ಕೇತಗಾನಹಳ್ಳಿ ಜಮೀನು ಪ್ರಕರಣ: ಸಚಿವ ಹೆಚ್‌ಡಿಕೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸುಪ್ರೀಂ ತಡೆ

ಭೂ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ನೀಡಿರುವ ಆದೇಶ ಜಾರಿಗೊಳಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.;

Update: 2025-07-17 12:53 GMT

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ

ಬಿಡದಿ ಬಳಿ ಕೇತಗಾನಹಳ್ಳಿಯಲ್ಲಿನ ಜಮೀನು ಅತಿಕ್ರಮಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಹೈಕೋರ್ಟ್‌ ನಡೆಸುತ್ತಿರುವ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.

ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಹಾಗೂ  ಪ್ರಸನ್ನ ಬಿ. ವರಾಳೆ ಅವರಿದ್ದ ನ್ಯಾಯಪೀಠವು ಮುಂದಿನ ಆದೇಶದವರೆಗೂ ಕೇಂದ್ರ ಸಚಿವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಬಿಡದಿ ಸಮೀಫದ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಸಚಿವರು ಹಾಗೂ ಇನ್ನಿತರರ ವಿರುದ್ಧದ ಭೂ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ನೀಡಿರುವ ಆದೇಶ ಜಾರಿಗೊಳಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

ಈ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಅರ್ಜಿ ವಿಚಾರಣೆಯಲ್ಲಿ ಭಾಗಿಯಾಗಲು ಹೆಚ್.ಡಿ. ಕುಮಾರಸ್ವಾಮಿಗೆ ಅನುಮತಿ ನೀಡಿತ್ತು. ಇದೇ ವೇಳೆ ಹೈಕೋರ್ಟ್​ನ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಆದೇಶವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು.

ಸರ್ವೋಚ್ಛ ನ್ಯಾಯಾಲಯದಲ್ಲಿ ನ್ಯಾಯಾಂಗ ನಿಂದನೆ ಪ್ರಶ್ನಿಸಿ ತಾವು ಸಲ್ಲಿಸಿರುವ ಅರ್ಜಿ ವಿಚಾರಣೆ ಬಾಕಿ ಇರುವುದರಿಂದ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆಗೆ ತಡೆ ನೀಡುವಂತೆ ಹೆಚ್‌.ಡಿ. ಕುಮಾರಸ್ವಾಮಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಅವರ ಮನವಿ ಪರಿಗಣಿಸಿದ್ದ ನ್ಯಾಯಾಲಯ, ಮಾರ್ಚ್ 27ರವರೆಗೂ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಿ ವಿಚಾರಣೆಯನ್ನು ಮುಂದೂಡಿತ್ತು. ಇದೀಗ ಸುಪ್ರೀಂ ಕೋರ್ಟ್ ಕೂಡ ಕುಮಾರಸ್ವಾಮಿ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಗೆ ತಡೆ ನೀಡಿ ಆದೇಶಿಸಿದೆ.

ಏನಿದು ಪ್ರಕರಣ?

ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಅತಿಕ್ರಮಣ ನಡೆದಿದೆ ಎಂದು  2011ರಲ್ಲಿ ಕರ್ನಾಟಕ ಲೋಕಾಯುಕ್ತದಲ್ಲಿ ದೂರು ಸಲ್ಲಿಸಲಾಗಿತ್ತು. 2020ರಲ್ಲಿ ಸಮಾಜ ಪರಿವರ್ತನಾ ಸಮುದಾಯದ ವತಿಯಿಂದ ಲೋಕಾಯುಕ್ತರ ಆದೇಶದ ಪ್ರಕಾರ ನಡೆದಿರುವ ಅತಿಕ್ರಮಣದ ತನಿಖೆಯನ್ನು ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿಅರ್ಜಿ ಸಲ್ಲಿಸಲಾಗಿತ್ತು. ತನಿಖೆ ನಡೆಸುವುದಾಗಿ ರಾಜ್ಯ ನೀಡಿದ ಭರವಸೆಯ ಆಧಾರದ ಮೇಲೆ ಹೈಕೋರ್ಟ್ 2020 ಜನವರಿ 14ರಂದು ಅರ್ಜಿಯನ್ನು ವಿಲೇವಾರಿ ಮಾಡಿತ್ತು.

ನಂತರದ ದಿನಗಳಲ್ಲಿ 2020 ಜನವರಿ 14ರ ಆದೇಶವನ್ನು ಪಾಲಿಸಿಲ್ಲ ಎಂದು ಆರೋಪಿಸಿ ಪ್ರತಿವಾದಿಗಳು  ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. ಆರಂಭದಲ್ಲಿ ಹೆಚ್‌.ಡಿ. ಕುಮಾರಸ್ವಾಮಿ ಅವರನ್ನು ನ್ಯಾಯಾಂಗ ನಿಂದನೆ ವಿಚಾರಣೆಗೆ ಒಳಪಡಿಸಲಾಗಿದ್ದರೂ, ನಂತರ ಅವರನ್ನು ಸ್ವತಃ ಹೈಕೋರ್ಟ್ ನ್ಯಾಯಾಂಗ ನಿಂದನೆಯಿಂದ ವಿಮುಕ್ತಿಗೊಳಿಸಿತ್ತು.

2021 ಮಾರ್ಚ್‌ 3ರಂದು ಕರ್ನಾಟಕ ಲೋಕಾಯುಕ್ತವು ಔಪಚಾರಿಕವಾಗಿ ತನ್ನ ದೂರನ್ನು ಮುಕ್ತಾಯಗೊಳಿಸಿತು. ಆದಾಗ್ಯೂ, ಹೈಕೋರ್ಟ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳ ಮೂಲಕ ವಿಷಯವನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸಿ ತೆರವು ಕ್ರಮಗಳನ್ನು ಜಾರಿಗೊಳಿಸುವಂತೆ ನಿರ್ದೇಶಿಸಿತು. ಈ ನಿರ್ದೇಶನಗಳ ಅನುಸಾರ, ರಾಮನಗರ ತಾಲೂಕು ತಹಶೀಲ್ದಾರ್ ಹೆಚ್‌.ಡಿ. ಕುಮಾರಸ್ವಾಮಿಗೆ ನೋಟೀಸ್ ಜಾರಿ ಮಾಡಿ ತೆರವು ಪ್ರಕ್ರಿಯೆಯನ್ನು ಪ್ರಾರಂಭಿಸಿದರು.

ಇದನ್ನು ಪ್ರಶ್ನಿಸಿ ಸಚಿವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಮತ್ತು ಎಸ್.ವಿ.ಎನ್. ಭಟ್ಟಿ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ವಿಲೇವಾರಿ ಮಾಡಿ, ಅರ್ಜಿದಾರರಿಗೆ ಹೈಕೋರ್ಟ್ ಮುಂದೆ ಹಾಜರಾಗಲು ಮತ್ತು ವಿಚಾರಣೆಯಿಲ್ಲದೆ ವಿಚಾರಣೆಗೆ ಒಳಪಡುವ ಬಗ್ಗೆ ತಮ್ಮ ಮನವಿ ಸಲ್ಲಿಸಲು ಅವಕಾಶ ನೀಡಿತು.  

ಈ ಮೂಲಕ ಕುಮಾರಸ್ವಾಮಿ ಅವರು ಹೈಕೋರ್ಟ್ ಮುಂದೆ ಅರ್ಜಿ ಸಲ್ಲಿಸಿದ್ದರು.  ಬಳಿಕ ಹೈಕೋರ್ಟ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಲು ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Tags:    

Similar News