Loksabha Election 2024: ಕಾಂಗ್ರೆಸ್‌ನ 2ನೇ ಪಟ್ಟಿ ಬಿಡುಗಡೆ; ಐವರು ಸಚಿವರ ಮಕ್ಕಳಿಗೆ ಟಿಕೆಟ್

ಕಾಂಗ್ರೆಸ್ ಪಟ್ಟಿಯಲ್ಲಿ ಮಹಿಳಾ ಅಭ್ಯರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ಕಾಂಗ್ರೆಸ್ 17 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯು ರಾಜಕೀಯ ವಲಯದಲ್ಲಿ ಯಾರಿಗೂ ಆಶ್ಚರ್ಯ ತರಿಸಿಲ್ಲ, ಏಕೆಂದರೆ ಈ ಪಟ್ಟಿಯಲ್ಲಿ ಬಹುತೇಕ ನಿರೀಕ್ಷಿತ ಅಭ್ಯರ್ಥಿಗಳ ಹೆಸರುಗಳೇ ಇವೆ. ಇತ್ತೀಚೆಗಷ್ಟೇ ಏಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ಇನ್ನೂ 4 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ.;

Update: 2024-03-21 15:53 GMT

ಕಾಂಗ್ರೆಸ್ 17 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯು ರಾಜಕೀಯ ವಲಯದಲ್ಲಿ ಯಾರಿಗೂ ಆಶ್ಚರ್ಯ ತರಿಸಿಲ್ಲ, ಏಕೆಂದರೆ ಈ ಪಟ್ಟಿಯಲ್ಲಿ ಬಹುತೇಕ ನಿರೀಕ್ಷಿತ ಅಭ್ಯರ್ಥಿಗಳ ಹೆಸರುಗಳೇ ಇವೆ. ಇತ್ತೀಚೆಗಷ್ಟೇ ಏಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ಇನ್ನೂ 4 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ.

ನಿರೀಕ್ಷೆಯಂತೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಲಬುರಗಿ ಕ್ಷೇತ್ರದಿಂದ ಸ್ಪರ್ಧಿಸುತ್ತಿಲ್ಲ. ಅವರ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಸ್ಪರ್ಧಿಸುತ್ತಿದ್ದಾರೆ.

ʼಬಲಿಷ್ಟ ಬಿಜೆಪಿʼ ವಿರುದ್ಧ ಹೋರಾಡಲು ಕಾಂಗ್ರೆಸ್ ತನ್ನ ಕ್ಯಾಬಿನೆಟ್ ಸಚಿವರಲ್ಲಿ ಕನಿಷ್ಠ ಆರು ಜನರನ್ನ ಕಣಕ್ಕಿಳಿಸುತ್ತದೆ ಎಂದು ಊಹಿಸಲಾಗಿತ್ತು. ಆದರೆ, ಸಂಪುಟದ ಯಾವೊಬ್ಬ ಸಚಿವರೂ ಪಟ್ಟಿಯಲ್ಲಿಲ್ಲ. ಮತ್ತೊಂದು ಮಹತ್ವದ ಸಂಗತಿ ಎಂದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಸೇರಿದಂತೆ ಆರು ಮಂದಿ ಮಹಿಳೆಯರು ಚುನಾವಣಾ ಕಣದಲ್ಲಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಅತಿ ಹೆಚ್ಚು ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಪಕ್ಷವು ದಾಖಲೆ ನಿರ್ಮಿಸಿದೆ. ಐವರು ಮಹಿಳೆಯರು ಕಣದಲ್ಲಿದ್ದಾರೆ. ಒಟ್ಟು ಒಂಬತ್ತು ಮಂದಿ ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿದ್ದವು.

ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗ (CCEC) ಗುರುವಾರ ಐದು ರಾಜ್ಯ ಕ್ಯಾಬಿನೆಟ್ ಸಚಿವರ ಮಕ್ಕಳನ್ನು ಒಳಗೊಂಡಂತೆ ಕರ್ನಾಟಕದ 17 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದೆ.

ಸಚಿವರ ಮಕ್ಕಳ ಪಟ್ಟಿ:

ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ, (ಬೆಂಗಳೂರು ದಕ್ಷಿಣ),

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (ಚಿಕ್ಕೋಡಿ),

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ (ಬೆಳಗಾವಿ),

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರ ಪುತ್ರಿ ಸಂಯುಕ್ತ ಪಾಟೀಲ್ (ಬಾಗಲಕೋಟೆ),

ಅರಣ್ಯ ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ್ ಖಂಡ್ರೆ (ಬೀದರ್)



ʼʼಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಸಿಸಿಇಇ ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬಳ್ಳಾರಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇನ್ನೂ ಅಂತಿಮಗೊಳಿಸಿಲ್ಲ, ಏಕೆಂದರೆ ಈ ಕ್ಷೇತ್ರಗಳಿಗೆ ಹೆಚ್ಚಿನ ಟಿಕೆಟ್ ಆಕಾಂಕ್ಷಿಗಳಿದ್ದಾರೆʼʼ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ಕಣವಾಗಿರುವ ಕಲಬುರಗಿಯಲ್ಲಿ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅಭ್ಯರ್ಥಿಯಾಗಲಿದ್ದಾರೆ. ದಾವಣಗೆರೆಗೆ ಹಿರಿಯ ಕಾಂಗ್ರೆಸ್ಸಿಗ ಶಾಮನೂರು ಶಿವಶಂಕರಪ್ಪ ಅವರ ಸೊಸೆ, ಗಣಿ ಮತ್ತು ಭೂವಿಜ್ಞಾನ ಸಚಿವರಾದ ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.

ಈ ಹಿಂದೆ ರಾಜ್ಯಸಭಾ ಸದಸ್ಯರಾಗಿದ್ದ ಬೆಂಗಳೂರಿನ ಐಐಎಂ ಮಾಜಿ ಪ್ರೊಫೆಸರ್ ಎಂವಿ ರಾಜೀವ್ ಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಪಡೆದಿದ್ದು, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಸೆಣಸುತ್ತಿದ್ದಾರೆ. ಈ ಕ್ಷೇತ್ರದಿಂದ ಸಾಕಷ್ಟು ಸ್ಪರ್ಧಿಗಳಿದ್ದರು. ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ಸೇರಿದರೆ, ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರಾಕರಿಸಿದರೆ ಅವರಿಗೆ ಅವಕಾಶ ಸಿಗಲಿದೆ ಎಂದು ಊಹಿಸಲಾಗಿತ್ತು. ಅದೇ ರೀತಿ ಕೃಷ್ಣಪ್ಪ ಅವರ ಪುತ್ರ ಪ್ರಿಯಾ ಕೃಷ್ಣ ಕೂಡ ಈ ಕ್ಷೇತ್ರದ ಟಿಕೆಟ್ ಪಡೆಯಲು ಉತ್ಸುಕರಾಗಿದ್ದರು. ಆದರೆ ಅಂತಿಮವಾಗಿ ಈ ಕ್ಷೇತ್ರದ ಟಿಕೆಟ್ ಪಡೆಯುವಲ್ಲಿ ರಾಹುಲ್ ಗಾಂಧಿ ಅವರ ನಿಕಟವರ್ತಿ ಪ್ರೊ.ರಾಜೇಗೌಡ ಯಶಸ್ವಿಯಾಗಿದ್ದಾರೆ.

ಬೆಂಗಳೂರು ಸೆಂಟ್ರಲ್‌ನಲ್ಲಿ ಪಕ್ಷವು ರಾಜ್ಯಸಭಾ ಮಾಜಿ ಉಪ ಸಭಾಪತಿ ಕೆ ರೆಹಮಾನ್ ಖಾನ್ ಅವರ ಪುತ್ರ ಮನ್ಸೂರ್ ಅಲಿ ಖಾನ್ ಅವರನ್ನು ಕಣಕ್ಕಿಳಿಸಿದೆ.

Tags:    

Similar News