ಯದುವೀರ್ ಒಡೆಯರ್ ಸೇರಿ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜ್ಯೋತಿಷಿಗಳ ಸೂಚನೆಯಂತೆ ನಾಮಪತ್ರ ಸಲ್ಲಿಸಿದರು.;
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ ಬೆಂಗಳೂರು ಕೇಂದ್ರದಲ್ಲಿ ಪಿ.ಸಿ. ಮೋಹನ್, ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಸೇರಿ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜ್ಯೋತಿಷಿಗಳ ಸೂಚನೆಯಂತೆ ನಾಮಪತ್ರ ಸಲ್ಲಿಸಿದರು. ತಾಯಿ ಪ್ರಮೋದಾದೇವಿ ಒಡೆಯರ್, ಶಾಸಕ ಶ್ರೀವತ್ಸ ಜತೆ ಸೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಏಪ್ರಿಲ್ 3ರಂದು ಬೃಹತ್ ರ‍್ಯಾಲಿ ಮೂಲಕ ಅವರು ನಾಮಪತ್ರ ಸಲ್ಲಿಸಿದ್ದಾರೆ. ಸೋಮವಾರ( ಎ.1) ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಅವರು ನಾಮಪತ್ರ ಸಲ್ಲಿಸಿದರು. ಪಿ.ಸಿ ಮೋಹನ್ ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಶಾಸಕ ಸುರೇಶ್ ಕುಮಾರ್ ಅವರು ಸಾಥ್ ನೀಡಿದರು.
ತುಮಕೂರಿನಲ್ಲಿ ವಿ.ಸೋಮಣ್ಣ ಅವರು ಕೂಡ ಉಮೇದುವಾರಿಕೆ ಸಲ್ಲಿಸಿದರು. ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಸುರೇಶ್ ಬಾಬು, ಮಾಜಿ ಶಾಸಕ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಅವರೊಂದಿಗೆ ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು ನಾಮಪತ್ರ ಸಲ್ಲಿಸಿದರು.
ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಎಂ.ಟಿ.ಬಿ. ನಾಗರಾಜ್ ಅವರ ಕಾಲಿಗೆ ಬಿದ್ದು ಸುಧಾಕರ್ ಆಶೀರ್ವಾದ ಪಡೆದರು. ಇದೇ ವೇಳೆ, ನಾಗರಾಜ್ ಅವರು ನಾಮಪತ್ರ ಶುಲ್ಕವಾದ 25 ಸಾವಿರ ರೂ. ನೀಡಿ ಆಶೀರ್ವಾದ ಮಾಡಿದರು. ಇವರಿಗೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕ ವರ್ತೂರು ಪ್ರಕಾಶ್, ನಿಸರ್ಗ ನಾರಾಯಣಸ್ವಾಮಿ ಸಾಥ್ ನೀಡಿದರು.
ಕೋಲಾರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಅವರು ನಾಮಿನೇಷನ್ ಫೈಲ್ ಮಾಡಿದರು. ತಾಯಿ ಹಾಗೂ ಪತ್ನಿ ಜತೆ ಕೋಲಾರ ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ತೆರಳಿದ ಅವರು ನಾಮಪತ್ರ ಸಲ್ಲಿಸಿದರು.
ರಾಜ್ಯದಲ್ಲಿ ಏಪ್ರಿಲ್ 26 ರಿಂದ 2 ನೇ ಹಂತದ ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ಪ್ರಗತಿಯಲ್ಲಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 4 ಆಗಿರುತ್ತದೆ. ಉಮೇದುವಾರಿಕೆ ಹಿಂಪಡೆಯಲು ಏಪ್ರಿಲ್ 8 ಕೊನೆಯ ದಿನವಾಗಿದೆ. ಏಪ್ರಿಲ್ 26 ರಂದು ಮತದಾನ ನಡೆಯಲಿದೆ.