Pahalgam Terror Attack| ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಜಮ್ಮು ಸರ್ಕಾರ
Pahalgam Terror Attack|ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರವನ್ನು ಜಮ್ಮು ಸರ್ಕಾರ ಘೋಷಿಸಿದೆ.;
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ
ಶ್ರೀನಗರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಘೋಷಿಸಿದೆ.
"ಪ್ರೀತಿಪಾತ್ರರ ನಷ್ಟಕ್ಕೆ ಯಾವುದೇ ಹಣವು ಎಂದಿಗೂ ಸರಿದೂಗಿಸಲು ಸಾಧ್ಯವಿಲ್ಲ, ಆದರೆ ಬೆಂಬಲ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರವನ್ನು ಘೋಷಿಸುತ್ತದೆ" ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಾಹಿತಿ ನೀಡಿದ್ದಾರೆ.
'ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತವಾಗಿದ್ದು ಹಾಗೂ ಅತೀವ ದುಃಖಿತನಾಗಿದ್ದೇನೆ. ಅಮಾಯಕ ನಾಗರಿಕರ ವಿರುದ್ಧದ ಇಂತಹ ಹೇಯ ಕೃತ್ಯಗಳಿಗೆ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗಾಗಿ ನನ್ನ ಸಂತಾಪಗಳು' ಎಂದು ಅವರು ತಿಳಿಸಿದರು.
'ಮೃತರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕಳುಹಿಸಲು ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸಲಾಗುತ್ತಿದೆ. ಕುಟುಂಬದ ದುಃಖದೊಂದಿಗೆ ನಾವು ಭಾಗಿಯಾಗುತ್ತೇವೆ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ' ಎಂದು ಅವರು ತಿಳಿಸಿದ್ದಾರೆ.
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ ಕರ್ನಾಟಕದ ಮೂವರು ಸೇರಿದಂತೆ ಒಟ್ಟು 28 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ವಿದೇಶಿಯರು ಹಾಗೂ ಇಬ್ಬರು ಸ್ಥಳೀಯರು ಸೇರಿದ್ದಾರೆ.
2019 ರಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ನಡೆದ ಅತಿದೊಡ್ಡ ಭಯೋತ್ಪಾದಕ ದಾಳಿಗಳಲ್ಲಿ ಇದು ಒಂದಾಗಿದೆ. ಆದರೂ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಸರ್ಕಾರ ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ. ಭಯೋತ್ಪಾದಕ ದಾಳಿಯ ನಂತರ ಭದ್ರತಾ ಪಡೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ದಾಳಿಯ ನಂತರ ಭದ್ರತೆ ಹೆಚ್ಚಿಸಲಾಗಿದೆ.