ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದನೆ: ಮಣಿಕಂಠ ರಾಥೋಡ್ ವಿರುದ್ಧದ ಪ್ರಕರಣ ವಜಾ

ತಮ್ಮ ವಿರುದ್ಧದ ಎಫ್‌ಐಆರ್ ಮತ್ತು ನ್ಯಾಯಾಂಗ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ಮಣಿಕಂಠ ರಾಥೋಡ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ಏಕಸದಸ್ಯ ಪೀಠವು ಪುರಸ್ಕರಿಸಿದೆ.;

Update: 2025-09-13 11:21 GMT

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ

Click the Play button to listen to article

"ರಾಜಕೀಯ ವಿರೋಧಿಗಳು ಒಬ್ಬರನ್ನೊಬ್ಬರು 'ಕಳ್ಳ' ಎಂದು ಕರೆಯುವುದು ಕ್ರಿಮಿನಲ್ ಪ್ರಕರಣ ದಾಖಲಿಸಲು ಆಧಾರವಾಗುವುದಿಲ್ಲ. ಇದು ಸಂವಿಧಾನದ 19(1)ನೇ ವಿಧಿಯಡಿ ನೀಡಲಾಗಿರುವ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತದೆ" ಎಂದು ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್‌ನ ಕಲಬುರ್ಗಿ ಪೀಠ, ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು 'ಅಕ್ಕಿ ಕಳ್ಳ' ಎಂದು ನಿಂದಿಸಿದ ಆರೋಪದ ಮೇಲೆ ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ವಜಾಗೊಳಿಸಿದೆ.

2025ರ ಮೇ 26ರಂದು ಮಣಿಕಂಠ ರಾಥೋಡ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವೀಡಿಯೊವೊಂದನ್ನು ಅಪ್‌ಲೋಡ್ ಮಾಡಿದ್ದರು. ಅದರಲ್ಲಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು 'ಲೇ ಅಕ್ಕಿ ಕಳ್ಳ' ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದರು. ಅಲ್ಲದೆ, ಕೋಲಿ ಕಬ್ಬಲಿಗ ಸಮಾಜದ ಮುಖಂಡ ಲಚ್ಚಪ್ಪ ಜಾಮಾದಾರ ಅವರನ್ನು 'ಟೋಪಿ ಲಚ್ಚ್ಯಾ' ಎಂದು ಮತ್ತು ಪ್ರಕರಣವೊಂದರಲ್ಲಿ ತಮಗೆ ಶಿಕ್ಷೆ ವಿಧಿಸಿದ್ದ ನ್ಯಾಯಾಧೀಶರನ್ನೂ ನಿಂದಿಸಿದ್ದರು ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತ ಹಣುಮಂತ ಎಂಬುವವರು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ದೂರನ್ನು ಆಧರಿಸಿ, ಪೊಲೀಸರು ಮಣಿಕಂಠ ರಾಥೋಡ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 352 (ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ) ಮತ್ತು 353(2) (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಹೈಕೋರ್ಟ್ ಆದೇಶ

ತಮ್ಮ ವಿರುದ್ಧದ ಎಫ್‌ಐಆರ್ ಮತ್ತು ನ್ಯಾಯಾಂಗ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ಮಣಿಕಂಠ ರಾಥೋಡ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ಏಕಸದಸ್ಯ ಪೀಠವು ಪುರಸ್ಕರಿಸಿದೆ.

ಹೈಕೋರ್ಟ್ ತನ್ನ ಆದೇಶದಲ್ಲಿ, "ಪ್ರಿಯಾಂಕ್ ಖರ್ಗೆ ಮತ್ತು ಮಣಿಕಂಠ ರಾಥೋಡ್ ರಾಜಕೀಯ ವಿರೋಧಿಗಳಾಗಿದ್ದು, ನಿಂದನೆಗೆ ಒಳಗಾಗಿದ್ದಾರೆ ಎನ್ನಲಾದ ಸ್ವತಃ ಪ್ರಿಯಾಂಕ್ ಖರ್ಗೆ ಅವರು ದೂರು ನೀಡಿಲ್ಲ. ರಾಜಕೀಯ ಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ನ್ಯಾಯಾಂಗ ಪ್ರಕ್ರಿಯೆಯನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳಲಾಗಿದ್ದು, ಇದು ಕಾನೂನಿನ ದುರ್ಬಳಕೆಯಾಗಿದೆ" ಎಂದು ಅಭಿಪ್ರಾಯಪಟ್ಟು, ಪ್ರಕರಣವನ್ನು ವಜಾಗೊಳಿಸಿದೆ.

Tags:    

Similar News