ಶೆಟ್ಟರ್ ರಾಜೀನಾಮೆಯಿಂದ ತೆರವಾದ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ಕರ್ನಾಟಕದ ಒಂದು ಸ್ಥಾನ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್ ಸ್ಥಾನಗಳಿಗೆ ಜುಲೈ 12ರಂದು ಉಪ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ಕರ್ನಾಟಕದ ಒಂದು ಸ್ಥಾನ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್ ಸ್ಥಾನಗಳಿಗೆ ಜುಲೈ 12ರಂದು ಉಪ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆಯುವ ಉಪ ಚುನಾವಣೆಗೆ ವೇಳಾಪಟ್ಟಿ ಘೋಷಣೆ ಮಾಡಲಾಗಿದೆ. ಕರ್ನಾಟಕ, ಬಿಹಾರ, ಉತ್ತರ ಪ್ರದೇಶ ಮತ್ತು ಆಂಧ್ರ ಪ್ರದೇಶದ ತಲಾ ಒಂದೊಂದು ಸ್ಥಾನಗಳಿಗೆ ಜುಲೈ 12ರಂದು ಮತದಾನ ನಡೆಯಲಿದೆ.
ಕಳೆದ ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಬಳಿಕ ಪಕ್ಷ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಿತ್ತು. ಅವರ ಅವಧಿ 14 ಜೂನ್ 2028ರ ತನಕ ಇತ್ತು. ಆದರೆ, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಲೆಕ್ಕಾಚಾರದಲ್ಲಿ ಅವರು 25 ಜನವರಿ 2024ರಂದು ಕಾಂಗ್ರೆಸ್ ಪಕ್ಷವನ್ನು ತೊರೆದು ವಾಪಸ್ ಬಿಜೆಪಿಗೆ ಮರಳಿದ್ದರು. ಆ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇವರಿಂದ ತೆರವಾದ ಒಂದು ಸ್ಥಾನ ಭರ್ತಿ ಮಾಡಲು ಚುನಾವಣಾ ಆಯೋಗ ಉಪ ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡಿದೆ.
ಉಪ ಚುನಾವಣೆಗೆ 25 ಜೂನ್, ಮಂಗಳವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. 2 ಜುಲೈ ನಾಮಪತ್ರಗಳನ್ನು ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜುಲೈ 3ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಜುಲೈ 5 ಕೊನೆಯ ದಿನ. ಜುಲೈ 12, ಶುಕ್ರವಾರ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಸಂಜೆ 5 ಗಂಟೆಯ ಬಳಿಕ ಮತ ಎಣಿಕೆ ಆರಂಭವಾಗಲಿದೆ. 16 ಜುಲೈ ಒಳಗೆ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಳ್ಳಬೇಕಿದೆ. ಕರ್ನಾಟಕ ವಿಧಾನಸಭೆಯ ಶಾಸಕರು ಈ ಚುನಾವಣೆಯಲ್ಲಿ ಮತದಾನ ಮಾಡಲಿದ್ದು, ವಿಧಾನಸೌಧದಲ್ಲಿ ಮತದಾನ ನಡೆಯಲಿದೆ.