Nagpur violence |ಔರಂಗಜೇಬ್ ಸಮಾಧಿ ಗೊಂದಲ; ನಾಗಪುರದಲ್ಲಿ ಹಿಂಸಾಚಾರ; ಕರ್ಫ್ಯೂ ಜಾರಿ

Nagpur violence : ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಮತ್ತು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಘರ್ಷಣೆಯಲ್ಲಿ ಪೊಲೀಸರು ಮತ್ತು ಇತರರು ಗಾಯಗೊಂಡಿದ್ದಾರೆ.;

Update: 2025-03-18 05:29 GMT
ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಹೋದ ಕಾರು.

ಮಹಾರಾಷ್ಟ್ರದ ನಾಗಪುರದಲ್ಲಿ ಸೋಮವಾರ ರಾತ್ರಿ ಹಿಂಸಾಚಾರ ಭುಗಿಲೆದ್ದಿದೆ. ಈ ಘಟನೆಗೆ ಮೊಘಲ್ ದೊರೆ ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸಬೇಕು ಎಂಬ ಕೂಗು ಹೆಚ್ಚಾಗುತ್ತಿರುವುದು ಮತ್ತು ಧರ್ಮಗ್ರಂಥವನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿ ಕಾರಣವೆಂದು ತಿಳಿದುಬಂದಿದೆ. ಈ ವದಂತಿಯಿಂದಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಕರ್ಫ್ಯೂ ಜಾರಿಗೊಳಿಸಲಾಗಿದೆ.

ಘಟನೆ ವೇಳೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಮತ್ತು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಸಮಯದಲ್ಲಿ ಪೊಲೀಸರು ಮತ್ತು ಇತರರು ಗಾಯಗೊಂಡಿದ್ದಾರೆ. ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಲಾಠಿ ಪ್ರಹಾರ ಮತ್ತು ಅಶ್ರುವಾಯು ಸಿಡಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ಡಿಸಿಪಿ ಅರ್ಚಿತ್ ಚಂಡಕ್ ತಿಳಿಸಿದ್ದಾರೆ.

ಈ ಹಿಂಸಾಚಾರದ ಘಟನೆಗೆ ಸಂಬಂಧಿಸಿದಂತೆ 17 ಮಂದಿಯನ್ನು ಬಂಧಿಸಲಾಗಿದೆ ಮತ್ತು 15 ಪೊಲೀಸರು ಸೇರಿದಂತೆ 20 ಮಂದಿ ಗಾಯಗೊಂಡಿದ್ದಾರೆ. ಘಟನೆಯ ನಂತರ ನಾಗ್ಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘರ್ಷಣೆಯಲ್ಲಿ ಎರಡು ಗುಂಪುಗಳು ಪರಸ್ಪರ ಕಲ್ಲುಗಳನ್ನು ಎಸೆದುಕೊಂಡಿದ್ದು, ಅಲ್ಲಿದ್ದ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ವಾಹನಗಳಿಗೆ ಬೆಂಕಿ ಹಚ್ಚಿದ್ದರಿಂದ ಪರಿಸ್ಥಿತಿ ಹೆಚ್ಚು ಗಂಭೀರವಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜನರಿಗೆ ಶಾಂತಿ ಕಾಪಾಡಲು ಮನವಿ ಮಾಡಿದ್ದಾರೆ. ಅವರು ಜನರು ಯಾವುದೇ ರೀತಿಯ ವದಂತಿಗಳನ್ನು ನಂಬಬಾರದು ಮತ್ತು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ಹೇಳಿದ್ದಾರೆ. ನಾಗ್ಪುರ ಶಾಂತಿಪ್ರಿಯ ನಗರವಾಗಿದೆ ಮತ್ತು ಇಲ್ಲಿ ಅಶಾಂತಿ ಮೂಡಬಾರದು ಎಂದು ಅವರು ಒತ್ತಿಹೇಳಿದ್ದಾರೆ.

ನಾಗ್ಪುರ ಸಂಸದರಾದ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೂ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

Tags:    

Similar News