ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳು, ಉಗ್ರರ ನಡುವೆ ಗುಂಡಿನ ಚಕಮಕಿ

ಈ ಪ್ರದೇಶದಲ್ಲಿ ಇನ್ನೂ ಉಗ್ರರು ಅಡಗಿರುವ ಶಂಕೆ ಇದ್ದು, ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರಿದಿದೆ.;

Update: 2025-09-08 04:40 GMT

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ, ಸೆಪ್ಟೆಂಬರ್ 8ರಂದು ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಗದ್ದಾರ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ವರದಿಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ನ ವಿಶೇಷ ಕಾರ್ಯಾಚರಣೆ ತಂಡ (SOG), ಸೇನೆ ಮತ್ತು ಸಿಆರ್‌ಪಿಎಫ್‌ನ ಜಂಟಿ ತಂಡವು ಗುಡ್ಡಾರ್ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿತು. ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದಾಗ, ಅಡಗಿದ್ದ ಉಗ್ರರು ಏಕಾಏಕಿ ಗುಂಡು ಹಾರಿಸಲು ಆರಂಭಿಸಿದರು, ಇದು ತೀವ್ರವಾದ ಗುಂಡಿನ ಚಕಮಕಿಗೆ ಕಾರಣವಾಯಿತು.

ಕಾಶ್ಮೀರ ವಲಯ ಪೊಲೀಸರು ತಮ್ಮ 'X' ಖಾತೆಯಲ್ಲಿ ಈ ಘಟನೆಯನ್ನು ಖಚಿತಪಡಿಸಿದ್ದು, "ಖಚಿತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕುಲ್ಗಾಮ್‌ನ ಗದ್ದಾರ್​​ ಅರಣ್ಯದಲ್ಲಿ ಎನ್‌ಕೌಂಟರ್ ಆರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರ SOG, ಸೇನೆ ಮತ್ತು CRPF ಕಾರ್ಯಾಚರಣೆಯಲ್ಲಿ ತೊಡಗಿವೆ" ಎಂದು ಪೋಸ್ಟ್ ಮಾಡಿದ್ದಾರೆ. ಕೆಲವು ವರದಿಗಳ ಪ್ರಕಾರ, ಈ ಘರ್ಷಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದ್ದು, ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಈ ಪ್ರದೇಶದಲ್ಲಿ ಇನ್ನೂ ಉಗ್ರರು ಅಡಗಿರುವ ಶಂಕೆ ಇದ್ದು, ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರಿಸಿವೆ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Tags:    

Similar News