ಸರ್ಕಾರದ ರೈತ ವಿರೋಧಿ ನೀತಿ | ಜುಲೈ 18ಕ್ಕೆ ರಾಜ್ಯವ್ಯಾಪಿ ರೈತ ಹೋರಾಟ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜು.18ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.;

Update: 2024-07-13 10:13 GMT
ಬಡಗಲಪುರ ನಾಗೇಂದ್ರ
Click the Play button to listen to article

'ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಕೃಷಿಕರ ಆತ್ಮಹತ್ಯೆ ತಡೆಗಟ್ಟಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 18ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುವುದು' ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.

ಈ ಕುರಿತು ಶನಿವಾರ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 'ರಾಜ್ಯದ ಜನರು ಕೋಮುವಾದಿ, ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟಾಚಾರದಲ್ಲಿ ಮುಳುಗಿದ್ದ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಬಹಳ ನಿರೀಕ್ಷೆಯೊಂದಿಗೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದರು. ವಿಧಾನಸೌಧದಲ್ಲಿ ಪಕ್ಷದ ಆಡಳಿತ ಹಾಗೂ ಅಧಿಕಾರಸ್ಥರ ಮುಖಗಳು ಬದಲಾಗಿವೆ. ಆದರೆ, ಜನರ ಆಶೋತ್ತರಗಳು ಈಡೇರಿಲ್ಲ. ಆದ್ದರಿಂದ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಲು ಹೋರಾಟದ ಹಾದಿ ಹಿಡಿದಿದ್ದೇವೆ' ಎಂದು ಹೇಳಿದರು.

'ಈ ಸರ್ಕಾರ ಅಧಿಕಾರಕ್ಕೆ ಬಂದು ಒಂದೇ ವರ್ಷದಲ್ಲಿ, ಪರಿಶಿಷ್ಟ ವರ್ಗದವರಿಗೆ ಮೀಸಲಿಟ್ಟಿದ್ದ ಅನುದಾನವನ್ನು ದುರುಪಯೋಗ ಮಾಡಿಕೊಂಡ ಆರೋಪಕ್ಕೆ ಒಳಗಾಗಿದೆ. ಎಲ್ಲ ಸರ್ಕಾರಿ ಕಚೇರಿಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಜನಸಾಮಾನ್ಯರು ಬಯಸಿದ್ದ ಬದಲಾವಣೆ ಆಗಿಲ್ಲ. ಭ್ರಷ್ಟಾಚಾರದ ನಿರ್ಮೂಲನೆ ಇರಲಿ, ಅದನ್ನು ತಡೆಯುವಂತಹ ಪ್ರಯತ್ನವೂ ಆಗಿಲ್ಲ. ಭೂ ಮಾಫಿಯಾದ ಅಕ್ರಮ ನಿರಂತರವಾಗಿ ನಡೆಯುತ್ತಲೇ ಇದೆ' ಎಂದು ದೂರಿದರು.

ಆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ರೈತ ವಿರೋಧಿ, ಜನ ವಿರೋಧಿ ಆಡಳಿತವನ್ನು ವಿರೋಧಿಸಿ ರಾಜ್ಯವ್ಯಾಪಿ ಹೋರಾಟ ನಡೆಸುತ್ತಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

Tags:    

Similar News