Big Breaking | ಕೊಲೆ ಆರೋಪ: ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಪೊಲೀಸ್‌ ವಶಕ್ಕೆ

ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸ್ಟಾರ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Update: 2024-06-11 05:44 GMT
ನಟ ದರ್ಶನ್‌ ಆರೆಸ್ಟ್‌ ಆಗಿದ್ದಾರೆ.
Click the Play button to listen to article

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೊಲೆ ಪ್ರಕರಣವೊಂದರಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದರ್ಶನ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ಕಾರಣಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಆ ಕೊಲೆ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಟ ದರ್ಶನ್​ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದರ್ಶನ್ ಆಪ್ತೆ ಪವಿತ್ರಾ ಗೌಡ ಅವರಿಗೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬುವವರು ಅಶ್ಲೀಲ ಮೆಸೇಜ್ ಮಾಡಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಚಿತ್ರದುರ್ಗ ಮೂಲದವರಾದ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ಬಳಿಕ ರಾಜರಾಜೇಶ್ವರಿ ನಗರದ ಶೆಡ್‌ನಲ್ಲಿ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಕೊಲೆ ಆರೋಪಿಗಳನ್ನು ಬಂಧಿಸಿದ ಪೊಲೀಸರು, ತೀವ್ರ ವಿಚಾರಣೆ ನಡೆಸಿದ್ದರು. ಆ ವೇಳೆ ಆರೋಪಿಗಳು, ನಟ ದರ್ಶನ್‌ ಅವರ ಹೆಸರು ಬಾಯಿಬಿಟ್ಟಿದ್ದಾರೆ. ದರ್ಶನ್‌ ಅವರ ಸೂಚನೆಯಂತೆ ತಾವು ಕೊಲೆ ಮಾಡಿರುವುದಾಗಿ ಹೇಳಿದ್ದಾರೆ. ಆ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ದರ್ಶನ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ

ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿದೆ.

ದರ್ಶನ್ ಅವರ ಆಪ್ತ ಗೆಳತಿಯಾಗಿರುವ ಹಾಗೂ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ವಿವಾದಕ್ಕೆ ಗುರಿಯಾದ ಪವಿತ್ರಾ ಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದ ಎನ್ನಲಾಗಿದೆ.

ಆ ಹಿನ್ನೆಲೆಯಲ್ಲಿ ಕೆಲವರು ಆತನನ್ನು ಅಪಹರಿಸಿದ ತಂಡ, ಕೊಲೆ ಮಾಡಿ ಕಾಮಾಕ್ಷಿಪಾಳ್ಯದಲ್ಲಿ ಮೃತದೇಹವನ್ನು ಬಿಸಾಕಿದ್ದರು. ಎರಡು ದಿನಗಳ ಹಿಂದೆ ಮೃತ ದೇಹ ಪತ್ತೆಯಾದ ಬಳಿಕ ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು, ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ ಮಾಡಿ, ಕೊಲೆಗೆ ಕಾರಣರಾದ ಹನ್ನೆರಡು ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. 

ವಿಚಾರಣೆ ವೇಳೆ ಆರೋಪಿಗಳು, ದರ್ಶನ್ ಅವರ ಸೂಚನೆಯಂತೆ ತಾವು ಕೊಲೆ ಮಾಡಿರುವುದಾಗಿ ಹೇಳಿದ್ದಾರೆ. ಆ ಹಿನ್ನೆಲೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಆರೋಪಿಯನ್ನಾಗಿ ಪರಿಗಣಿಸಲಾಗಿದೆ. ಹಾಗಾಗಿ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಅವರು ಭಾಗಿಯಾಗಿರುವುದು ಖಚಿತವಾದರೆ ಮತ್ತು ಅದಕ್ಕೆ ಪೂರಕ ಸಾಕ್ಷ್ಯಗಳು ಸಿಕ್ಕರೆ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Similar News