Pahalgam Terror Attack | ಕಾಶ್ಮೀರದಲ್ಲಿ ಎನ್ಐಎ ತಂಡ; ಪರಿಹಾರ ಘೋಷಿಸಿದ ಜಮ್ಮು-ಕಾಶ್ಮೀರ ಸರ್ಕಾರ
ಅಮೆರಿಕ ಅಧ್ಯಕ್ಷ ಟ್ರಂಪ್ ಖಂಡನೆ; ಭಾರತದ ಜತೆಗಿರುವ ಭರವಸೆ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ದಾಳಿಯನ್ನು ಖಂಡಿಸಿದ್ದು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮತ್ತು ಭಾರತದ ಜನತೆಗೆ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. "ಕಾಶ್ಮೀರದಿಂದ ಬಂದಿರುವ ಸುದ್ದಿ ತೀವ್ರ ಕಳವಳಕಾರಿಯಾಗಿದೆ. ಭಯೋತ್ಪಾದನೆ ವಿರುದ್ಧ ಭಾರತದೊಂದಿಗೆ ಅಮೆರಿಕ ದೃಢವಾಗಿ ನಿಲ್ಲುತ್ತದೆ," ಎಂದು ಟ್ರಂಪ್ ಹೇಳಿದ್ದಾರೆ.
ಕನ್ನಡಿಗರ ಜತೆ ಮಾತನಾಡಿ ಸಮನ್ವಯ ಚರ್ಚೆ ಮಾಡಿದ ತೇಜಸ್ವಿ ಸೂರ್ಯ
ಇಂದು ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಶಿವಮೊಗ್ಗ ಮೂಲದ ಮಂಜುನಾಥ್ ಅವರ ಪತ್ನಿ ಪಲ್ಲವಿ ಅವರೊಂದಿಗೆ ತಾವು ಮಾತನಾಡಿರುವುದಾಗಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ.
"ಗಾಯಗೊಂಡಿರುವ ಇತರ ಕುಟುಂಬ ಸದಸ್ಯರೊಂದಿಗೂ ಮಾತನಾಡಿದ್ದೇನೆ. ಸ್ಥಳೀಯ ಆಡಳಿತವು ಅವರಿಗೆ ಸಹಾಯ ಮಾಡುತ್ತಿದೆ ಹಾಗೂ ಅವರ ವಾಸ್ತವ್ಯ ಮತ್ತು ಸುರಕ್ಷತೆಗಾಗಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ," ಎಂದವರು ಹೇಳಿದ್ದಾರೆ.
"ನಾನು ಕರ್ನಾಟಕದ ಮುಖ್ಯ ಕಾರ್ಯದರ್ಶಿಯೊಂದಿಗೆ ಮಾತನಾಡಿದ್ದೇನೆ. ಎಲ್ಲರೂ ಸುರಕ್ಷಿತವಾಗಿ ಮನೆಗೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ನಾವು ಸಮನ್ವಯ ಸಾಧಿಸುತ್ತೇವೆ," ಎಂದೂ ಭರವಸೆ ನೀಡಿದ್ದಾರೆ.
ದೇಶಾದ್ಯಂತ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಬಿಗಿ ಭದ್ರತೆ
ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಮುಖ ನಗರಗಳು, ಪ್ರವಾಸಿ ತಾಣಗಳು, ಸ್ಥಾವರಗಳು, ಮಿಲಿಟರಿ ನೆಲೆಗಳು ಸೇರಿದಂತೆ ಹಲವೆಡೆ ಭದ್ರತೆ ಹೆಚ್ಚಿಸಲಾಗಿದೆ.
ಈಗಾಗಲೇ ಕೇಂದ್ರ ಗೃಹ ಮಂತ್ರಾಲಯದಿಂದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಧಿಕೃತ ಸೂಚನೆ ರವಾನೆಯಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲೂ ಪೊಲೀಸ್ ಭದ್ರತೆ ಹೆಚ್ಚಿಸಲು ಸೂಚಿಸಲಾಗಿದೆ.
ಕರ್ನಾಟಕದಲ್ಲೂ ಬೆಂಗಳೂರು, ಮೈಸೂರು ಸೇರಿದಂತೆ ಎಲ್ಲಾ ಪ್ರಮುಖ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೂಚನೆ ನೀಡಿದ್ದಾರೆ.
ಭಯೋತ್ಪಾದಕ ದಾಳಿಗೆ ಭಾರತ ಕುಗ್ಗುವುದಿಲ್ಲ: ಪ್ರಲ್ಹಾದ್ ಜೋಶಿ
ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತ ಕುಗ್ಗುವುದಿಲ್ಲ; ಬದಲಾಗಿ ಭಯೋತ್ಪಾದನೆ ವಿರುದ್ಧ ಹೋರಾಟದ ನಮ್ಮ ಸಂಕಲ್ಪ ಮತ್ತಷ್ಟು ಬಲಗೊಳ್ಳುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ನವದೆಹಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಇಂತಹ ದುಷ್ಟತನದ ವಿರುದ್ಧ ಕೇಂದ್ರ ಸರ್ಕಾರ ಸಮರ್ಥ ಹೋರಾಟ ನಡೆಸಲು ಬದ್ಧವಿದೆ. ಭಯೋತ್ಪಾದನೆಯನ್ನು ನಾವೆಂದೂ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಭಯೋತ್ಪಾದಕ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಅಮಿತ್ ಶಾ ಅವರು ಉನ್ನತ ಮಟ್ಟದ ಸಭೆ ಕರೆದು ಗೃಹ ಕಾರ್ಯದರ್ಶಿ, ಗುಪ್ತಚರ ಬ್ಯೂರೋ ಮತ್ತು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಗಹನ ಚರ್ಚೆ ನಡೆಸಿದ್ದಾರೆ. ಅಲ್ಲದೇ, ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಮತ್ತು ಅಲ್ಲಿನ ಡಿಜಿಪಿ ಜತೆಗೂ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದರು.
ಶಿವಮೊಗ್ಗದ ಉದ್ಯಮಿ ಹತ್ಯೆಗೆ ತೀವ್ರ ಸಂತಾಪ:
ಭಯೋತ್ಪಾದನೆ ದಾಳಿ ವೇಳೆ ಶಿವಮೊಗ್ಗದ ಉದ್ಯಮಿ ಮಂಜುನಾಥ್ ಹತ್ಯೆಗೆ ಸಚಿವ ಜೋಶಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅಲ್ಲದೇ, ಕುಟುಂಬಗಳಿಗೆ ಭಗವಂತ ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ಪ್ರಾರ್ಥಿಸಿದ್ದಾರೆ. ದುಷ್ಕರ್ಮಿಗಳಿಗೆ ತಕ್ಕ ಪಾಠ ಕಲಿಸಲಾಗುತ್ತದೆ ಎಂದೂ ಸಂತೈಸಿದ್ದಾರೆ.
ಕಾಶ್ಮೀರಕ್ಕೆ ತೆರಳುತ್ತಿರುವ ಸಚಿವ ಸಂತೋಷ್ ಲಾಡ್
ಮುಖ್ಯಮಂತ್ರಿಗಳ ಸೂಚನೆಯಂತೆ ಸಚಿವ ಸಂತೋಷ್ ಲಾಡ್ ಅವರು ಕಾಶ್ಮೀರಕ್ಕೆ ತೆರಳುತ್ತಿದ್ದಾರೆ. ಅವರು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತರಾದ ಇಬ್ಬರು ಕನ್ನಡಿಗರು ಸೇರಿದಂತೆ ಇತರ ಗಾಯಾಗಳುಗಳ ತ್ವರಿತ ಚಿಕಿತ್ಸೆ ಹಾಗೂ ಇತರ ಸೌಕರ್ಯಗಳನ್ನು ಒದಗಿಸುವ ಸಂಬಂಧ ಅಲ್ಲಿನ ಸರ್ಕಾರದ ಜತೆ ಸಂಪರ್ಕ ಸಾಧಿಸಲಿದ್ದಾರೆ.
ಭಯೋತ್ಪಾದಕರನ್ನು ಸುಮ್ಮನೆ ಬಿಡುವುದಿಲ್ಲ: ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಯೋತ್ಪಾದಕ ಕೃತ್ಯವನ್ನು ಅತ್ಯಂತ ಹೇಯ ಕೃತ್ಯ ಎಂದು ಖಂಡಿಸಿದ್ದಾರೆ. "ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬ ಸದಸ್ಯರ ನೋವಿನಲ್ಲಿ ನಾವೂ ಭಾಗಿಯಾಗಿದ್ದೇವೆ. ಈ ಹೇಯ ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಸುಮ್ಮನೆ ಬಿಡಲಾಗುವುದಿಲ್ಲ, ಮತ್ತು ದುಷ್ಕರ್ಮಿಗಳ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ," ಎಂದು ಹೇಳಿದ್ದಾರೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಘಟನೆಯ ಬಗ್ಗೆ ವಿವರಿಸಲಾಯಿತು ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಲಾಯಿತು. ಎಲ್ಲಾ ಸಂಸ್ಥೆಗಳೊಂದಿಗೆ ತುರ್ತು ಭದ್ರತಾ ಪರಿಶೀಲನಾ ಸಭೆ ನಡೆಸಲು ಶೀಘ್ರದಲ್ಲೇ ಶ್ರೀನಗರಕ್ಕೆ ತೆರಳುತ್ತೇನೆ ಎಂದು ಅವರು ಹೇಳಿದ್ದಾರೆ.
ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಖಂಡನೆ
ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಭಾರತ ಪ್ರವಾಸದಲ್ಲಿರುವ ನಡುವೆಯೇ ಉಗ್ರರ ದಾಳಿ ನಡೆದಿದೆ. ಈ ನಡುವೆ ಅಮೆರಿದಕ ಅಧ್ಯಕ್ಷರು. “ಭಾರತದ ಜನರೊಂದಿಗೆ ನಾವಿದ್ದೇವೆ, ಮೃತರಿಗಾಗಿ ಪ್ರಾರ್ಥನೆಗಳು,” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಾಶ್ಮೀರಕ್ಕೆ ತೆರಳಿದ ಕರ್ನಾಟಕ ಅಧಿಕಾರಿಗಳ ತಂಡ
ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದರು.
ಸಿಎಂ ಅವರ ಸೂಚನೆ ಮೇರೆಗೆ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಪೊಲೀಸ್ ಅಧಿಕಾರಿಗಳೂ ತೆರಳಿದ್ದಾರೆ.
ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂರೆ ದೆಹಲಿಯ ನಿವಾಸಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ. IPS ಅಧಿಕಾರಿ ಚೇತನ್ ಆರ್ ಮತ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ತೆರಳಿದೆ.
ಪ್ರಧಾನಿ ನರೇಂದ್ರ ಮೋದಿ ಖಂಡನೆ
ಭಯೋತ್ಪಾದಕರ ದುಷ್ಕೃತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.
ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ
ಕರ್ನಾಟಕ ಸರ್ಕಾರವು ಈ ದುರಂತಕ್ಕೆ ತಕ್ಷಣವೇ ಸ್ಪಂದಿಸಿದೆ. ಕರ್ನಾಟಕ ಸರ್ಕಾರವು ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಸಹಾಯವಾಣಿ ಸಂಖ್ಯೆ: +91-9480810012 (ಕರ್ನಾಟಕ ಸರ್ಕಾರದ ಸಂಪರ್ಕ ಕೇಂದ್ರ)
ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಸಹಾಯವಾಣಿ: +91-194-2502278
ಕನ್ನಡಿಗರು ತಮ್ಮ ಸಂಬಂಧಿಕರ ಸುರಕ್ಷತೆಯ ಬಗ್ಗೆ ಮಾಹಿತಿ ಪಡೆಯಲು ಅಥವಾ ಸಹಾಯ ಕೋರಲು ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು.