ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಮಂಗಳವಾರ (ಜೂನ್ 25) ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿಯ ನಿವಾಸದಲ್ಲಿ ನಡೆದ ಇಂಡಿಯ ಒಕ್ಕೂಟದ ಸಭಾ ನಾಯಕರ ಸಭೆ ನಂತರ ರಾಹುಲ್ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ.
ರಾಹುಲ್ ಗಾಂಧಿ ಐದು ಅವಧಿಗೆ ಸಂಸದರಾಗಿದ್ದು, ಪ್ರಸ್ತುತ ಲೋಕಸಭೆಯಲ್ಲಿ ರಾಯ್ ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಮಂಗಳವಾರ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದರು.
ʻಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆಸೋನಿಯಾ ಗಾಂಧಿ ಅವರು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಪತ್ರ ಬರೆದಿದ್ದು, ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ನಿರ್ಧಾರವನ್ನು ತಿಳಿಸಿದ್ದಾರೆ,ʼ ಎಂದು ಪಕ್ಷದ ಹಿರಿಯ ನಾಯಕ ಕೆ.ಸಿ .ವೇಣುಗೋಪಾಲ್ ಸಭೆ ನಂತರ ಸುದ್ದಿಗಾರರಿಗೆ ತಿಳಿಸಿದರು. ಇತರ ನೇಮಕಗಳ ಬಗ್ಗೆ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಅತಿ ದೊಡ್ಡ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ 10 ವರ್ಷಗಳ ನಂತರ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆದುಕೊಂಡಿದೆ.