Guarantee Schemes: ಅವಾಸ್ತವಿಕ ಭರವಸೆ ಈಡೇರಿಸುವುದು ಅಸಾಧ್ಯ; ಪ್ರಧಾನಿ ಮೋದಿ ವಾಗ್ದಾಳಿ
Guarantee Schemes: ವಾಸ್ತವಕ್ಕೆ ದೂರವಾದ ಭರವಸೆ ನೀಡುವುದು ಸುಲಭ. ಆದರೆ ಅವುಗಳನ್ನು ಜಾರಿಗೊಳಿಸುವುದು ಕಷ್ಟ ಎಂಬ ಸತ್ಯ ಕಾಂಗ್ರೆಸ್ ನಾಯಕರಿಗೆ ಅರ್ಥವಾಗುತ್ತಿದೆ. ಸುಳ್ಳು ಭರವಸೆಗಳನ್ನು ಈಡೇರಿಸಲು ಎಂದಿಗೂ ಸಾಧ್ಯವಾಗುವುದಿಲ್ಲ ಎಂಬುದು ಅವರಿಗೆ ಗೊತ್ತಾಗಿದೆ.
ಗ್ಯಾರಂಟಿ ಯೋಜನೆಗಳ ಹೆಸರಲ್ಲಿ (Guarantee Schemes) ಅವಾಸ್ತವಿಕ ಭರವಸೆಗಳನ್ನು ನೀಡುವುದು ಸುಲಭ. ಆದರೆ, ಅವುಗಳನ್ನು ಜಾರಿಗೊಳಿಸುವುದು ಕಠಿಣ ಅಥವಾ ಅಸಾಧ್ಯ ಎಂಬುದು ಕಾಂಗ್ರೆಸ್ಸಿಗೆ ಅರಿವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ. ಶಕ್ತಿ ಯೋಜನೆ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದ ಸಲಹೆ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಕಿಡಿಕಾರಿದ್ದಾರೆ.
ವಾಸ್ತವಕ್ಕೆ ದೂರವಾದ ಭರವಸೆ ನೀಡುವುದು ಸುಲಭ. ಆದರೆ ಅವುಗಳನ್ನು ಜಾರಿಗೊಳಿಸುವುದು ಕಷ್ಟ ಎಂಬ ಸತ್ಯ ಕಾಂಗ್ರೆಸ್ ನಾಯಕರಿಗೆ ಅರ್ಥವಾಗುತ್ತಿದೆ. ಸುಳ್ಳು ಭರವಸೆಗಳನ್ನು ಈಡೇರಿಸಲು ಎಂದಿಗೂ ಸಾಧ್ಯವಾಗುವುದಿಲ್ಲ ಎಂಬುದು ಅವರಿಗೆ ಗೊತ್ತಾಗಿದೆ. ಹಾಗಾಗಿಯೇ ಜನರ ಮುಂದೆ ಬೆತ್ತಲಾಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ಭರವಸೆಗಳನ್ನು ಈಡೇರಿಸಿಲ್ಲ. ಇದು ಜನರಿಗೆ ಮಾಡಿದ ಮಹಾ ಮೋಸ ಎಂದಿರುವ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಂತರಿಕ ಕಲಹದಲ್ಲಿ ಮುಳುಗಿದೆ. ಅಭಿವೃದ್ಧಿಗೆ ಕಾಳಜಿ ತೋರಿಸುವ ಬದಲು ಲೂಟಿ ಮಾಡುತ್ತಿದೆ. ಜನರಿಗೆ ನೀಡಿರುವ ಗ್ಯಾರೆಂಟಿ ಯೋಜನೆಗಳನ್ನು ಹಿಂಪಡೆಯಲು ಹೊರಟಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಯಾವುದೂ ಸರಿಯಿಲ್ಲ. ಹಿಮಾಚಲ ಪ್ರದೇಶದಲ್ಲಿ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ಸಿಗುತ್ತಿಲ್ಲ. ತೆಲಂಗಾಣದಲ್ಲಿ ರೈತರು ಸಾಲ ಮನ್ನಾ ಮಾಡಿಲ್ಲ. ಈ ಹಿಂದೆ, ಛತ್ತೀಸ್ಗಢ ಮತ್ತು ರಾಜಸ್ಥಾನದಲ್ಲಿ ನೀಡಿದ್ದ ಭರವಸೆಗಳು ಐದು ವರ್ಷವಾದರೂ ಈಡೇರಿಲ್ಲ. ಕಾಂಗ್ರೆಸ್ ಹೇಗೆ ಕೆಲಸ ಮಾಡುತ್ತದೆ ಎಂಬುದಕ್ಕೆ ಇಂತಹ ಹಲವಾರು ಉದಾಹರಣೆಗಳಿವೆ ಎಂದಿದ್ದಾರೆ.
ಕಾಂಗ್ರೆಸ್ ಪ್ರಾಯೋಜಿತವಾಗಿರುವ ನಕಲಿ ಭರವಸೆಗಳ ಸಂಸ್ಕೃತಿಯ ಕುರಿತು ದೇಶದ ಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ. ಹರಿಯಾಣದ ಜನರು ಹೇಗೆ ಅವರ ಸುಳ್ಳುಗಳನ್ನು ತಿರಸ್ಕರಿಸಿ ಅಭಿವೃದ್ಧಿ ಆಧಾರಿತ, ಸ್ಥಿರ ಸರ್ಕಾರಕ್ಕೆ ಪ್ರಾತಿನಿಧ್ಯ ನೀಡಿದರು ಎಂಬುದನ್ನು ನಾವು ನೋಡಿದ್ದೇವೆ. ಕಾಂಗ್ರೆಸ್ಗೆ ನೀಡುವ ಮತವು ಅದಕ್ಷ ಆಡಳಿತ, ಕಳಪೆ ಆರ್ಥಿಕತೆ ಹಾಗೂ ಲೂಟಿಗೆ ನೀಡುವ ಮತ ಎಂಬ ಪ್ರಜ್ಞೆ ಮತದಾರರಲ್ಲಿ ಮೂಡುತ್ತಿದೆ ಎಂದು ಹೇಳಿದ್ದಾರೆ.
ಶಕ್ತಿ ಯೋಜನೆ ಪರಿಷ್ಕರಿಸುವ ಕುರಿತು ಇತ್ತೀಚೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿದ್ದ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಧ್ಯಮದವರ ಎದುರೇ ಪತ್ರಿಕಾಗೋಷ್ಠಿಯಲ್ಲಿ ಅಸಹನೆ ವ್ಯಕ್ತಪಡಿಸಿದ್ದರು.