ರೇಣುಕಾ ಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಮತ್ತೆ ಪೊಲೀಸರ ವಶಕ್ಕೆ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ನಟ ದರ್ಶನ್‌ ಅವರನ್ನು ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ಕೋರ್ಟ್‌ ಆದೇಶ ನೀಡಿದೆ.;

Update: 2024-06-20 12:45 GMT
ನಟ ದರ್ಶನ್‌
Click the Play button to listen to article

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ನಟ ದರ್ಶನ್‌ ಅವರನ್ನು ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ಕೋರ್ಟ್‌ ಆದೇಶ ನೀಡಿದೆ.

ಗುರುವಾರ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಕಾರಣ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್‌ ಸೇರಿ 13 ಆರೋಪಿಗಳನ್ನು ಗುರುವಾರ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಎ 1 ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದ ಕಾರಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗುತ್ತದೆ. ಇನ್ನು ದರ್ಶನ್‌ ಸೇರಿ ನಾಲ್ವರು ಆರೋಪಿಗಳನ್ನು 2 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನಕುಮಾರ್‌ ವಾದ ಮಂಡಿಸಿದರು. “ಕೊಲೆ ಪ್ರಕರಣದ ತನಿಖೆ ವೇಳೆ ಹಲವು ಮಾಹಿತಿ ಲಭ್ಯವಾಗಿದೆ. ಪ್ರಕರಣದ ಕುರಿತು ಆರೋಪಿಗಳ ವಿಚಾರಣೆಯ ಅಗತ್ಯವಿದೆ. ಹಾಗಾಗಿ, ನ್ಯಾಯಾಲಯವು ಇನ್ನೂ ನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ ನೀಡಬೇಕು” ಎಂಬುದಾಗಿ ಮನವಿ ಮಾಡಿದರು. ಇದಕ್ಕೆ ದರ್ಶನ್‌ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. “ಬಹುತೇಕ ವಿಚಾರಣೆ ಮುಗಿದಿದೆ. ಹಾಗಾಗಿ, ಪೊಲೀಸ್‌ ಕಸ್ಟಡಿಗೆ ನೀಡುವ ಅಗತ್ಯವಿಲ್ಲ” ಎಂದರು.

ಆದರೆ, “ರೇಣುಕಾಸ್ವಾಮಿ ಮೊಬೈಲ್‌ ರಿಕವರಿ ಆಗಿಲ್ಲ. ಅದನ್ನು ಪತ್ತೆ ಹಚ್ಚಬೇಕಿದೆ. ದರ್ಶನ್, ವಿನಯ್, ಪ್ರದೋಷ್, ಧನರಾಜ್‌ ವಿಚಾರಣೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ಪವಿತ್ರಾ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಹಾಗೂ ದರ್ಶನ್‌ ಸೇರಿ ಆರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಬೇಕು” ಎಂದು ಮನವಿ ಮಾಡಿದರು. ಇದಕ್ಕೆ ನ್ಯಾಯಾಧೀಶರು ಸಮ್ಮತಿ ಸೂಚಿಸಿದರು. ದರ್ಶನ್, ವಿನಯ್, ಪ್ರದೋಷ್, ಧನರಾಜ್‌ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡಿದರು.

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿ ದರ್ಶನ್‌ ಆಪ್ತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್​ ಕಳಿಸಿದ್ದ ಎಂಬ ಕ್ಷುಲ್ಲಕ ಕಾರಣಕ್ಕೆ ಆತನಿಗೆ ಬುದ್ಧಿ ಕಲಿಸಲು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಲಾಯಿತು. ಈ ಕೇಸ್​ನಲ್ಲಿ 19 ಜನರನ್ನು ಪೊಲೀಸರು ಬಂಧಿಸಿದ್ದಾರೆ.

Tags:    

Similar News