು ತೆರವುಗೊಳಿಸಬೇಕು ಎಂದು ಬಿಬಿಎಂಪಿಯ ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ತುಷಾರ್ ಗಿರಿನಾಥ್ ಅವರು ಸೂಚಿಸಿದರು. ಸಭೆಯಲ್ಲಿ ಬಿಬಿಎಂಪಿ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಸುರೋಳ್ಕರ್ ವಿಕಾಸ್ ಕಿಶೋರ್, ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು ಸೇರಿದಂತೆ ಹಲವರು ಇದ್ದರು.