ಉಗ್ರರ ದಾಳಿ, ಅನಗತ್ಯ ಹೇಳಿಕೆ ನೀಡದಂತೆ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪದಾಧಿಕಾರಿಗಳು ವ್ಯಕ್ತಪಡಿಸಿರುವ ಅಭಿಪ್ರಾಯಗಳು ಮಾತ್ರ ಪಕ್ಷದ ನಿಲುವಾಗಿದೆ ಎಂದು ತಿಳಿಸಿದ್ದಾರೆ.;
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರ ದಾಳಿಯ ಬಗ್ಗೆ ಕಾಂಗ್ರೆಸ್ ನಾಯಕರು ಅನಗತ್ಯ ಹೇಳಿಕೆ ನೀಡಿದ್ದರಿಂದ ಪಕ್ಷ ಇಕ್ಕಟ್ಟಿಗೆ ಸಿಲುಕಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ನಾಯಕರು ಉಗ್ರರ ದಾಳಿಯ ಕುರಿತು ಯಾವುದೇ ಹೇಳಿಕೆ ನೀಡಬಾರದು ಎಂದು ಸೂಚನೆ ನೀಡಿದೆ.
ಇತ್ತೀಚೆಗೆ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪದಾಧಿಕಾರಿಗಳು ವ್ಯಕ್ತಪಡಿಸಿರುವ ಅಭಿಪ್ರಾಯಗಳು ಮಾತ್ರ ಪಕ್ಷದ ನಿಲುವಾಗಿದೆ ಎಂದು ತಿಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಆರ್.ಬಿ. ತಿಮ್ಮಾಪುರ, ಹಿರಿಯ ಸಂಸದ ಶಶಿ ತರೂರ್, ಮಹಾರಾಷ್ಟ್ರ ಕಾಂಗ್ರೆಸ್ ಹಿರಿಯ ನಾಯಕ ವಿಜಯ್ ವಡಟ್ಟಿವಾರ್, ಜಮ್ಮ ಮತ್ತು ಕಾಶ್ಮೀರದ ಕಾಂಗ್ರೆಸ್ ಅಧ್ಯಕ್ಷ ತಾರಿಕ್ ಹಮಿದ್, ಕಾಶ್ಮೀರದ ಹಿರಿಯ ನಾಯಕ ಸೈಫುದ್ದೀನ್ ಸೋಜ್ ಮತ್ತು ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಅವರು ಪಾಕ್ ಜೊತೆಗಿನ ಯುದ್ಧದ ಕುರಿತಾದ ಹೇಳಿಕೆ ಪಕ್ಷವನ್ನು ಸಂಕಷ್ಟಕ್ಕೆ ಸಿಲುಕಿಸಿತ್ತು.
ಕೆಲವು ನಾಯಕರ ಹೇಳಿಕೆಯಿಂದ ಪಕ್ಷವು ಟೀಕೆಗೆ ಗುರಿಯಾದ ಬೆನ್ನಲ್ಲೇ , ʼಕೆಲವು ನಾಯಕರು ಮಾಧ್ಯಮಗಳಿಗೆ ನೀಡಿದ ಹೇಳಿಕೆಯು ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು, ಕಾಂಗ್ರಸ್‌ನ ಅಭಿಪ್ರಾಯವಲ್ಲʼ. ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಎಕ್ಸ್ ಖಾತೆಯಲ್ಲಿ ಸಂದೇಶ ಪೋಸ್ಟ್ ಮಾಡಿದ್ದಾರೆ.
ಪಕ್ಷದ ಕಾರ್ಯಕಾರಿ ಸಮಿತಿಯು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಏಪ್ರಿಲ್ 24 ರಂದು ನಿರ್ಣಯ ತೆಗೆದುಕೊಂಡಿದೆ. ಖರ್ಗೆ ಮತ್ತು ರಾಹುಲ್ ಅವರು ಏಪ್ರಿಲ್ 25 ರಂದು ನಡೆದ ಸರ್ವಪಕ್ಷ ಸಭೆಯಲ್ಲಿ ಪಕ್ಷದ ಅಭಿಪ್ರಾಯಗಳನ್ನು ತಿಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರದಾಳಿಯಲ್ಲಿ ಕರ್ನಾಟಕದ ಮೂವರು ಸೇರಿದಂತೆ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದರು.