Wayanad landslide| ವಯನಾಡಿಗೆ ರಾಹುಲ್, ಪ್ರಿಯಾಂಕಾ ನಾಳೆ ಭೇಟಿ
ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರು ಭೂಕುಸಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದರು. ಸಂತ್ರಸ್ತರಿಗೆ ಎಲ್ಲಾ ಸಹಾಯವನ್ನು ಒದಗಿಸುವಂತೆ ಯುಡಿಎಫ್ ಕಾರ್ಯಕರ್ತರನ್ನು ಒತ್ತಾಯಿಸಿದರು.;
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬುಧವಾರ (ಜುಲೈ 31) ಬೆಳಗ್ಗೆ ಭೂಕುಸಿತ ಪೀಡಿತ ವಯನಾಡ್‌ಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ಹೇಳಿವೆ.
ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಭೂಕುಸಿತ ಸಂಭವಿಸಿದ್ದು, 90 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ಮುಂಜಾನೆ ಸಂಭವಿಸಿದ ಭಾರೀ ಮಳೆಯಿಂದ ಭೂಕುಸಿತ ಉಂಟಾಯಿತು.
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಭೂಕುಸಿತದಲ್ಲಿ ಜೀವ ಕಳೆದುಕೊಂಡ ವರಿಗೆ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತರಿಗೆ ಎಲ್ಲಾ ಸಹಾಯವನ್ನು ನೀಡುವಂತೆ ಯುಡಿಎಫ್(ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್) ಕಾರ್ಯಕರ್ತರಿಗೆ ಸೂಚಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ: 17ನೇ ಲೋಕಸಭೆಯಲ್ಲಿ ವಯನಾಡನ್ನು ಪ್ರತಿನಿಧಿಸಿರುವ ರಾಹುಲ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಯನಾಡ್ ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಭರವಸೆ ನೀಡಿದ್ದಾರೆ.
ʻಪ್ರೀತಿಪಾತ್ರರನ್ನು ಕಳೆದುಕೊಂಡಿರುವ ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಸಿಕ್ಕಿಬಿದ್ದಿರುವವರನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಕರೆತರಲಾಗುವುದು ಎಂಬ ಭರವಸೆ ಹೊಂದಿದ್ಧೇನೆ,ʼ ಎಂದು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ʻಕೇರಳ ಮುಖ್ಯಮಂತ್ರಿ ಮತ್ತು ವಯನಾಡ್ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಭರವಸೆ ನೀಡಿದ್ದಾರೆ. ಎಲ್ಲ ಏಜೆನ್ಸಿಗಳೊಂದಿಗೆ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಿಯಂತ್ರಣ ಕೊಠಡಿ ಸ್ಥಾಪಿಸಲು ಮತ್ತು ಪರಿಹಾರ ಕಾರ್ಯಗಳಿಗೆ ಅಗತ್ಯವಿರುವ ಸಹಾಯ ನೀಡುವುದಾಗಿ ಹೇಳಿದ್ದೇನೆ,ʼ ಎಂದು ಬರೆದಿದ್ದಾರೆ.
ಪ್ರಿಯಾಂಕಾ ಸಂತಾಪ: ಮೆಪ್ಪಾಡಿ ಬಳಿ ಭಾರೀ ಭೂಕುಸಿತದಿಂದ ಉಂಟಾದ ವಿನಾಶವನ್ನು ನೋಡಿ ತುಂಬಾ ದುಃಖವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ʻಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಎಲ್ಲರಿಗೂ ನನ್ನ ಸಂತಾಪ ಮತ್ತು ಪ್ರಾರ್ಥನೆಗಳು ಇವೆ. ಎಲ್ಲರನ್ನೂ ಆದಷ್ಟು ಬೇಗ ಸುರಕ್ಷಿತವಾಗಿ ಕರೆತರಲೆಂದು ಪ್ರಾರ್ಥಿಸುತ್ತೇನೆ,ʼ ಎಂದು ಎಕ್ಸ್ ನಲ್ಲಿ ಬರೆದಿದ್ದಾರೆ.
ʻಸರ್ಕಾರ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸಬೇಕೆಂದು ಒತ್ತಾಯಿಸುತ್ತೇನೆ. ಯುಡಿಎಫ್ ಕಾರ್ಯಕರ್ತರು ತಮ್ಮಿಂದಾದ ಎಲ್ಲ ನೆರವು ನೀಡಬೇಕೆಂದು ವಿನಂತಿಸುತ್ತೇನೆ,ʼ ಎಂದು ಬರೆದಿದ್ದಾರೆ.
ನಂತರ ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಸಂತ್ರಸ್ತರ ರಕ್ಷಣೆ ಮತ್ತು ಪುನರ್ವಸತಿಗೆ ಕೇಂದ್ರ ಎಲ್ಲ ರೀತಿಯ ಬೆಂಬಲ ನೀಡಬೇಕೆಂದು ಒತ್ತಾಯಿಸಿದರು. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಮೀಪದ ಸಂಬಂಧಿಕರಿಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಮತ್ತು ಸಾರಿಗೆ ಹಾಗೂ ಸಂವಹನವನ್ನು ಮರುಸ್ಥಾಪಿಸಲು ಕೋರಿದರು.
ರಾಹುಲ್ 2024ರಲ್ಲಿ ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಕ್ಷೇತ್ರದಿಂದ ಗೆದ್ದಿದ್ದಾರೆ. ಆದರೆ, ರಾಯ್ ಬರೇಲಿಯನ್ನು ಪ್ರತಿನಿಧಿಸಲು ನಿರ್ಧರಿಸಿದ್ದಾರೆ. ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ.