ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಭರ್ಜರಿ ಗೆಲುವು
ತಮಿಳುನಾಡಿನವರಾದ ಸಿ.ಪಿ. ರಾಧಾಕೃಷ್ಣನ್ ಅವರು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರಾಗಿದ್ದು, ಪ್ರಸ್ತುತ ಜಾರ್ಖಂಡ್ ಮತ್ತು ಮಹಾರಾಷ್ಟ್ರ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.;
ಉಪ ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗಿರುವ ಸಿ.ಪಿ ರಾಧಾಕೃಷ್ಣನ್ ಹಾಗೂ ಪ್ರಧಾನಿ ಮೋದಿ
ದೇಶದ ನೂತನ ಉಪರಾಷ್ಟ್ರಪತಿಯಾಗಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ. ಮಂಗಳವಾರ ಸಂಸತ್ ಭವನದಲ್ಲಿ ನಡೆದ ಚುನಾವಣೆಯಲ್ಲಿ, ಅವರು ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿದ್ದ ಬಿ. ಸುದರ್ಶನ್ ರೆಡ್ಡಿ ಅವರನ್ನು ಸೋಲಿಸಿ ಜಯಭೇರಿ ಬಾರಿಸಿದರು.
ಹಾಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರ ಅನಿರೀಕ್ಷಿತ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಈ ಚುನಾವಣೆ ಅನಿವಾರ್ಯವಾಗಿತ್ತು. ಮಂಗಳವಾರ ನಡೆದ ಮತದಾನ ಪ್ರಕ್ರಿಯೆಯ ನಂತರ ನಡೆದ ಮತ ಎಣಿಕೆಯಲ್ಲಿ, ಸಿ.ಪಿ. ರಾಧಾಕೃಷ್ಣನ್ ಅವರು 427 ಸಂಸದರ ಮತಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಸುಲಭವಾಗಿ ಗೆಲುವು ಸಾಧಿಸಿದರು. ಈ ಮೂಲಕ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ರಾಜ್ಯಪಾಲರಾಗಿ ಸೇವೆ
ತಮಿಳುನಾಡಿನವರಾದ ಸಿ.ಪಿ. ರಾಧಾಕೃಷ್ಣನ್ ಅವರು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರಾಗಿದ್ದು, ಪ್ರಸ್ತುತ ಜಾರ್ಖಂಡ್ ಮತ್ತು ಮಹಾರಾಷ್ಟ್ರ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಸುದೀರ್ಘ ರಾಜಕೀಯ ಅನುಭವ, ಸರಳ ವ್ಯಕ್ತಿತ್ವ ಮತ್ತು ಸಂಘಟನಾ ಚತುರತೆಯಿಂದ ಗುರುತಿಸಿಕೊಂಡಿರುವ ಅವರು, ಇದೀಗ ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಲಿದ್ದಾರೆ.
ಗಣ್ಯರಿಂದ ಶುಭಾಶಯ
ರಾಧಾಕೃಷ್ಣನ್ ಅವರ ಗೆಲುವು ಖಚಿತವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. "ಸಾರ್ವಜನಿಕ ಜೀವನದಲ್ಲಿ ಅಪಾರ ಅನುಭವ ಹೊಂದಿರುವ ಸಿ.ಪಿ. ರಾಧಾಕೃಷ್ಣನ್ ಅವರ ಮಾರ್ಗದರ್ಶನ ರಾಜ್ಯಸಭೆಗೆ ಲಭಿಸಲಿದೆ. ಅವರ ವಿಜಯಕ್ಕೆ ನನ್ನ ಹಾರ್ದಿಕ ಶುಭಾಶಯಗಳು," ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ರಾಧಾಕೃಷ್ಣನ್ ಅವರು, ಸಂವಿಧಾನದ ಪ್ರಕಾರ ರಾಜ್ಯಸಭೆಯ ಸಭಾಪತಿಯಾಗಿಯೂ ಕಾರ್ಯನಿರ್ವಹಿಸಲಿದ್ದಾರೆ. ಅವರ ಅನುಭವವು ಮೇಲ್ಮನೆಯ ಕಲಾಪಗಳನ್ನು ಸುಗಮವಾಗಿ ಮತ್ತು ಅರ್ಥಪೂರ್ಣವಾಗಿ ನಡೆಸಲು ಸಹಕಾರಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
13 ಸಂಸದರು ಮತದಾನದಿಂದ ದೂರ
ಒಟ್ಟು 788 ಸಂಸದರ ಪೈಕಿ 7 ಸ್ಥಾನಗಳು ಖಾಲಿ ಇವೆ. ಹೀಗಾಗಿ 781 ಸದಸ್ಯರು ಚಲಾಯಿಸಬೇಕಿತ್ತು. ಆದರೆ ಬಿಆರ್‌ಎಸ್‌ನ 4, ಬಿಜೆಡಿಯ 7, ಅಕಾಲಿ ದಳದ 1 ಮತ್ತು 1 ಸ್ವತಂತ್ರ ಸಂಸದರು ಮತದಾನದಿಂದ ದೂರ ಉಳಿದಿದ್ದರು.
ಇಂಡಿ ಒಕ್ಕೂಟದಿಂದ ಶೇ.100 ಮತದಾನ
ವಿರೋಧ ಪಕ್ಷದ ಎಲ್ಲಾ 315 ಸಂಸದರು ಮತದಾನಕ್ಕೆ ಹಾಜರಾಗಿದ್ದಾರೆ. ವಿರೋಧ ಪಕ್ಷಗಳು ಒಗ್ಗಟ್ಟಾಗಿ ನಿಂತಿವೆ. ಅದರ 315 ಸಂಸದರಲ್ಲಿ ಎಲ್ಲರೂ ಮತದಾನಕ್ಕೆ ಹಾಜರಾಗಿದ್ದಾರೆ. ಇದು ಅಭೂತಪೂರ್ವ ಶೇ.100 ಮತದಾನವಾಗಿದೆ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಹೇಳಿದರು.
ತಮಿಳುನಾಡಿನ ಬಿಜೆಪಿಯ ಹಿರಿಯ ನಾಯಕ ಸಿ.ಪಿ ರಾಧಾಕೃಷ್ಣನ್ ಪ್ರಸ್ತುತ ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದಾರೆ. ಅವರ ರಾಜಕೀಯ ಜೀವನವು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಜನ ಸಂಘದೊಂದಿಗಿನ ಅವರ ಸಂಬಂಧದೊಂದಿಗೆ ಪ್ರಾರಂಭವಾಯಿತು.
67 ವರ್ಷದ ಅವರು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅವಧಿಯಲ್ಲಿ ಕೊಯಮತ್ತೂರಿನಿಂದ ಎರಡು ಬಾರಿ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ನಂತರ ಅವರು ತಮಿಳುನಾಡಿನಲ್ಲಿ ಕೇಸರಿ ಪಕ್ಷವನ್ನು ಮುನ್ನಡೆಸಿದ್ದರು.