ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ; ಕಾಗೇರಿಗಿಲ್ಲ ಹೆಗಡೆ, ಹೆಬ್ಬಾರ್‌ ಪ್ರಚಾರ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರಲ್ಲಿ ಭಿನ್ನಮತ ಭುಗಿಲೆದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸ್ವಪಕ್ಷದವರಿಂದಲೇ ವಿರೋಧ ಎದುರಿಸುತ್ತಿದ್ದಾರೆ.

Update: 2024-04-12 12:52 GMT
ವಿಶ್ವೇಶ್ವರ ಹೆಗಡೆ ಕಾಗೇರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸ್ವಪಕ್ಷದವರಿಂದಲೇ ಸವಾಲು ಎದುರಾಗಿದೆ. ಅಲ್ಲದೇ ಈ ಕ್ಷೇತ್ರದಲ್ಲಿ ಇದೀಗ ಬಿಜೆಪಿಯಲ್ಲಿ ಗೊಂದಲದ ವಾತಾವರಣ ಮತ್ತು ಅಸಮಾಧಾನ ಸೃಷ್ಟಿಯಾಗಿದೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಘಟಾನುಘಟಿ ನಾಯಕರೇ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಹಕಾರ ನೀಡುತ್ತಿಲ್ಲ. ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಹಾಗೂ ಬಿಜೆಪಿ ಹಾಲಿ ಸಂಸದ ಅನಂತಕುಮಾರ ಹೆಗಡೆ ಅವರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಿಲ್ಲ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಅದರಲ್ಲಿ 5 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಅದರಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರು ಸಹ ಒಬ್ಬರು. ಅವರು ಸಹ ಇದೀಗ ಪರೋಕ್ಷವಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಿದ್ದಾರೆ. ಬಿಜೆಪಿಯ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಿಲ್ಲ. ಕಾಂಗ್ರೆಸ್ ನಾಯಕರೊಂದಿಗೆ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ. ಹೀಗಾಗಿ, ಕಾಗೇರಿ ಅವರಿಗೆ ಕುಮಟಾ ಶಾಸಕ ದಿನಕರ್ ಶೆಟ್ಟಿ ಮತ್ತು ಖಾನಪುರದ ವಿಠಲ್ ಹಲಗೇಕರ್ ಅವರ ಬೆಂಬಲ ಮಾತ್ರ ನಿರೀಕ್ಷಿಸುವ ಪರಿಸ್ಥಿತಿ ಎದುರಾಗಿದೆ.

ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿವರಾಮ ಹೆಬ್ಬಾರ್ ಹಾಗೂ ಅನಂತಕುಮಾರ ಹೆಗಡೆ ಅವರ ನಡುವೆ ಮೊದಲಿನಿಂದ ಅಸಮಾಧಾನ ಇದೆ. ಆದರೆ, ಈ ಬಾರಿ ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಅವರಿಗೆ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಏಳು ಅವಧಿಯಲ್ಲೂ ಬಿಜೆಪಿ ಅಭ್ಯರ್ಥಿಯಾಗಿ ಅನಂತಕುಮಾರ ಹೆಗಡೆ ಅವರು ಸ್ಪರ್ಧಿಸಿದ್ದರು. ಈ ಕ್ಷೇತ್ರದಲ್ಲಿ ಹಿಡಿತ ಸಾಧಿಸಿದ್ದರು. ಅಲ್ಲದೇ ಉಗ್ರ ಹಿಂದೂವಾದಿ ಎಂದು ಹೆಸರಾಗಿದ್ದರು. ಆದರೆ, ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಚುನಾವಣಾ ಪ್ರಚಾರಗಳಲ್ಲಿ ಭಾಗವಹಿಸುತ್ತಿಲ್ಲ. ಇನ್ನು ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್ ಸೇರುವುದಿಲ್ಲ ಎಂದು ಹೇಳಿದ್ದರೂ, ಅವರ ಪುತ್ರ ವಿವೇಕ ಹೆಬ್ಬಾರ್ ಕಾಂಗ್ರೆಸ್ ಸೇರಿದ್ದಾರೆ. ಅವರೊಂದಿಗೆ ಅವರ ಬೆಂಬಲಿಗರು, ಗ್ರಾಮಪಂಚಾಯಿತಿ ಸದಸ್ಯರು ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಶಿವರಾಮ ಹೆಬ್ಬಾರ್ ಅವರ ನಡೆಗೆ ವಿರೋಧ

ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರ ನಡೆಗೆ ಬಿಜೆಪಿಯಲ್ಲಿ ವಿರೋಧ ವ್ಯಕ್ತವಾಗಿದೆ. ಶಾಸಕ ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್ ಸೇರಲಿದ್ದಾರೆಯೇ ಎನ್ನುವ ಪ್ರಶ್ನೆ ಎದುರಾಗಿತ್ತು. ಆದರೆ, ಶಿವರಾಮ ಹೆಬ್ಬಾರ್ ಅವರೇ ʻನಾನು ಕಾಂಗ್ರೆಸ್ ಸೇರುವುದಿಲ್ಲʼ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ, ಅವರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸದೆ ತಟಸ್ಥವಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿಯನ್ನು ತೊರೆಯದೆ ತಟಸ್ಥ ನಿಲುವು ತೆಳೆದಿರುವುದು ಸಹ ಆಕ್ರೋಶಕ್ಕೆ ಕಾರಣವಾಗಿದೆ. 

ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಶಿವರಾಮ ಹೆಬ್ಬಾರ್ ಅವರ ಪುತ್ರ ಹಾಗೂ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವುದು ಒಂದು ಕಡೆಯಾದರೆ, ಮುಂಡಗೋಡದಲ್ಲೂ ಬಿಜೆಪಿ ಕಾರ್ಯಕರ್ತರು ಹಾಗೂ ಶಿವರಾಮ ಹೆಬ್ಬಾರ್ ಅವರ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳಿಂದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಹಿನ್ನಡೆ ಉಂಟಾಗುವ ಆತಂಕ ಎದುರಾಗಿದೆ ಎನ್ನಲಾಗಿದೆ. 

Tags:    

Similar News