IPL 2025: ಭಾರತ-ಪಾಕ್ ಸಂಘರ್ಷ: ಐಪಿಎಲ್ 2025 ಟೂರ್ನಿ ಅನಿರ್ದಿಷ್ಟಾವಧಿಗೆ ರದ್ದು
ಶುಕ್ರವಾರ ತುರ್ತು ಸಭೆ ನಡೆಸಿದ ಬಳಿಕ ಬಿಸಿಸಿಐ ಈ ನಿರ್ಧಾರವನ್ನು ಪ್ರಕಟಿಸಿದ್ದು, ಇದರಲ್ಲಿ ಆಟಗಾರರು, ಸಿಬ್ಬಂದಿ ಮತ್ತು ಪ್ರೇಕ್ಷಕರ ಸುರಕ್ಷತೆಗೆ ಆದ್ಯತೆ ಎನ್ನಲಾಗಿದೆ.;
ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆಯಾಗಿದೆ! ಭಾರತ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿರುವ ಸೇನಾ ಸಂಘರ್ಷದಿಂದಾಗಿ, ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ 2025 ಟೂರ್ನಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ನಂತರ ಉದ್ಭವಿಸಿದ ಬಿಕ್ಕಟ್ಟು, ಒಟ್ಟಾರೆ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದ್ದು, ಕ್ರಿಕೆಟ್ ಮಂಡಳಿಯನ್ನು ಈ ಅನಿರೀಕ್ಷಿತ ನಿರ್ಧಾರ ತೆಗೆದುಕೊಳ್ಳುವಂತೆ ಮಾಡಿದೆ.
ಶುಕ್ರವಾರ ತುರ್ತು ಸಭೆ ನಡೆಸಿದ ಬಳಿಕ ಬಿಸಿಸಿಐ ಈ ನಿರ್ಧಾರವನ್ನು ಪ್ರಕಟಿಸಿದ್ದು, ಇದರಲ್ಲಿ ಆಟಗಾರರು, ಸಿಬ್ಬಂದಿ ಮತ್ತು ಪ್ರೇಕ್ಷಕರ ಸುರಕ್ಷತೆಗೆ ಆದ್ಯತೆ ಎನ್ನಲಾಗಿದೆ. "ದೇಶವು ಯುದ್ಧದಂತಹ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ ಕ್ರಿಕೆಟ್ ಆಯೋಜಿಸುವುದು ನೈತಿಕವಾಗಿ ಸರಿಯಲ್ಲ" ಎಂದು ಹಿರಿಯ ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ. ಮೇ 25ರಂದು ಮುಕ್ತಾಯಗೊಳ್ಳಬೇಕಿದ್ದ ಈ ಬಾರಿಯ ಐಪಿಎಲ್ ಸೀಸನ್ ಈಗ ಸಂಪೂರ್ಣವಾಗಿ ಅನಿಶ್ಚಿತತೆಯಲ್ಲಿ ಸಿಲುಕಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ನಂತರವಷ್ಟೇ ಉಳಿದ ಪಂದ್ಯಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಂಡಳಿ ತಿಳಿಸಿದೆ.
ಭದ್ರತಾ ಪರಿಸ್ಥಿತಿಯ ಗಂಭೀರತೆಗೆ ಸಾಕ್ಷಿಯಾಗಿ, ಮೇ 8 ರಂದು ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಸಮೀಪದ ಜಮ್ಮು ಮತ್ತು ಪಠಾಣ್‌ಕೋಟ್‌ನಲ್ಲಿ ವಾಯು ದಾಳಿ ಎಚ್ಚರಿಕೆಗಳು ಬಂದ ಕಾರಣ ಅರ್ಧಕ್ಕೆ ನಿಲ್ಲಿಸಲಾಯಿತು. ತಕ್ಷಣವೇ ಪ್ರೇಕ್ಷಕರನ್ನು ಮೈದಾನದಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಈ ಘಟನೆ ಟೂರ್ನಿಯನ್ನು ಮುಂದುವರಿಸುವ ಬಗ್ಗೆ ಗಂಭೀರ ಆತಂಕಗಳನ್ನು ಹುಟ್ಟುಹಾಕಿತ್ತು.
ಆರಂಭದಲ್ಲಿ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಅವರು, ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ನಿಗದಿಯಂತೆ ನಡೆಯಲಿದೆ ಎಂದಿದ್ದರು. ಆದರೆ, ಪರಿಸ್ಥಿತಿ ಹದಗೆಟ್ಟ ಕಾರಣ ನಿರ್ಧಾರ ಬದಲಿಸಬೇಕಾಯಿತು. "ನಾವು ಪರಿಸ್ಥಿತಿಯನ್ನು ಪರಾಮರ್ಶಿಸುತ್ತಿದ್ದೇವೆ ಮತ್ತು ಕ್ಷಣಕ್ಷಣಕ್ಕೆ ಬದಲಾಗುತ್ತಿದೆ. ಸರ್ಕಾರ ಹಾಗೂ ಲಾಜಿಸ್ಟಿಕ್ಸ್ ಸಮಸ್ಯೆಗಳ ಆಧಾರದ ಮೇಲೆ ನಿರ್ಧಾರ ಕೈಗೊಳ್ಳುತ್ತೇವೆ" ಎಂದು ಧುಮಾಲ್ ಹೇಳಿದ್ದಾರೆ.
ವಿದೇಶಿ ಆಟಗಾರರು ನಿರಾಳ
ಐಪಿಎಲ್ನಲ್ಲಿ ಆಡುತ್ತಿದ್ದ ಹಲವಾರು ವಿದೇಶಿ ಆಟಗಾರರು ಮತ್ತು ತರಬೇತುದಾರರು ಈಗಾಗಲೇ ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಬಗ್ಗೆ ಆತಂಕಗೊಂಡಿದ್ದರು. ಟೂರ್ನಿ ಸ್ಥಗಿತಗೊಂಡಿರುವುದರಿಂದ ಅವರೆಲ್ಲರೂ ಸುರಕ್ಷಿತವಾಗಿ ತಮ್ಮ ದೇಶಗಳಿಗೆ ಮರಳಬಹುದು. ಕ್ರಿಕೆಟ್ ಆಸ್ಟ್ರೇಲಿಯಾ ಸೇರಿದಂತೆ ವಿವಿಧ ದೇಶಗಳ ಕ್ರಿಕೆಟ್ ಮಂಡಳಿಗಳು ತಮ್ಮ ಆಟಗಾರರ ಬಗ್ಗೆ ಕಳವಳ ವ್ಯಕ್ತಪಡಿಸಿ ಭಾರತದಲ್ಲಿರುವ ತಮ್ಮ ಸಿಬ್ಬಂದಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿಕೆ ನೀಡಿದ್ದವು.
ಸದ್ಯಕ್ಕೆ ಐಪಿಎಲ್ 2025 ಅನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಮಂಡಳಿಯು ಸರ್ಕಾರಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ದೇಶದ ಭದ್ರತಾ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದೆ.