Loksabha Election 2024 | ಮಂಡ್ಯದಲ್ಲಿ ನಿಲುವು ಪ್ರಕಟಿಸುವೆ ಎಂದ ಸುಮಲತಾ
ಲೋಕಸಭೆ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದ್ದಾರೆ.;
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕಣದಲ್ಲಿರುವ ಮಿತ್ರಪಕ್ಷ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದ್ದಾರೆ. ಆದರೆ, ಮಂಡ್ಯದಲ್ಲೇ ನನ್ನನಿಲುವು ಪ್ರಕಟಿಸುತ್ತೇನೆ ಎಂದು ಬಿಜೆಪಿ ಟಿಕೆಟ್ ವಂಚಿತ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ವಿಜಯೇಂದ್ರ ಅವರು ಸುಮಲತಾ ಅವರ ಮನೆಗೆ ಶುಕ್ರವಾರ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಕೈಗೊಳ್ಳುವಂತೆ ಈ ವೇಳೆ ವಿಜಯೇಂದ್ರ ಅವರು ಸುಮಲತಾ ಅವರಿಗೆ ಮನವಿ ಮಾಡಿದ್ದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಚುನಾವಣೆಯಲ್ಲಿ ಬೆಂಬಲ ನೀಡುವಂತೆ ವಿಜಯೇಂದ್ರ ಕೇಳಿದ್ದಾರೆ. ಮಂಡ್ಯದಲ್ಲಿ ಬೆಂಬಲಿಗರ ಸಭೆ ನಡೆಸುತ್ತೇನೆ. ಅವರೊಂದಿಗೆ ಚರ್ಚಿಸಿದ ಬಳಿಕ ಅಲ್ಲಿಯೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ.
ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸುಮಲತಾ ಅವರು ಕಾಂಗ್ರೆಸ್ ಗೌಪ್ಯ ಬೆಂಬಲ ಪಡೆದು ಎದುರಾಳಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ವಿರುದ್ಧ ಭರ್ಜರಿ ಜಯ ಗಳಿಸಿದ್ದರು. ಬಳಿಕ ಅವರು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದರು. ಈ ಬಾರಿ ಮಂಡ್ಯದಿಂದ ಬಿಜೆಪಿ ಟಿಕೆಟ್ ಮೇಲೆ ಕಣಕ್ಕಿಳಿಯಲು ಭಾರೀ ಪ್ರಯತ್ನ ನಡೆಸಿದ್ದರು. ಆದರೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದಾಗಿ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗಿತ್ತು.
ಇದರಿಂದಾಗಿ ತೀವ್ರ ನಿರಾಶರಾಗಿರುವ ಸುಮಲತಾ ಅವರು, ಸದ್ಯ ಯಾವುದೇ ಪಕ್ಷದೊಂದಿಗೂ ಗುರುತಿಸಿಕೊಳ್ಳದೆ, ರಾಜಕೀಯ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ, ಕಳೆದ ಚುನಾವಣೆಯಲ್ಲಿ ವ್ಯಕ್ತಿಗತ ನಿಂದನೆಯ ಮಟ್ಟಕ್ಕೆ ಇಳಿದಿದ್ದ ಎಚ್ ಡಿ ಕುಮಾರಸ್ವಾಮಿ ಅವರು, ಇದೀಗ ಸುಮಲತಾ ಅವರು ನನಗೆ ಅಕ್ಕನಂತೆ. ಅವರ ಬೆಂಬಲ ಕೋರುತ್ತೇನೆ. ಅವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ಹೇಳಿಕೆ ನೀಡಿದ್ದರು. ಅದಾದ ಬೆನ್ನಲ್ಲೇ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸುಮಲತಾ ಅವರನ್ನು ಭೇಟಿಯಾಗಿ ಎಚ್ ಡಿ ಕೆ ಅವರ ಪರ ಪ್ರಚಾರಕ್ಕೆ ಆಹ್ವಾನಿಸಿದ್ದಾರೆ.