Salman Khan | ಸಲ್ಮಾನ್ ಖಾನ್‌ಗೆ ಮತ್ತೆ ಕೊಲೆ ಬೆದರಿಕೆ: ಓರ್ವನ ಬಂಧನ
ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ರಾಜಸ್ಥಾನದ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.;
Salman Khan Life Threat | ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡು ಹಾರಿಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಜೀವಬೆದರಿಕೆ ಪ್ರಕರಣ ದಾಖಲಾಗಿದ್ದು, ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ರಾಜಸ್ಥಾನದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ರಾಜಸ್ಥಾನದ ಬುಂದಿ ಮೂಲದ ಬನ್ವಾರಿಲಾಲ್ ಲಾತುರ್‌ಲಾಲ್ ಗುಜಾರ್ (25) ಎಂದು ಗುರುತಿಸಲಾಗಿದೆ ಎಂದು ಮುಂಬೈ ಅಪರಾಧ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.
ಯುಟ್ಯೂಬ್ ನಲ್ಲಿ ಬೆದರಿಕೆ
ಗುರ್ಜರ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೋವೊಂದನ್ನು ಅಪ್‌ಲೋಡ್ ಮಾಡಿದ್ದು, ಅದರಲ್ಲಿ 'ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ಮತ್ತು ಇತರ ಗ್ಯಾಂಗ್ ಸದಸ್ಯರು ನನ್ನೊಂದಿಗಿದ್ದಾರೆ ಮತ್ತು ಸಲ್ಮಾನ್ ಖಾನ್ ಅವರು ಇನ್ನೂ ಕ್ಷಮೆ ಕೇಳದ ಕಾರಣ ನಾನು ಅವರನ್ನು ಕೊಲ್ಲಲಿದ್ದೇನೆ' ಎಂಬ ವಿಡಿಯೋ ಇತ್ತು.
ಆರೋಪಿಯು ರಾಜಸ್ಥಾನದ ಹೆದ್ದಾರಿಯೊಂದರಲ್ಲಿ ವಿಡಿಯೋ ಮಾಡಿ ತನ್ನ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ್ದಾನೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ತನಿಖೆಗಾಗಿ ತಂಡವನ್ನು ರಾಜಸ್ಥಾನಕ್ಕೆ ಕಳುಹಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಈ ಸಂಬಂಧ ಮುಂಬೈನ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿ ಗುರ್ಜಾರ್‌ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇದೆಯೇ ಎಂದು ನಾವು ಪರಿಶೀಲಿಸುತ್ತಿದ್ದೇವೆ. 506(2) (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ನಿಬಂಧನೆಗಳು ಸೇರಿದಂತೆ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದರು.
ಪ್ರಕರಣದ ಹಿನ್ನಲೆ
ಏಪ್ರಿಲ್ 14ರ ಮುಂಜಾನೆ ಇಲ್ಲಿನ ಬಾಂದ್ರಾ ಪ್ರದೇಶದಲ್ಲಿರುವ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಮೋಟಾರ್ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಹಲವು ಸುತ್ತು ಗುಂಡು ಹಾರಿಸಿದ್ದರು. ಈ ಪ್ರಕರಣದಲ್ಲಿ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿತ್ತು. ಅವರಲ್ಲಿ ಒಬ್ಬನಾದ ಅನುಜ್ ಥಾಪನ್ ಮೇ 1 ರಂದು ಪೊಲೀಸ್ ಲಾಕ್‌ಅಪ್‌ನಲ್ಲಿ ನೇಣು ಬಿಗಿದುಕೊಂಡಿದ್ದಾನೆ.
ಪ್ರತ್ಯೇಕ ಪ್ರಕರಣದಲ್ಲಿ, ನವಿ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದಕ್ಕೆ ಸಂಬಂಧಿಸಿದಂತೆ ಹರಿಯಾಣದ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್‌ಗಳ ಸದಸ್ಯ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.