ಸಿಎಂ ಸಿದ್ದರಾಮಯ್ಯ ಬಗ್ಗೆ ಪೋಸ್ಟ್: ಮಹೇಶ್ ವಿಕ್ರಂ ಹೆಗ್ಡೆ, ವಸಂತ್ ಗಿಳಿಯಾರ್ ಬಂಧನವಿಲ್ಲ
ಮಹೇಶ್ ವಿಕ್ರಮ್ ಹೆಗ್ಡೆ ಮತ್ತು ವಸಂತ್ ಗಿಳಿಯಾರ್ ಅವರನ್ನು ಅವರನ್ನು ಸದ್ಯಕ್ಕೆ ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶಿಸಿದೆ.;
ಸೋಶಿಯಲ್ ಮೀಡಿಯಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾನಹಾನಿ ಮಾಡುವಂತಹ ನಕಲಿ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪದಡಿ ಬಂಧನದ ಭೀತಿ ಎದುರಿಸುತ್ತಿದ್ದ 'ಪೋಸ್ಟ್ ಕಾರ್ಡ್' ಮುಖ್ಯಸ್ಥ ಮಹೇಶ್ ವಿಕ್ರಮ್ ಹೆಗ್ಡೆ ಮತ್ತು ವಸಂತ್ ಗಿಳಿಯಾರ್ ಅವರನ್ನು ಅವರನ್ನು ಸದ್ಯಕ್ಕೆ ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಈ ಸಂಬಂಧ ಮಹೇಶ್ ವಿಕ್ರಮ್ ಹೆಗ್ಡೆ ಮತ್ತು ವಸಂತ್ ಗಿಳಿಯಾರ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಕೋರಿಕೆಯ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಕೀಲರು, 'ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು' ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠವು ವಿಚಾರಣೆಯನ್ನು ಇದೇ 9ಕ್ಕೆ ಮುಂದೂಡಿತು. ಅಂತೆಯೇ, 'ಮುಂದಿನ ವಿಚಾರಣೆಯವರೆಗೂ ಅರ್ಜಿದಾರರನ್ನು ಬಂಧಿಸಬಾರದು' ಎಂದು ಪೊಲೀಸರಿಗೆ ನಿರ್ದೇಶಿಸಿತು. ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ಹಾಜರಿದ್ದರು.
'ಮಹೇಶ್ ವಿಕ್ರಮ್ ಹೆಗ್ಡೆ ಅವರು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಪ್‌ಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾನಹಾನಿ ಮಾಡುವಂತಹ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ' ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಹರೀಶ್ ನಾಗರಾಜು ಏಪ್ರಿಲ್ 9ರಂದು ಅರ್ಜಿದಾರರೂ ಸೇರಿದಂತೆ ಒಟ್ಟು ಏಳು ಮಂದಿ ವಿರುದ್ಧ ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಇದನ್ನು ಆಧರಿಸಿ ಅರ್ಜಿದಾರರ ವಿರುದ್ಧ ಪಶ್ಚಿಮ ವಿಭಾಗದ ಸಿಇಎನ್ ಠಾಣಾ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಬಂಧನದ ಭೀತಿ ಎದುರಿಸುತ್ತಿರುವ ಅರ್ಜಿದಾರರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.