ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಬಸ್ ಪಲ್ಟಿ; 9 ಪ್ರಯಾಣಿಕರ ಸಾವು, 25 ಮಂದಿಗೆ ಗಾಯ
ಗಾಯಗೊಂಡ ಪ್ರಯಾಣಿಕರನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಮತ್ತು ಜಿಲ್ಲಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.;
ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಎಂಎಸ್ಆರ್‌ಟಿಸಿ) ಸೇರಿದ ಬಸ್ ಪಲ್ಟಿಯಾದ ಪರಿಣಾಮ ಕನಿಷ್ಠ ಒಂಬತ್ತು ಪ್ರಯಾಣಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದಾರೆ. ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೂರ್ವ ಮಹಾರಾಷ್ಟ್ರದ ಭಂಡಾರದಿಂದ ಗೊಂಡಿಯಾ ಜಿಲ್ಲೆಗೆ ತೆರಳುತ್ತಿದ್ದ ಎಂಎಸ್ಆರ್‌ಟಿಸಿ ಬಸ್ 'ಶಿವ್ ಶಾಹಿ' ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಧ್ಯಾಹ್ನ 12.30ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಒಂಬತ್ತು ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು 25 ಜನರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.
ಗಾಯಗೊಂಡ ಪ್ರಯಾಣಿಕರನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಮತ್ತು ಜಿಲ್ಲಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಅಪಘಾತದಲ್ಲಿ ಪ್ರಾಣಹಾನಿ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ.
ಶಿಂಧೆ ಅವರು ಗೊಂಡಿಯಾ ಕಲೆಕ್ಟರ್ ಅವರೊಂದಿಗೆ ಮಾತನಾಡಿ, ಗಾಯಗೊಂಡ ಎಲ್ಲಾ ಪ್ರಯಾಣಿಕರಿಗೆ ಸರಿಯಾದ ಚಿಕಿತ್ಸೆ ಮತ್ತು ವೈದ್ಯಕೀಯ ಆರೈಕೆ ಒದಗಿಸುವಂತೆ ಸೂಚನೆ ನೀಡಿದರು.
ಅಗತ್ಯವಿದ್ದರೆ ಅವರನ್ನು ವಿಶೇಷ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಬೇಕು ಮತ್ತು ಅದರ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ನಿರ್ಗಮನ ಸರ್ಕಾರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಬಸ್ ಅಪಘಾತವನ್ನು ದುರದೃಷ್ಟಕರ ಎಂದು ಬಣ್ಣಿಸಿದ್ದಾರೆ. ದುಃಖಿತ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿದರು.
ಅಗತ್ಯವಿದ್ದರೆ ಗಾಯಗೊಂಡ ಪ್ರಯಾಣಿಕರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಬೇಕು ಎಂದು ಫಡ್ನವೀಸ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
"ಗಾಯಗೊಂಡವರನ್ನು ನಾಗ್ಪುರಕ್ಕೆ ಸ್ಥಳಾಂತರಿಸಲು ವ್ಯವಸ್ಥೆ ಮಾಡುವಂತೆ ನಾನು ಗೊಂಡಿಯಾ ಕಲೆಕ್ಟರ್‌ಗೆ ತಿಳಿಸಿದ್ದೇನೆ" ಎಂದು ಅವರು ಹೇಳಿದ್ದಾರೆ .