ಪೋಕ್ಸೋ ಪ್ರಕರಣ | ದೂರಿನಲ್ಲಿ ಯಾವುದೇ ಸತ್ಯಾಂಶವಿಲ್ಲ: ಸಂಸದ ಬಿವೈ ರಾಘವೇಂದ್ರ

ಮಹಿಳೆ ನೀಡಿದ್ದ ದೂರಿನಲ್ಲಿ ಯಾವುದೇ ಸತ್ಯ ಇಲ್ಲ ಎಂದು ಬಿ ಎಸ್ ಯಡಿಯೂರಪ್ಪ ಪುತ್ರ ಹಾಗೂ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ.;

Update: 2024-06-14 09:41 GMT
ಬಿವೈ ರಾಘವೇಂದ್ರ
Click the Play button to listen to article

ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ. ಈ ಕುರಿತು ಬಿ ಎಸ್ ಯಡಿಯೂರಪ್ಪ ಪುತ್ರ ಹಾಗೂ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಅವರು ಪ್ರತಿಕ್ರಿಯಿಸಿದ್ದು, ಮಹಿಳೆ ನೀಡಿದ್ದ ದೂರಿನಲ್ಲಿ ಯಾವುದೇ ಸತ್ಯ ಇಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಶುಕ್ರವಾರ (ಜೂ.14) ಮಾತನಾಡಿದ ಅವರು, ''ತಂದೆ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ಸುಮಾರು ಎರಡೂವರೆ ತಿಂಗಳ ಹಿಂದೆ ದೂರು ದಾಖಲಾಗಿದ್ದು, ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ, ಅಧಿಕಾರಿಗಳು ಸೇರಿದಂತೆ 50 ಮಂದಿ ವಿರುದ್ಧ ಆ ಮಹಿಳೆ ಇದೇ ರೀತಿ ದೂರು ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಜೂ.13) ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರಿಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ತಡೆ (ಪೋಕ್ಸೋ) ಕಾಯ್ದೆಯಡಿ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

ಅರ್ಜಿಯ ವಿಚಾರಣೆ ನಡೆಸಿದ ತ್ವರಿತ ನ್ಯಾಯಾಲಯ ಕರ್ನಾಟಕದ ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದು, ಕೂಡಲೇ ಅವರನ್ನು ಬಂಧಿಸುವಂತೆ ಸೂಚಿಸಿದೆ.

ಯಡಿಯೂರಪ್ಪ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಮಾರ್ಚ್‌ನಲ್ಲಿ ಸಂತ್ರಸ್ತೆಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿದ್ದರು. ಈ ಸಂಬಂಧ ಸಂತ್ರಸ್ತೆಯ ಸಹೋದರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

Tags:    

Similar News