ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣ ಪತ್ತೆ: ಮಾರ್ಗಸೂಚಿ ಬಿಡುಗಡೆ
ಕೇರಳದಿಂದ ಬರುವವರಿಗೆ ಪರೀಕ್ಷೆ ಕಡ್ಡಾಯ
ಬೆಂಗಳೂರು: ಕೇರಳದಲ್ಲಿ ಕೊರೊನಾ ರೂಪಾಂತರಿ ಜೆಎನ್೧ ಪ್ರಕರಣ ಪತ್ತೆಯಾದ ಬೆನ್ನಲ್ಲೇ ರಾಜ್ಯದಲ್ಲಿಯೂ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೊಬ್ಬರಲ್ಲಿ ಕೋವಿಡ್-೧೯ ಸೋಂಕು ದೃಢಪಟ್ಟಿದೆ. ಇವರಿಗೆ ಪ್ರಯಾಣದ ಇತಿಹಾಸ ಇಲ್ಲದಿದ್ದರೂ ಸೋಂಕು ತಗುಲಿದೆ. ಸೋಂಕಿತ ವ್ಯಕ್ತಿಯಲ್ಲಿ ಯಾವ ರೋಗ ಲಕ್ಷಣಗಳೂ ಇರಲಿಲ್ಲ. ಇದೀಗ ವ್ಯಕ್ತಿಯ ಸಂಪರ್ಕದಲ್ಲಿದ್ದ ನಾಲ್ವರಿಗೂ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗಿದ್ದು, ಅವರಲ್ಲಿ ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ.
ಮದ್ದೂರಿನ ವೃದ್ಧರೊಬ್ಬರಿಗೆ ಕೋವಿಡ್ ಪಾಸಿಟಿವ್ ವರದಿಯಾದ ಬಳಿಕ ರಾಮನಗರ ಜಿಲ್ಲೆಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ರಾಮನಗರ ಜಿಲ್ಲೆಯ ಬೈರಮಂಗಲ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇದೀಗ ಪ್ರಕರಣ ಪತ್ತೆಯಾಗಿದೆ. ವರುಣ್ (೨೨) ಸೋಂಕಿತ ವಿದ್ಯಾರ್ಥಿಯಾಗಿದ್ದು, ಈತ ತಿಮ್ಮೆಗೌಡನದೊಡ್ಡಿ ಬಳಿ ಇರುವ ಅಮೃತ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಈತನಿಗೆ ಕೊರೋನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಟೆಸ್ಟ್ ವೇಳೆ ಕೊರೋನಾ ಪಾಸಿಟಿವ್ ಬಂದಿದೆ. ವರುಣ್ ಗೆ ಎರಡು ದಿನದ ಐಸೋಲೇಶನ್ ಗೆ ಒಳಪಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ. ನಿರಂಜನ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಕೋವಿಡ್ ಮಾರ್ಗಸೂಚಿ ಹೊರಡಿಸಿದ್ದು, ಸಾರ್ವಜನಿಕರು ನಿಯಮ ಪಾಲಿಸುವಂತೆ ಸಲಹೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳವಂತೆ ಸೂಚನೆ ನೀಡಲಾಗಿದೆ. ಕೇರಳ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚಿಸಲಾಗಿದೆ. ಕೇರಳದಿಂದ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡುವಂತೆ ಆದೇಶ ನೀಡಲಾಗಿದೆ.
ಆರೋಗ್ಯ ಇಲಾಖೆ ಮಾರ್ಗಸೂಚಿ
* ೬೦ ವಯಸ್ಸಿನ ಮೇಲ್ಪಟ್ಟವರು, ಕಿಡ್ನಿ, ಹೃದಯ, ಲಿವರ್ ಸಮಸ್ಯೆ ಸೇರಿ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಗಡೆ ತೆರಳುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
* ಅಂಥವರು ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದೆ ದೂರ ಇರುವುದು ಸೂಕ್ತವಾಗಿದೆ.
* ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು.
* ದೈಹಿಕ ಸ್ವಚ್ಛತೆಯನ್ನು ಕಾಪಾಡಬೇಕು. ಆಗಾಗ್ಗೆ ಕೈಗಳನ್ನು ಸೋಪು ನೀರಿನಿಂದ ತೊಳೆದುಕೊಳ್ಳಬೇಕಿದೆ.
* ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಉತ್ತಮ. ಈ ವೇಳೆ ಹಿರಿಯ ನಾಗರಿಕರು ಮತ್ತು ಅನಾರೋಗ್ಯ ಪೀಡಿತರನ್ನು ಭೇಟಿ ಮಾಡುವುದನ್ನು ತಪ್ಪಿಸಬೇಕು.
* ವಿದೇಶ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುತ್ತಿರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ (ಡಿ. ೧೮) ಮಾಹಿತಿ ನೀಡಿದ್ದಾರೆ.
ಕೋವಿಡ್ ರೂಪಾಂತರ ಪ್ರಕರಣ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ೬೦ ವಯಸ್ಸಿನ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಮನವಿ ಮಾಡಿದ್ದಾರೆ. ಗಡಿ ಭಾಗದಲ್ಲಿ ಹೆಚ್ಚು ಟೆಸ್ಟಿಂಗ್ ವ್ಯವಸ್ಥೆ ಮಾಡುವ ಬಗ್ಗೆಯೂ ಮಾಹಿತಿಯನ್ನು ನೀಡಿದ್ದಾರೆ.
ಕೇರಳದಲ್ಲಿ ಪತ್ತೆಯಾಗಿರುವ ಜೆಎನ್೧ ಕೋವಿಡ್ ಉಪಪ್ರಭೇದದ ಬಗ್ಗೆ ಪ್ರತಿಕ್ರಿಯಿಸಿದ್ದ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್, ಆತಂಕ ಪಡಬೇಕಾದ ಅಗತ್ಯವಿಲ್ಲ. ಅದೊಂದು ಉಪಪ್ರಭೇದವಾಗಿದ್ದು, ಕೇರಳದಲ್ಲಿ ಅದನ್ನು ಈಗ ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದ್ದಾರೆ.
೨-೩ ತಿಂಗಳುಗಳ ಹಿಂದೆ ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಗಾಗಿದ್ದ ಭಾರತೀಯರಲ್ಲಿ ಈ ಪ್ರಭೇದ ಪತ್ತೆಯಾಗಿತ್ತು. ಭಾರತದ ಇತರೆ ರಾಜ್ಯಗಳಲ್ಲಿಯೂ ಈ ವೈರಸ್ ಹರಡಿದೆ. ಆದರೆ ಕೇರಳವು ಮೊದಲೇ ಪತ್ತೆ ಹಚ್ಚಿದ್ದು, ರಾಜ್ಯದ ಆರೋಗ್ಯ ವ್ಯವಸ್ಥೆ ಉತ್ತಮವಾಗಿರುವುದರಿಂದ ಜಿನೊಮಿಕ್ ಸೀಕ್ವೆನ್ಸಿಂಗ್ ಮೂಲಕ ಅದನ್ನು ನಾವು ಪತ್ತೆ ಹಚ್ಚಲು ಸಾಧ್ಯವಾಗಿದೆ ಎಂದು ಅವರು ಹೇಳಿದ್ದರು.