ವಾಲ್ಮೀಕಿ ನಿಗಮ ಹಗರಣ | ಬಿ. ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್
ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಗುರುವಾರ ರಾಜೀನಾಮೆ ಸಲ್ಲಿಸಿದ್ದು, ಅವರ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ.;
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ನೀಡಿರುವ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಶಿಫಾರಸಿನ ಮೇರೆಗೆ ಬಿ.ನಾಗೇಂದ್ರ ಅವರು ಗುರುವಾರ ಸಂಜೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅವರು ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಲು ಸಿಎಂ ಸಿದ್ದರಾಮಯ್ಯ ಅವರು ಶಿಫಾರಸು ಮಾಡಿದ್ದರು. ಹೀಗಾಗಿ ಭಾರತದ ಸಂವಿಧಾನದ 164 (1) ನೇ ವಿಧಿಯಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ನಾಗೇಂದ್ರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರು ಮೇ 26ರಂದು ಆತ್ಮಹತ್ಯೆಗೆ ಶರಣಾಗಿದ್ದು, ಅವರ ಡೆತ್ ನೋಟ್‌ನಲ್ಲಿ ನಿಗಮದ ಬ್ಯಾಂಕ್ ಖಾತೆಯಿಂದ 88.62 ಕೋಟಿ ರೂ.ಗಳನ್ನು ಅನಧಿಕೃತವಾಗಿ ವರ್ಗಾವಣೆ ಮಾಡಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ವಿನೋಬಾ ನಗರದ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರನ್ ಅವರ ಪತ್ನಿ ದಾಖಲಿಸಿದ್ದರು.
ಈ ಹಣ ವರ್ಗಾವಣೆ ಆರೋಪದ ಮೇಲೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಸಿಇಒ ಸೇರಿದಂತೆ ಬ್ಯಾಂಕಿನ ಆರು ಮಂದಿ ವಿರುದ್ಧ ಬೆಂಗಳೂರಿನ ಹೈಗ್ರೆಂಡ್ಸ್ ಪೊಲೀಸ್ ಠಾಣೆಯಲ್ಲಿ ಮೇ 29ರಂದು ಪ್ರಕರಣ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವಹಿಸಿತ್ತು. ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಜೆ.ಜಿ. ಪದ್ಮನಾಭ್ ಮತ್ತು ಲೆಕ್ಕಾಧಿಕಾರಿಯಾಗಿದ್ದ ಪರಶುರಾಮ್ ಜಿ. ದುರ್ಗಣ್ಣನವರ ಅವರನ್ನು ಎಸ್‌ಐಟಿ ಬಂಧಿಸಿದೆ.
ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ(ಎಫ್‌ಎಫ್‌ಸಿಸಿಎಸ್‌ಎಲ್) 18 ಖಾತೆಗಳಿಗೆ ₹94.73 ಕೋಟಿ ಜಮೆ ಆಗಿರುವ ಸಂಗತಿಯನ್ನು ಎಸ್‌ಐಟಿ ಪತ್ತೆ ಹಚ್ಚಿದೆ. ಎಫ್‌ಎಫ್‌ಸಿಸಿಎಎಲ್ ಅಧ್ಯಕ್ಷ ಸತ್ಯನಾರಾಯಣ್ ಅವರನ್ನು ಎಸ್‌ಐಟಿ ಬಂಧಿಸಿದೆ. ಲಭ್ಯ ಸಾಕ್ಷಾಧಾರಗಳನ್ನು ಆಧರಿಸಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ಸಚಿವ ನಾಗೇಂದ್ರ ಅವರ ಆಪ್ತರು ಎನ್ನಲಾದ ನೆಕ್ಕಂಟಿ ನಾಗರಾಜ್ ಹಾಗೂ ಅವರ ಬಾಮೈದ ನಾಗೇಶ್ವರರಾವ್ ಅವರನ್ನು ಬಂಧಿಸಲಾಗಿದೆ. 'ನೆಕ್ಕಂಟಿ ನಾಗರಾಜ್, ಈ ಮೊದಲು ಮಾಜಿ ಸಚಿವ, ಬಿಜೆಪಿಯ ಬಿ. ಶ್ರೀರಾಮುಲು ಜೊತೆ ಗುರುತಿಸಿಕೊಂಡಿದ್ದ' ಎನ್ನಲಾಗಿದೆ.