ರಾಜಸ್ಥಾನದಲ್ಲಿ ಶಾಲೆಯೊಂದರ ಮೇಲ್ಛಾವಣಿ ಕುಸಿತ: ನಾಲ್ವರು ವಿದ್ಯಾರ್ಥಿಗಳು ಬಲಿ, 17 ಮಂದಿಗೆ ಗಾಯ
ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಹಲವು ಗಣ್ಯರು ಘಟನೆಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.;
ರಾಜಸ್ಥಾನದ ಜಾಲಾವರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಸರ್ಕಾರಿ ಶಾಲೆಯೊಂದರ ಮೇಲ್ಛಾವಣಿ ಕುಸಿದು ನಾಲ್ವರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದು, ಕನಿಷ್ಠ 17 ಮಂದಿ ಗಾಯಗೊಂಡಿದ್ದಾರೆ. ಪಿಪ್ಲೋಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ತರಗತಿಯಲ್ಲಿದ್ದಾಗ ಈ ದುರಂತ ಸಂಭವಿಸಿದೆ.
ಘಟನೆ ನಡೆದ ತಕ್ಷಣವೇ ಸ್ಥಳೀಯರು, ಪೊಲೀಸರು ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿ, ಬೃಹತ್ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಅವಶೇಷಗಳಡಿ ಸಿಲುಕಿದ್ದ ಮಕ್ಕಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಗೊಂಡವರಲ್ಲಿ ಹತ್ತು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಾಲಾವರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಮೂರರಿಂದ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ತಿಳಿಸಿದ್ದಾರೆ.
ಈ ಘಟನೆಯ ಬಗ್ಗೆ ತೀವ್ರ ವಿಷಾಧ ವ್ಯಕ್ತಪಡಿಸಿರುವ ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ್, ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಗಾಯಾಳು ಮಕ್ಕಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಅವರು ಭರವಸೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಳೆಯ ಶಾಲಾ ಕಟ್ಟಡದ ಮೇಲ್ಛಾವಣಿ ದುರ್ಬಲಗೊಂಡಿರುವುದು ದುರಂತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಹಲವು ಗಣ್ಯರು ಘಟನೆಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.